ADVERTISEMENT

ಭೀಮಾ ನದಿಗೆ 1 ಟಿಎಂಸಿ ಅಡಿ ನೀರು ಬಿಡುಗಡೆಗೆ ಆದೇಶ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2024, 15:31 IST
Last Updated 26 ಮಾರ್ಚ್ 2024, 15:31 IST
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಸೊನ್ನ ಭೀಮಾ ಬ್ಯಾರೇಜಿನಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಕುಸಿದಿರುವುದು
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಸೊನ್ನ ಭೀಮಾ ಬ್ಯಾರೇಜಿನಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಕುಸಿದಿರುವುದು   

ಕಲಬುರಗಿ: ತೀವ್ರ ಬರಗಾಲದಿಂದ ತತ್ತರಿಸಿರುವ ಜಿಲ್ಲೆಯ ಜನ, ಜಾನುವಾರುಗಳ ಕುಡಿಯುವ ನೀರಿಗಾಗಿ ನಾರಾಯಣಪುರ ಜಲಾಶಯದಿಂದ 1 ಟಿಎಂಸಿ ಅಡಿ ನೀರನ್ನು ಭೀಮಾ ನದಿಗೆ ಬಿಡುಗಡೆ ಮಾಡುವಂತೆ ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಭೀಮಾ ನದಿಗೆ ನಾರಾಯಣಪುರ ಜಲಾಶಯ ಹಾಗೂ ಮಹಾರಾಷ್ಟ್ರದ ಉಜನಿ ಜಲಾಶಯದಿಂದ ನೀರು ಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ನಾಟೀಕಾರ ಅಫಜಲಪುರದಲ್ಲಿ ಹಲವು ದಿನಗಳಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಈ ಸತ್ಯಾಗ್ರಹಕ್ಕೆ ವಿವಿಧ ಪಕ್ಷಗಳು, ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದವು.

ಅಫಜಲಪುರ ಶಾಸಕ ಎಂ.ವೈ. ಪಾಟೀಲ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಸೋಮವಾರ ಬೆಂಗಳೂರಿನಲ್ಲಿ ಜಲಸಂಪನ್ಮೂಲ ಸಚಿವರೂ ಆದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ನೀರು ಬಿಡುಗಡೆಗೆ ಒತ್ತಡ ಹೇರಿದ್ದರು.

ADVERTISEMENT

ಇದಕ್ಕೆ ಸ್ಪಂದಿಸಿದ ಶಿವಕುಮಾರ್ ಅವರು ನೀರು ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದಾದ ಬೆನ್ನಲ್ಲಿಯೇ ಕುಡಿಯುವ ನೀರಿನ ಅಗತ್ಯಕ್ಕಾಗಿ ನಾರಾಯಣಪುರ ಜಲಾಶಯದಿಂದ ಕೆಬಿಜೆಎನ್‌ಎಲ್‌ನ ಇಂಡಿ ಶಾಖಾ ಕಾಲುವೆ ಮೂಲಕ 1 ಟಿಎಂಸಿ ಅಡಿ ನೀರು ಬಿಡುಗಡೆ ಮಾಡುವಂತೆ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.