ADVERTISEMENT

13ರಂದು ಹಿಂದುಳಿದ ವರ್ಗಗಳ ಸಮಾವೇಶ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2019, 11:32 IST
Last Updated 8 ಏಪ್ರಿಲ್ 2019, 11:32 IST

ಕಲಬುರ್ಗಿ: ನಗರದ ಸಾರ್ವಜನಿಕ ಉದ್ಯಾನದಲ್ಲಿರುವ ವೀರಶೈವ ಕಲ್ಯಾಣ ಮಂಟಪದ ಆವರಣದಲ್ಲಿ ಏ.13ರಂದು ಬೆಳಿಗ್ಗೆ 11 ಗಂಟೆಗೆ ಬಿಜೆಪಿ ಹಿಂದುಳಿದ ವರ್ಗಗಳ ಸಮಾವೇಶನವನ್ನು ಹಮ್ಮಿಕೊಳ್ಳಲಾಗಿದೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಹಿಂದುಳಿದ ವರ್ಗಗಳ ಮುಖಂಡ ಶರಣಪ್ಪ ತಳವಾರ, ‘ಈ ಸಮಾವೇಶದಲ್ಲಿ ಶಾಸಕ ಕೆ.ಎಸ್.ಈಶ್ವರಪ್ಪ, ಬಿಜೆಪಿ ಮುಖಂಡರಾದ ಮಾಲೀಕಯ್ಯ ಗುತ್ತೇದಾರ, ಬಾಬುರಾವ ಚಿಂಚನಸೂರ್, ಡಾ.ಎ.ಬಿ.ಮಾಲಕರಡ್ಡಿ, ಪೂರ್ಣಿಮಾ ಯಾದವ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಬಿಜೆಪಿ ಅಭ್ಯರ್ಥಿ ಡಾ.ಉಮೇಶ ಜಾಧವ ಪಾಲ್ಗೊಳ್ಳುವರು’ ಎಂದರು.

‘ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಏನೂ ಮಾಡಿಲ್ಲ. ಆದರೆ, ಬಿಜೆಪಿ ರಾಜ್ಯ ಘಟದಕ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಅಂಬಿಗರ ಚೌಡಯ್ಯ ಪೀಠವನ್ನು ಸ್ಥಾಪಿಸಿದ್ದಾರೆ. ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಹೈದರಾಬಾದ್ ಕರ್ನಾಟಕ ಭಾಗಕ್ಕೆ ಸಾಕಷ್ಟು ಅನುದಾನ ಕೊಟ್ಟಿದ್ದಾರೆ. ಇದರಿಂದಾಗಿ ಶೇ 90ರಷ್ಟು ಹಿಂದುಳಿದ ವರ್ಗಗಳ ಜನರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ’ ಎಂದು ಹೇಳಿದರು.

ADVERTISEMENT

ಮುಖಂಡ ಧರ್ಮಣ್ಣ ದೊಡ್ಡಮನಿ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ಅವರು ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ರಚಿಸಿದ್ದಾರೆ. ಯಡಿಯೂರಪ್ಪ ಅವರು ಕನಕ ಜಯಂತಿ ಆಚರಣೆಗೆ ಸರ್ಕಾರಿ ರಜೆ ಘೋಷಿಸಿದ್ದಾರೆ. ಕಾಗಿನೆಲೆ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಜನ್ಮಸ್ಥಳವನ್ನು ಅಭಿವೃದ್ಧಿಪಡಿಸಲು ಸಾಕಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ’ ಎಂದು ತಿಳಿಸಿದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಮಾತನಾಡಿ, ‘ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಿಂದುಳಿದ ವರ್ಗಗಳ ಜನರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಈ ಚುನಾವಣೆಯಲ್ಲಿ ಖರ್ಗೆ ಅವರಿಗೆ ತಕ್ಕ ಪಾಠ ಕಲಿಸುವ ನಿರ್ಣಯ ಕೈಗೊಳ್ಳಲಾಗುವುದು’ ಎಂದರು.

ಬಿಜೆಪಿ ನಗರ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜಿ.ಪಾಟೀಲ, ಮುಖಂಡರಾದ ಲಿಂಗರಾಜ ಬಿರಾದಾರ, ಸಂತೋಷ ತಳವಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.