ADVERTISEMENT

ಕಲಬುರ್ಗಿಗೆ ಹೆಚ್ಚಿನ ಕೋವಿಡ್ ಲಸಿಕೆ ಕೊಡಿಸಲು ಯತ್ನ: ಸಚಿವ ಮುರುಗೇಶ ನಿರಾಣಿ

ಆನ್‌ಲೈನ್‌ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಭರವಸೆ

​ಪ್ರಜಾವಾಣಿ ವಾರ್ತೆ
Published 23 ಮೇ 2021, 11:54 IST
Last Updated 23 ಮೇ 2021, 11:54 IST
ಮುರುಗೇಶ ನಿರಾಣಿ
ಮುರುಗೇಶ ನಿರಾಣಿ   

ಕಲಬುರ್ಗಿ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಹೆಚ್ಚಿನ ಪ್ರಮಾಣದಲ್ಲಿ ಜಿಲ್ಲೆಗೆ ಲಸಿಕೆ ಹಂಚಿಕೆ ಮಾಡಲು ಪ್ರಯತ್ನಿಸಲಾಗುವುದು’ ಎಂದು ಗಣಿ ಮತ್ತು ಭೂ ವಿಜ್ಞಾನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಹೇಳಿದರು.

ಭಾನುವಾರ ಜಿಲ್ಲಾಡಳಿತದ ಅಧಿಕಾರಿಗಳು ಮತ್ತು ಜಿಲ್ಲೆಯ ಸಂಸದ, ಶಾಸಕರೊಂದಿಗೆ ಆನ್‌ಲೈನ್‌ ಮೂಲಕ ಸಂವಾದ ನಡೆಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಲಸಿಕೆ ಕೊರತೆ ಹೆಚ್ಚಿದೆ. ಇದನ್ನು ಪರಿಹರಿಸಲು ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದರು.

‘ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ತೀವ್ರಗತಿಯಲ್ಲಿ ಸೋಂಕು ಹರಡುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಲಾಕ್ ಡೌನ್ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಜೊತೆಗೆ ಕೋವಿಡ್ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗೆ ಸ್ಥಳಾಂತರ‌ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು’ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರಿಗೆ ನಿರ್ದೇಶನ ನೀಡಿದರು.

ADVERTISEMENT

ಡಿ.ಸಿ‌ ಜ್ಯೋತ್ಸ್ನಾ ಮಾತನಾಡಿ, ‘ಎಲ್ಲಾ ತಹಶೀಲ್ದಾರರಿಗೆ ಪೊಲೀಸರ ಸಹಕಾರದೊಂದಿಗೆ ಕೋವಿಡ್ ಶಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗೆ ಸ್ಥಳಾಂತರಕ್ಕೆ ಸೂಚಿಸಲಾಗಿದೆ. ಸ್ಥಳಾಂತರ ಪ್ರಕ್ರಿಯೆ ಪ್ರಗತಿಯಲ್ಲಿದೆ’ ಎಂದರು.

ಜಿಲ್ಲೆಯ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಿಗೆ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆ ಕುರಿತಂತೆ ರಾಜ್ಯ ಸರ್ಕಾರದಿಂದಲೇ ಅಗತ್ಯ ಉಪಕರಣಗಳನ್ನು ಖರೀದಿಸಿ ಜಿಲ್ಲೆಗಳಿಗೆ ಸರಬರಾಜು ಮಾಡಲಾಗುವುದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಆರೋಗ್ಯ ಇಲಾಖೆ ಆಯುಕ್ತರು ತಿಳಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಸಚಿವರ ಗಮನಕ್ಕೆ ತಂದರು.

ಮರಳು ಮಾಫಿಯಾಗೆ ಕಡಿವಾಣ: ಅಫಜಲಪುರ ತಾಲ್ಲೂಕಿನಲ್ಲಿ ನಡೆಯುವ ಅಕ್ರಮ‌ ಮರಳು ದಂಧೆಗೆ ಕಡಿವಾಣ ಹಾಕಬೇಕು ಎಂದು ಶಾಸಕ ಎಂ.ವೈ. ಪಾಟೀಲ ಕೋರಿದರು. ಈ ದಂಧೆಗೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ಸೂಚಿಸುವೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

ವಿ.ವಿ.ಜ್ಯೋತ್ಸ್ನಾ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಸೋಂಕು ಇಳಿಮುಖವಾಗುತ್ತಿದೆ. ಪ್ರಸ್ತುತ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳು 5638ಕ್ಕೆ ಇಳಿಮುಖವಾಗಿದ್ದಲ್ಲದೇ, ಐಸಿಯು, ಆಮ್ಲಜನಕ ಬೆಡ್ ಖಾಲಿ ಇವೆ. ಗ್ರಾಮೀಣ ಭಾಗದಲ್ಲಿ ಸೋಂಕು ಹೆಚ್ಚಾಗಿ ಕಾಣುತ್ತಿದ್ದು, ನಿಯಂತ್ರಣಕ್ಕೆ ಜನರ ಸಹಕಾರ ಅತ್ಯಗತ್ಯವಾಗಿದೆ. ಜಿಲ್ಲೆಯಲ್ಲಿ ಆಮ್ಲಜನಕ ಘಟಕ ಸ್ಥಾಪನೆ, ಟ್ಯಾಂಕರ್ ಮತ್ತು ಸಾಂದ್ರಕಗಳ ಖರೀದಿ ಕುರಿತಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಂದಾಜು ಪಟ್ಟಿ ಸಲ್ಲಿಸಿದ್ದು, ಸೋಮವಾರವೇ ಟೆಂಡರ್ ಕರೆಯಲಾಗುವುದು ಎಂದರು.

ವಿಧಾನ ಪರಿಷತ್ ಸದಸ್ಯರಾದ ಶಶೀಲ್‌ ಜಿ. ನಮೋಶಿ, ಬಿ.ಜಿ.ಪಾಟೀಲ, ಸುನೀಲ್ ವಲ್ಯಾಪುರೆ ಮಾತನಾಡಿದರು.

ಕಲ್ಯಾಣ‌ ಕರ್ನಾಟಕ ಪ್ರದೇಶಾಭಿವೃದ್ಧಿ‌ ಮಂಡಳಿಯ ಅಧ್ಯಕ್ಷ ಹಾಗೂ ಕಲಬುರ್ಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಹಾಗೂ ಸೇಡಂ ಶಾಸಕ ರಾಜಕುಮಾರ್ ಪಾಟೀಲ ತೆಲ್ಕೂರ, ಶಾಸಕರಾದ ಬಸವರಾಜ ಮತ್ತಿಮೂಡ, ಸುಭಾಷ ಗುತ್ತೇದಾರ, ಪೊಲೀಸ್ ಕಮಿಷನರ್ ಡಾ.ವೈ.ಸಿ.ರವಿಕುಮಾರ್, ಎಸ್ಪಿ ಡಾ.ಸಿಮಿ ಮರಿಯಮ್ ಜಾರ್ಜ್, ಜಿಲ್ಲಾ‌ ಪಂಚಾಯಿತಿ ಸಿಇಓ ಡಾ.ದಿಲೀಷ್ ಶಶಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಶರಣಬಸಪ್ಪ‌ ಗಣಜಲಖೇಡ, ಜಿಮ್ಸ್ ನಿರ್ದೇಶಕಿ ಡಾ. ಕವಿತಾ ಪಾಟೀಲ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಂಬಾರಾಯ ರುದ್ರವಾಡಿ, ಆರ್‌ಸಿಎಚ್ಓ ಡಾ. ಪ್ರಭುಲಿಂಗ ಮಾನಕರ, ಸಹಾಯಕ ಔಷಧ ನಿಯಂತ್ರಕ ಡಾ. ಗೋಪಾಲ‌ ಭಂಡಾರೆ, ಸಹಾಯಕ ಆಯುಕ್ತ ರಾಮಚಂದ್ರ ಗಡದೆ, ರಮೇಶ ಕೋಲಾರ‌, ತಾಲ್ಲೂಕು ತಹಶೀಲ್ದಾರರು ಭಾಗವಹಿಸಿದ್ದರು.

ಅಸ್ಪತ್ರೆ ನವೀಕರಣಕ್ಕೆ‌ ₹ 2 ಕೋಟಿ

ಶಹಾಬಾದ್‌ ಇಎಸ್ಐಸಿ ಆಸ್ಪತ್ರೆಯನ್ನು ಕೋವಿಡ್ ಕೇರ್ ಸೆಂಟರ್ ಮಾಡಲು ಕಟ್ಟಡ ನವೀಕರಣ ಕಾರ್ಯಕ್ಕೆ ಲೋಕೋಪಯೋಗಿ ಇಲಾಖೆ ₹ 2 ಕೋಟಿ ಅಂದಾಜು ಪಟ್ಟಿ ಸಲ್ಲಿಸಿದೆ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಸಚಿವ ನಿರಾಣಿ ಅವರಿಗೆ ತಿಳಿಸಿದರು. ತಡಮಾಡದೇ ಸೋಮವಾರದಿಂದಲೇ ಕೆಲಸ ಅರಂಭಿಸಿ ಎಂದು ಸಚಿವರು ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.