
ಕಲಬುರಗಿ: ‘ಬಿಜೆಪಿ ಕೋಮುದ್ವೇಷದ ಮಧ್ಯೆ ಚುನಾವಣೆ ನಡೆಸುತ್ತಿದ್ದರೆ, ಕಾಂಗ್ರೆಸ್ ದಲಿತರು ಮತ್ತು ಮುಸ್ಲಿಮರನ್ನು ವೋಟ್ ಬ್ಯಾಂಕ್ ಮಾಡಿಕೊಂಡು ರಾಜಕೀಯ ಮಾಡುತ್ತಿದೆ. ಹಾಗಾಗಿ, ಜನ ಬದಲಾವಣೆ ಬಯಸುತ್ತಿದ್ದು, ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ’ ಎಂದು ಬಹುಜನ ಮತದಾರರ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಶರಣಬಸಪ್ಪ ಪಿ.ಸೂಗೂರ ತಿಳಿಸಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚುನಾವಣೆಗೆ ಈಗಾಗಲೇ ಸಿದ್ಧತೆ ಮಾಡಿಕೊಂಡಿದ್ದು, ಮತದಾರರ ಮನೆಮನೆಗೆ ತೆರಳಿ ಮತ ಕೇಳುತ್ತೇವೆ. ಎರಡೂ ರಾಷ್ಟ್ರೀಯ ಪಕ್ಷಗಳ ಆಡಳಿತ ವೈಫಲ್ಯಗಳನ್ನು ಜನರಿಗೆ ಮನವರಿಕೆ ಮಾಡುತ್ತೇವೆ. ಪ್ರಚಾರಕ್ಕಾಗಿ ಸಾಮಾಜಿಕ ಜಾಲತಾಣವನ್ನೂ ಬಳಸಿಕೊಳ್ಳಲಾಗುವುದು’ ಎಂದರು.
‘ಪರಿಶಿಷ್ಟರಿಗಾಗಿ ಮೀಸಲಿಟ್ಟ ₹11 ಸಾವಿರ ಕೋಟಿಯನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಮಹನೀಯರ ಪುತ್ಥಳಿಗಳಿಗೆ ಅವಮಾನ, ಮಹಿಳೆಯರು ಮತ್ತು ದಲಿತರ ಕೊಲೆ ನಡೆಯುತ್ತಿದೆ’ ಎಂದು ಆರೋಪಿಸಿದರು.
ವೇದಿಕೆ ರಾಜ್ಯ ಘಟಕದ ಉಪಾಧ್ಯಕ್ಷ ಮೆಹಮೂದ್ ಶಾ, ಜಿಲ್ಲಾಧ್ಯಕ್ಷ ಶೇಖ್ ಮುನಿರ್, ಶರಣು ಹಂಗರಗಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.