ADVERTISEMENT

ಅಲ್ಪಸಂಖ್ಯಾತ ಅಂಗನವಾಡಿಗಳಿಗೆ ಸೌಕರ್ಯ ಕಲ್ಪಿಸಿ: ಡಾ.ಉಮೇಶ ಜಾಧವ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂಸದ ತಾಕೀತು

​ಪ್ರಜಾವಾಣಿ ವಾರ್ತೆ
Published 18 ಮೇ 2022, 4:08 IST
Last Updated 18 ಮೇ 2022, 4:08 IST
ಕಲಬುರಗಿಯಲ್ಲಿ ಮಂಗಳವಾರ ನಡೆದ ‘ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆ’ಯಲ್ಲಿ ಸಂಸದ ಡಾ.ಉಮೇಶ ಜಾಧವ ಮಾತನಾಡಿದರು. ಶಾಸಕಿ ಕನೀಜ್‌ ಫಾತಿಮಾ, ಡಿಸಿ ಯಶವಂತ್‌ ಗುರುಕರ್‌, ಡಿಸಿಪಿ ಅಡ್ಡೂರು ಶ್ರೀನಿವಾಸಲು ಇದ್ದಾರೆ
ಕಲಬುರಗಿಯಲ್ಲಿ ಮಂಗಳವಾರ ನಡೆದ ‘ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆ’ಯಲ್ಲಿ ಸಂಸದ ಡಾ.ಉಮೇಶ ಜಾಧವ ಮಾತನಾಡಿದರು. ಶಾಸಕಿ ಕನೀಜ್‌ ಫಾತಿಮಾ, ಡಿಸಿ ಯಶವಂತ್‌ ಗುರುಕರ್‌, ಡಿಸಿಪಿ ಅಡ್ಡೂರು ಶ್ರೀನಿವಾಸಲು ಇದ್ದಾರೆ   

ಕಲಬುರಗಿ: ಜಿಲ್ಲೆಯ 396 ಅಂಗನವಾಡಿ ಕೇಂದ್ರಗಳಲ್ಲಿಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಹೆಚ್ಚಾಗಿದ್ದಾರೆ. ಈ ಎಲ್ಲ ಅಂಗನವಾಡಿ ಕಟ್ಟಡಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಅಧಿಕಾರಿಗಳು ಕಾಳಜಿ ವಹಿಸಬೇಕು ಎಂದು ಸಂಸದ ಡಾ.ಉಮೇಶ ಜಾಧವ ಸೂಚಿಸಿದರು.

ನಗರದಲ್ಲಿ ಮಂಗಳವಾರ ನಡೆದ ‘ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆ’ಯಲ್ಲಿ ಮಾತನಾಡಿದ ಅವರು, ಇದುವರೆಗೂ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಅನುದಾನ ಕೋರಿ ಪ್ರಸ್ತಾವ ಸಲ್ಲಿಸಿದ್ದರೆ, ಕೆಕೆಆರ್‌ಡಿಬಿಯಿಂದ ಅನುದಾನ ಒದಗಿಸಲು ಪ್ರಯತ್ನಿಸ ಲಾಗುವುದು. ಅಂಗನವಾಡಿ ಕಾರ್ಯಕರ್ತೆಯರ ಕೊರತೆ ಇದ್ದರೆ, ಅಲ್ಲಿಯೂ ಪಾರದರ್ಶಕ ನೇಮಕಾತಿಗೆ ಮುಂದಾಗಬೇಕು ಎಂದರು.

ಜಿಲ್ಲೆಯ ಬೇರೆಬೇರೆ ಸ್ಥಳಗಳಿಂದ ಅನೇಕ ಹೆಣ್ಣುಮಕ್ಕಳು ಕಲಬುರಗಿ ನಗರಕ್ಕೆ ವ್ಯಾಸಂಗಕ್ಕೆ ಬರುತ್ತಾರೆ. ಇವರಲ್ಲಿಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿನಿಯರು ಕೂಡ ಹೆಚ್ಚಾಗಿದ್ದಾರೆ. ಆದರೆ, ನಗರದಲ್ಲಿ ಸೂಕ್ತ ವಸತಿ ನಿಲಯವಿಲ್ಲದೆ ಪರದಾಡುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದೂ ಸೂಚಿಸಿದರು.

ADVERTISEMENT

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್, ‘ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಪ್ರವೇಶಾತಿ ಮಂಜೂರಾತಿ ಸಂಖ್ಯೆ ಕಡಿಮೆ ಇದೆ. ಅರ್ಜಿ ಹಾಕಿದ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ, ಈ ಸಮಸ್ಯೆ ತಲೆದೋರಿದೆ’ ಎಂದರು.

ಜಿಲ್ಲೆಯ ಗ್ರಾಮೀಣ ಭಾಗದ ವಸತಿ ಯೋಜನೆಯಲ್ಲಿ 983 ಅಲ್ಪಸಂಖ್ಯಾತ ಫಲಾನುಭವಿಗಳ ಗುರಿ ನೀಡಿದ್ದರೂ, ಇದೂವರೆಗೆ ಆಯ್ಕೆ ಮಾಡಿಲ್ಲ. ಇದಕ್ಕಾಗಿ ಗ್ರಾಮಸಭೆಗಳನ್ನೂ ನಡೆಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಸಂಸದರು, ಮೇ ತಿಂಗಳ ಅಂತ್ಯಕ್ಕೆ ಆಯ್ಕೆ ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.

‘ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಮಂಜೂರು ಮಾಡಲಾದ ಟ್ಯಾಕ್ಸಿ ಯೋಜನೆಗಳಿಗೆ ಬ್ಯಾಂಕ್ ಸಾಲ ನೀಡುತ್ತಿಲ್ಲ. 70 ಟ್ಯಾಕ್ಸಿ ಮಂಜೂರು ಮಾಡಿದ್ದು, ಈ ಪೈಕಿ ಕೆಲವರಿಗೆ ಮಾತ್ರ ಸಾಲ ಮಂಜೂರಾಗಿದೆ. ಬಹುತೇಕರಿಗೆ ಬ್ಯಾಂಕ್ ಏಕೆ ಸಾಲ ನೀಡಿಲ್ಲ’ ಎಂದು ಜಿಲ್ಲಾಧಿಕಾರಿ ಯಶವಂತ್‌, ಲೀಡ್ ಬ್ಯಾಂಕ್ ಅಧಿಕಾರಿಗಳನ್ನು ಪ್ರಶ್ನಿಸಿದರು. ಇದಕ್ಕೆ ಸಂಬಂಧಪಟ್ಟಂತೆ ಪ್ರತ್ಯೇಕ ಸಭೆ ನಡೆಸುವುದಾಗಿಯೂ ತಿಳಿಸಿದರು.

ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ವಾರಕ್ಕೊಮ್ಮೆ ಒಂದು ವಕ್ಫ್ ಆಸ್ತಿ ಅತಿಕ್ರಮಣವನ್ನು ತೆರವುಗೊಳಿಸಲು ಯೋಚಿಸಿದ್ದು, ಈ ಸಂಬಂಧ ಅಗತ್ಯ ಮಾಹಿತಿ ಒದಗಿಸುವಂತೆ ವಕ್ಫ್ ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕಿ ಕನೀಜ್ ಫಾತಿಮಾ ಮಾತನಾಡಿದರು. ಡಿಸಿಪಿ ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಮಹಿಮೂದ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.