ಔರಾದ್: ಕಳೆದ ಎರಡು ವರ್ಷಕ್ಕೆ ಹೋಲಿಸಿದರೆ ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಕಡಿಮೆಯಾಗಿದ್ದು, ಅಧಿಕಾರಿಗಳು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಶಾಸಕ ಪ್ರಭು ಚವಾಣ್ ಸೂಚಿಸಿದರು.
ಪಟ್ಟಣದ ಆದರ್ಶ ವಿದ್ಯಾಲಯದಲ್ಲಿ ಈಚೆಗೆ ನಡೆದ ಪ್ರಸಕ್ತ ಸಾಲಿನ ಶಾಲಾ ಆರಂಭದ ಸಿದ್ಧತಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
‘ತಾಲ್ಲೂಕಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇ 80ರ ಮೇಲೆ ಹೋಗಿತ್ತು. ಆದರೆ ಬರುತ್ತಾ ಕಡಿಮೆಯಾಗುತ್ತಿದ್ದು, ಸರಿಯಾದ ಬೆಳವಣಿಗೆ ಅಲ್ಲ. ಎಲ್ಲಿ ಸಮಸ್ಯೆ ಆಗುತ್ತಿದೆ ಎಂಬುದನ್ನು ಪತ್ತೆ ಮಾಡಿ ಸರಿ ಪಡಿಸಬೇಕು. ಇದೇ ರೀತಿ ಫಲಿತಾಂಶ ಕುಸಿದರೆ ಸರ್ಕಾರಿ ಶಾಲೆಗಳು ವಿಶ್ವಾಸ ಕಳೆದುಕೊಳ್ಳುತ್ತವೆ. ಇದಕ್ಕೆ ಶಿಕ್ಷಕರು ಹಾಗೂ ಅಧಿಕಾರಿಗಳು ಹೊಣೆಯಾಗಬೇಕಾಗುತ್ತದೆ’ ಎಂದು ಹೇಳಿದರು.
‘ಶಿಕ್ಷಕರು ಶಾಲೆಗೆ ಗೈರಾಗುವುದು, ಪಾಠ ಮಾಡದೇ ಸಮಯ ವ್ಯರ್ಥ ಮಾಡುವುದು, ಮದ್ಯಪಾನ ಮಾಡಿ ಶಾಲೆಗೆ ಹಾಜರಾಗುವುದು ಸೇರಿದಂತೆ ಸಾಕಷ್ಟು ದೂರುಗಳಿವೆ. ಈ ಬಗ್ಗೆ ಕಾಳಜಿ ವಹಿಸಬೇಕು’ ಎಂದು ಸಲಹೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜೆ. ರಂಗೇಶ ಮಾತನಾಡಿ,‘ಎಸ್ಎಸ್‌ಎಲ್‌ಸಿ ಫಲಿತಾಂಶದಲ್ಲಿ ಕಡಿಮೆಯಾಗಿದೆ. ಆದರೆ ಒಟ್ಟಾರೆ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ’ ಎಂದು ಹೇಳಿದರು.
ಕ್ಷೇತ್ರ ಸಮನ್ವಯಾಧಿಕಾರಿ ಪ್ರಕಾಶ ರಾಠೋಡ್, ವಿವಿಧ ಶಾಲೆ ಮುಖ್ಯ ಶಿಕ್ಷಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.