ADVERTISEMENT

‘ಜೇವರ್ಗಿ: ಶೈಕ್ಷಣಿಕ ಅಭಿವೃದ್ಧಿಗೆ ಆದ್ಯತೆ’

₹ 13 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2020, 3:28 IST
Last Updated 24 ನವೆಂಬರ್ 2020, 3:28 IST
ಜೇವರ್ಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ನಿರ್ಮಿಸಿದ ವಿವಿಧ ನೂತನ ಕಟ್ಟಡಗಳನ್ನು ಸೋಮವಾರ ಶಾಸಕ ಡಾ.ಅಜಯಸಿಂಗ್ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಬಸವರಾಜ ಕೊಂಬಿನ್ ಇದ್ದಾರೆ
ಜೇವರ್ಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ನಿರ್ಮಿಸಿದ ವಿವಿಧ ನೂತನ ಕಟ್ಟಡಗಳನ್ನು ಸೋಮವಾರ ಶಾಸಕ ಡಾ.ಅಜಯಸಿಂಗ್ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಬಸವರಾಜ ಕೊಂಬಿನ್ ಇದ್ದಾರೆ   

ಜೇವರ್ಗಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿಗೆ ಕಳೆದ 4 ವರ್ಷದಲ್ಲಿ ₹ 13 ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದೆ. ನಿಗದಿತ ಅವಧಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ಶಾಸಕ ಡಾ. ಅಜಯಸಿಂಗ್ ಹೇಳಿದರು.

ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಜೇವರ್ಗಿ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಾಲೇಜು ಆವರಣದಲ್ಲಿ ನಿರ್ಮಿಸಿದ ವಿವಿಧ ನೂತನ ಕಟ್ಟಡಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

₹ 2 ಕೋಟಿ ಅಂದಾಜು ವೆಚ್ಚದಲ್ಲಿ ಕಾಲೇಜಿನಲ್ಲಿ ಸುಸಜ್ಜಿತ ಹೈಟೆಕ್ ಗ್ರಂಥಾಲಯ ನಿರ್ಮಿಸಲಾಗಿದೆ. 1990ರಲ್ಲಿ ವಿರೇಂದ್ರ ಪಾಟೀಲ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ಅವರು ಮುತುವರ್ಜಿ ವಹಿಸಿ ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. 1994ರಲ್ಲಿ ಅಂದಿನ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಮುಖ್ಯಮಂತ್ರಿಯಾಗಿದ್ದ ಕಾಲೇಜು ಕಟ್ಟಡ ಕಾಮಗಾರಿ ಉದ್ಘಾಟಿಸಲಾಗಿತ್ತು. ಜೇವರ್ಗಿ ಪಟ್ಟಣದಲ್ಲಿ ಮಾದರಿ ಕಾಲೇಜು ನಿರ್ಮಾಣ ಮಾಡುವ ಧರ್ಮಸಿಂಗ್ ಅವರ ಕನಸು ಇಂದು ನನಸಾಗಿದೆ ಎಂದು ತಿಳಿಸಿದರು.

ADVERTISEMENT

ಕಲ್ಯಾಣ ಕರ್ನಾಟಕ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಣ ಅವಶ್ಯಕ. ಆ ನಿಟ್ಟಿನಲ್ಲಿ ಜೇವರ್ಗಿ ತಾಲ್ಲೂಕಿನಲ್ಲಿ ಗುಣಮಟ್ಟದ ಶಿಕ್ಷಣ ಕೊಡಿಸುವ ಉದ್ದೇಶದಿಂದ ಶಾಲಾ, ಕಾಲೇಜುಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಹೆಚ್ಚಿನ ಆದ್ಯತೆ ನೀಡಲಾಗಿದೆ. ₹ 4.31 ಕೋಟಿ ವೆಚ್ಚದಲ್ಲಿ ವಿಜ್ಞಾನ ವಿಭಾಗದ ವರ್ಗ ಕೋಣೆಗಳು, ಸಭಾಂಗಣ, 3 ಪ್ರಯೋಗಾಲಯ ಸೇರಿದಂತೆ ಶೌಚಾಲಯ, ಗಣಕ ಯಂತ್ರ ಕೋಣೆ, ವಿಶ್ರಾಂತಿ ಕೋಣೆ ಸೇರಿದಂತೆ ಇತರೆ ಸೌಲಭ್ಯ ಕಲ್ಪಿಸಲಾಗಿದೆ. ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಸ್ತುತ 2,350 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ ಎಂದರು.

ಜೇವರ್ಗಿ ತಾಲ್ಲೂಕನ್ನು ಶೈಕ್ಷಣಿಕವಾಗಿ ಮುಂದೆ ತರುವ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಅಜಯಸಿಂಗ್ ಹೇಳಿದರು.

ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಸವರಾಜ ಕೊಂಬಿನ್ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಂದ್ರಶೇಖರ ಹರನಾಳ, ರಾಜಶೇಖರ ಸೀರಿ, ಸುದರ್ಶನ್ ಆಲಬಾಳ, ಕಾಶಿರಾಯಗೌಡ ಯಲಗೋಡ, ಶ್ರೀಮಂತ ಧನಕರ್, ಅಬ್ದುಲ್ ಮಾಜೀದ್ ಗಿರಣಿ, ಅಬ್ದುಲ್ ವಾಹೀದ್ ಗಿರಣಿ, ರವೀಂದ್ರ ಕೋಳಕೂರ, ಸೈಯದ್ ಫಯಾಜ್ ಜಮಾದಾರ, ಮಹಿಬೂಬ ಸಾಬ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.