ADVERTISEMENT

ಪ್ರತ್ಯೇಕ ಜಿಲ್ಲಾಸ್ಪತ್ರೆಗೆ ಸಮಿತಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 7 ಜನವರಿ 2021, 7:43 IST
Last Updated 7 ಜನವರಿ 2021, 7:43 IST

ಕಲಬುರ್ಗಿ: ಇಲ್ಲಿನ ಗುಲಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್) ಆರಂಭವಾದ ಬಳಿಕ ಜಿಲ್ಲಾಸ್ಪತ್ರೆಯ ಎಲ್ಲ ಸಿಬ್ಬಂದಿಯನ್ನು ಜಿಮ್ಸ್ ಗೆ ಬಳಸಿಕೊಳ್ಳಲಾಗಿದ್ದು, ಪ್ರತ್ಯೇಕ ಜಿಲ್ಲಾಸ್ಪತ್ರೆ ಆರಂಭಿಸಬೇಕು ಎಂದು ವಿಧಾನಸಭೆ ಭರವಸೆಗಳ ಸಮಿತಿ ಸದಸ್ಯರೂ ಆದ ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ‌ಪಾಟೀಲ ರೇವೂರ ಅವರು ಸಮಿತಿ ಅಧ್ಯಕ್ಷ ರಘುಪತಿ ಭಟ್ ಅವರಿಗೆ ಒತ್ತಾಯಿಸಿದರು.

ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಆಸ್ಪತ್ರೆ ಸಿಬ್ಬಂದಿಯ ಸೇವೆ ಜಿಮ್ಸ್ ಗೆ ಬಳಕೆಯಾಗುತ್ತಿದೆ. ಇದರಿಂದ ರಾಷ್ಟೀಯ ಆರೋಗ್ಯ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲು ಆಗುತ್ತಿಲ್ಲ. ಇದಕ್ಕಾಗಿ ಜಾಗ ಗುರುತಿಸಲಾಗಿದ್ದು, ಈ ಬಗ್ಗೆ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದರು.

ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ ಶಾಖೆ ಹಾಗೂ ನಿಮ್ಹಾನ್ಸ್ ಘಟಕವನ್ನು ಕಲಬುರ್ಗಿಯಲ್ಲಿ ಆರಂಭಿಸಬೇಕು ಎಂದು ಹೇಳಿದರು.

ADVERTISEMENT

ಜಿಲ್ಲೆ ಶಸ್ತ್ರ ಚಿಕಿತ್ಸಕ ಡಾ.ಅಂಬಾರಾಯ ರುದ್ರವಾಡಿ ಮಾತನಾಡಿ, ಜಿಲ್ಲಾಸ್ಪತ್ರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ‌ಇಲಾಖೆ ಅಡಿ ಬರುವ ಜಿಲ್ಲಾಸ್ಪತ್ರೆ ಸಿಬ್ಬಂದಿಗೆ ಸಕಾಲಕ್ಕೆ ಸಂಬಳ ಆಗುತ್ತಿಲ್ಲ. ಇದನ್ನು ಸರಿಪಡಿಸಿ ಎಂದು ಮನವಿ ಮಾಡಿದರು.

ಭರವಸೆಗಳ ಸಮಿತಿ ಸದಸ್ಯರಾದ ಡಾ.ಶ್ರೀನಿವಾಸ್, ಸಂಜೀವ ಮಠಂದೂರ, ಹರೀಶ್ ‌ಪೂಂಜ, ಸೋಮನಗೌಡ ಪಾಟೀಲ ಹಾಜರಿದ್ದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ, ಜಿಮ್ಸ್ ನಿರ್ದೇಶಕಿ ಡಾ.ಕವಿತಾ ಪಾಟೀಲ, ಜಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ.ಶಫಿಯೊದ್ದೀನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.