ಕಲಬುರಗಿ: ‘ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ಏನೇ ಬಂದರೂ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬಾರದು’ ಎಂದು ದಲಿತ ಮಾದಿಗ ಸಮನ್ವಯ ಸಮಿತಿ(ಡಿಎಂಎಸ್‌ಎಸ್) ಆಗ್ರಹಿಸಿದೆ.
‘ಜಾತಿ, ಮತ, ಪಂಥಗಳ ಭೇದವಿಲ್ಲದೇ ಸಮಾಜದ ಎಲ್ಲ ವರ್ಗಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರಮಿಸುತ್ತಿದ್ದಾರೆ. ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ತರಾತುರಿಯಲ್ಲಿ ಅನುಮತಿ ನೀಡಿದ್ದನ್ನು ನೋಡಿದರೆ ರಾಜ್ಯಪಾಲರ ನಿರ್ಧಾರ ರಾಜಕೀಯ ಪ್ರೇರಿತ ಎಂಬುದು ಸ್ಪಷ್ಟವಾಗುತ್ತದೆ’ ಎಂದು ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ಲಿಂಗರಾಜ ತಾರಫೈಲ್ ಟೀಕಿಸಿದರು.
‘ಎಲ್ಲ ಪಕ್ಷಗಳನ್ನು ಸಮಾನವಾಗಿ ಕಾಣಬೇಕಿದ್ದ ರಾಜ್ಯಪಾಲರು ಪಕ್ಷಪಾತದಿಂದ ನಡೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯಪಾಲ ಹಟಾವೋ, ಕರ್ನಾಟಕ ಬಚಾವೋ ಹೋರಾಟ ನಡೆಸಲಾಗುವುದು’ ಎಂದರು.
ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಜವಳಿ ಮಾತನಾಡಿ, ‘ಕಾರ್ಮಿಕರು, ಬಡವರು, ಶೋಷಿತರ ಪರ ಗಟ್ಟಿಧ್ವನಿಯಾಗಿರುವ ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ. ಕುತಂತ್ರ ಮಾಡಿ ಅವರಿಗೆ ಮಸಿ ಬಳಿಯುಲು ಕೇಂದ್ರ ಸರ್ಕಾರ ರಾಜ್ಯಪಾಲರನ್ನು ಬಳಸಿಕೊಳ್ಳುತ್ತಿದೆ. ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿ ಕೆಲಸ ಮಾಡದೇ, ತಮ್ಮ ಹುದ್ದೆಯ ಘನತೆ ಕಾಯ್ದುಕೊಳ್ಳಬೇಕು’ ಎಂದು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ದಿಗಂಬರ ತ್ರಿಮೂರ್ತಿ, ಶ್ರೀಮಂತ ಭಂಡಾರಿ, ಪ್ರಕಾಶ ಮಾಳಗೆ, ನಾಗು ನಾಲವಾರ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.