ADVERTISEMENT

ಕಲಬುರಗಿ | ಬಾಲಕಿಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2024, 14:08 IST
Last Updated 4 ಏಪ್ರಿಲ್ 2024, 14:08 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಕಲಬುರಗಿ: ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪ ಸಾಬೀತಾಗಿದ್ದರಿಂದ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ (ವಿಶೇಷ ಪೋಕ್ಸೊ) ನ್ಯಾಯಾಲಯ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಅಫಜಲಪುರ ತಾಲ್ಲೂಕಿನ ಗ್ರಾಮವೊಂದರ ನಿವಾಸಿ ನಜೀರ್ ಪಟೇಲ್‌ ಎಂಬಾತ 2022ರ ಮಾರ್ಚ್ 13ರಂದು ಬಾಲಕಿಗೆ ಚಾಕೊಲೇಟ್, ಹಣ ಕೊಟ್ಟು ಪುಸಲಾಯಿಸಿದ. ಜೀವ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ್ದ. ದುಷ್ಕೃತ್ಯದ ಬಳಿಕ ಹಣ ಕೊಡದೆ ಇದ್ದರೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದ.

ADVERTISEMENT

ಆರೋಪಿ ವಿರುದ್ಧ ಸಬ್‌ಅರ್ಬನ್‌ ಪೊಲೀಸ್‌ ಠಾಣೆಯ ಪಿಐ ರಮೇಶ ಕಾಂಬಳೆ ಅವರು ತನಿಖೆ ನಡೆಸಿದ್ದರು. ನಾನಾ ಕಾಯ್ದೆಗಳ ಅಡಿಯಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಹ ಸಲ್ಲಿಸಿದ್ದರು.

ವಾದ ವಿವಾದ ಆಲಿಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ವಿಶೇಷ ಪೋಕ್ಸೊ) ಎಫ್‌ಟಿಎಸ್‌ಸಿ–1 ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ನಜೀರ್ ಪಟೇಲ್‌ಗೆ ಪೋಕ್ಸೊ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿ 20 ವರ್ಷ ಜೈಲು ಶಿಕ್ಷೆ ಹಾಗೂ ₹26 ಸಾವಿರ ದಂಡ ವಿಧಿಸಿ ತೀರ್ಪು ಹೊರಡಿಸಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಶಾಂತವೀರ ಬಿ.ತುಪ್ಪದ ಅವರು ವಾದ ಮಂಡಿಸಿದರು. ನೊಂದ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ₹ 7 ಲಕ್ಷ ಪರಿಹಾರವಾಗಿ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

ಸಬ್‌ಅರ್ಬನ್ ಠಾಣೆಯ ಸಿಬ್ಬಂದಿ ಆರೀಫ್‌, ಪ್ರಭುರಾಜ ಮತ್ತು ಶ್ರೀನಿವಾಸ್ ಅವರು ನ್ಯಾಯಾಲಯಕ್ಕೆ ಸಾಕ್ಷಿದಾರರನ್ನು ಹಾಜರಿಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.