ADVERTISEMENT

ವಿಷನ್ 2050 ಸಮಿತಿ ರಚನೆಗೆ ಸೂಚನೆ

ಜಿಲ್ಲಾಧಿಕಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಪತ್ರ

​ಪ್ರಜಾವಾಣಿ ವಾರ್ತೆ
Published 10 ಜೂನ್ 2021, 5:20 IST
Last Updated 10 ಜೂನ್ 2021, 5:20 IST

ಕಲಬುರ್ಗಿ: ಜಿಲ್ಲೆಯನ್ನು ಮುಂದಿನ 30 ವರ್ಷದೊಳಗೆ ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿಪಡಿಸಲು ಜಾರಿಗೆ ತರಲು ಉದ್ದೇಶಿಸಿರುವ ‘ಕಲಬುರ್ಗಿ ವಿಜನ್ 2050’ ಅನುಷ್ಠಾನಕ್ಕೆ ಸಮಿತಿ ರಚನೆ ಮಾಡುವಂತೆ ಗಣಿ ಮತ್ತು ಭೂವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಅವರು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರಿಗೆ ಸೂಚಿಸಿದ್ದಾರೆ.

ಈ ಸಂಬಂಧ ಪತ್ರ ಬರೆದಿರುವ ನಿರಾಣಿ, ‘ತಕ್ಷಣ ಸಮಿತಿಗಳನ್ನು ರಚಿಸ ಬೇಕು. ದೇಶದಲ್ಲೇ ಮೊದಲ ಬಾರಿಗೆ ‘ಕಲಬುರ್ಗಿ ವಿಜನ್–2050’ ಎಂಬ ವಿನೂತನ ಯೋಜನೆ ರೂಪಿಸಲಾಗಿದ್ದು, ಕೂಡಲೇ ಕಾರ್ಯಗತ ಆಗಬೇಕು’ ಎಂದಿದ್ದಾರೆ.

‘ಡಾ. ನಂಜುಂಡಪ್ಪ ವರದಿ ಪ್ರಕಾರ, ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಅಂಟಿಸಿಕೊಂಡಿರುವ ಜಿಲ್ಲೆ ಯನ್ನು ಮುಂದಿನ 30 ವರ್ಷದೊಳಗೆ ಪ್ರತಿಯೊಂದು ಕ್ಷೇತ್ರ ದಲ್ಲೂ ಸರ್ವಾಂಗೀಣವಾಗಿ ಅಭಿವೃದ್ಧಿ ಪಡಿಸಬೇಕು. ಈ ಹಿನ್ನೆಲೆಯಲ್ಲಿ ‌ಸಮಿತಿ ರಚನೆಯಾದರೆ ಹೆಚ್ಚಿನ ಅನುಕೂಲವಾಗಲಿದೆ’ ಎಂದು ಅವರು ತಿಳಿಸಿದ್ದಾರೆ.

ADVERTISEMENT

‘ಆರೋಗ್ಯ, ಶಿಕ್ಷಣ, ಕೃಷಿ, ಕೈಗಾರಿಕೆ, ಗ್ರಾಮೀಣಾಭಿವೃದ್ಧಿ ಮುಂತಾದ ಕ್ಷೇತ್ರಗಳ 15 ಸಮಿತಿಗಳನ್ನು ರಚಿಸಬೇಕು. ಈ ಸಮಿತಿಗಳಲ್ಲಿ ಸ್ಥಳೀಯ ಶಾಸಕರು, ನಿವೃತ್ತಿ ಹೊಂದಿದವರು, ಆಯಾ ಕ್ಷೇತ್ರಗಳಲ್ಲಿ ಅನುಭವ–ಪರಿಣತಿ ಹೊಂದಿರುವವರನ್ನು ಸೇಪ೯ಡೆ ಮಾಡಿಕೊಳ್ಳಬೇಕು’ ಎಂದು ಸಲಹೆ ಮಾಡಿದ್ದಾರೆ.

‘ಜಿಲ್ಲಾ, ತಾಲ್ಲೂಕು ಮಟ್ಟದ ‌ಆಯಾ ಇಲಾಖೆ ಹಿರಿಯ ಅಧಿಕಾರಿಗಳನ್ನು ಆಯಾ ಸಮಿತಿಗೆ ಸದಸ್ಯ ಕಾರ್ಯ ದರ್ಶಿಗಳನ್ನಾಗಿ ಮಾಡಬೇಕು. ಈ ಎಲ್ಲಾ ಸಮಿತಿಯ ಅಧ್ಯಕ್ಷರು ಪ್ರಧಾನ ಸಮಿತಿ ಸದಸ್ಯರಾಗಿರುತ್ತಾರೆ. ಪ್ರಧಾನ ಸಮಿತಿ ಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರನ್ನು ಸೇರಿಸಿಕೊಳ್ಳಬೇಕು’ ಎಂದಿದ್ದಾರೆ.

‘ಜಿಲ್ಲೆಯಲ್ಲಿನ ಸಂಪನ್ಮೂಲಗಳನ್ನು ಬಳಕೆ ಮಾಡಿಕೊಂಡು ಗುಡಿ, ಸಣ್ಣ ಮತ್ತು ಬೃಹತ್ ಕೈಗಾರಿಕೆಗಳ ಪುನಶ್ಚೇತನಕ್ಕೆ ಒತ್ತು ನೀಡಬೇಕು. ಯಾವುದೇ ಫಲಾಪೇಕ್ಷೆ ಬಯಸದ ಜಿಲ್ಲೆಯ ಬುದ್ಧಿಜೀವಿಗಳನ್ನು ಇದರಲ್ಲಿ ತೊಡಗಿಸಿಕೊಳ್ಳಬೇಕು’ ಎಂದಿದ್ದಾರೆ.

ಜಿಲ್ಲಾಧಿಕಾರಿ ಸಭೆ: ಸಚಿವರು ಪತ್ರ ಬರೆಯುತ್ತಿದ್ದಂತೆಯೇ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಜಿ.ಪಂ. ಸಿಇಓ ಡಾ. ದಿಲೀಷ್ ಶಶಿ, ಪಾಲಿಕೆ ಆಯುಕ್ತ ಸ್ನೇಹಲ್ ಲೋಖಂಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರ ವಣಿಕ್ಯಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.