ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿರುವುದು
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಕಲಬುರಗಿ ಹಾಗೂ ಬೆಂಗಳೂರಿನ ಸದಾಶಿವನಗರ ಠಾಣೆಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮಹಾರಾಷ್ಟ್ರದ ಲಾತೂರ್‌ನಲ್ಲಿ ಬಂಧಿಸಿದ್ದಾರೆ.
ಮಹಾರಾಷ್ಟ್ರದ ಸೊಲ್ಲಾಪುರದ ದಾನಪ್ಪ ನರೋಣೆ ಅಲಿಯಾಸ್ ದಾನೇಶ್ (40) ಬಂಧಿತ ಆರೋಪಿ.
‘ಆರೋಪಿಯನ್ನು ಲಾತೂರ್‌ನಲ್ಲಿ ಬಂಧಿಸಿ ಬೆಂಗಳೂರಿಗೆ ಕರೆ ತರಲಾಗಿದೆ. ಶುಕ್ರವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆದುಕೊಳ್ಳಲಾಗುವುದು. ಆರೋಪಿ ಚಾಕೊಲೇಟ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆಯೇ ದಾನಪ್ಪ ಅವರು ತಲೆಮರೆಸಿಕೊಂಡಿದ್ದರು. ಮೊಬೈಲ್ ಲೊಕೇಶನ್ ಆಧರಿಸಿ ಆರೋಪಿಯಿದ್ದ ಸ್ಥಳವನ್ನು ಪತ್ತೆಹಚ್ಚಿ ಬಂಧಿಸಲಾಯಿತು’ ಎಂದು ಪೊಲೀಸ್ ಮೂಲಗಳು ಹೇಳಿವೆ.
ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವಂತೆ ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಆ ವಿಚಾರವಾಗಿ ದಾನಪ್ಪ ಅವರು ಸಚಿವರಿಗೆ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ್ದರು ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.