ADVERTISEMENT

ಕಲಬುರಗಿ | ಪೋಕ್ಸೊ ಪ್ರಕರಣ: ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2024, 14:05 IST
Last Updated 3 ಏಪ್ರಿಲ್ 2024, 14:05 IST
   

ಕಲಬುರಗಿ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಟಾಕಳಿ ಗ್ರಾಮದ ಅಪರಾಧಿ ನಜೀರ್‌ ಪಟೇಲ್‌ ಎಂಬಾತನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ ₹26 ಸಾವಿರ ದಂಡವನ್ನು ನ್ಯಾಯಾಲಯ ವಿಧಿಸಿದೆ.

2022ರ ಮಾರ್ಚ್‌ 13ರಂದು ನಜೀರ್‌ ಪಟೇಲ್‌ ಚಾಕೊಲೇಟ್‌ ಹಾಗೂ ಹಣ ಕೊಟ್ಟು ಪುಸಲಾಯಿಸಿ, ಜೀವಬೆದರಿಕೆ ಹಾಕಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ. ಬಳಿಕ ಹಣ ಕೊಡದಿದ್ದರೆ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದ.

ಈ ಪ್ರಕರಣದ ಕುರಿತು ತನಿಖೆ ನಡೆಸಿದ್ದ ಕಲಬುರಗಿ ಸಬ್‌ ಅರ್ಬನ್‌ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ರಮೇಶ ಕಾಂಬಳೆ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ADVERTISEMENT

ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌(ಪೋಕ್ಸೊ ವಿಶೇಷ) ನ್ಯಾಯಾಲಯದ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಅಪರಾಧಿಗೆ ಶಿಕ್ಷೆ ವಿಧಿಸಿ 2024ರ ಏಪ್ರಿಲ್‌ 2ರಂದು ಆದೇಶ ನೀಡಿದ್ದಾರೆ. ಜೊತೆಗೆ ನೊಂದ ಬಾಲಕಿಗೆ ಕಾನೂನು ಪ್ರಾಧಿಕಾರದಿಂದ ₹7 ಲಕ್ಷ ಪರಿಹಾರ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ.ತುಪ್ಪದ ವಾದ ಮಂಡಿಸಿದ್ದರು. ಈ ಪ್ರಕರಣದಲ್ಲಿ ಸಬ್‌ ಅರ್ಬನ್‌ ಪೊಲೀಸ್‌ ಠಾಣೆಯ ಕಾನ್‌ಸ್ಟೆಬಲ್‌ಗಳಾದ ಆರೀಫ್‌, ಪ್ರಭುರಾಜ ಹಾಗೂ ಶ್ರೀನಿವಾಸ ಅವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.