ADVERTISEMENT

ಸಮಾಜದ ವಿದ್ಯಾರ್ಥಿಗಳಿಗೆ ನಾಳೆ ಪ್ರತಿಭಾ ಪುರಸ್ಕಾರ

ಅಖಿಲ ಭಾರತ ವೀರಶೈವ ಮಹಾಸಭಾದಿಂದ ದೊಡ್ಡಪ್ಪ ಅಪ್ಪಾ ಅವರಿಗೆ ಅಭಿನಂದನೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2020, 11:01 IST
Last Updated 3 ಜನವರಿ 2020, 11:01 IST
ಶರಣಕುಮಾರ ಮೋದಿ
ಶರಣಕುಮಾರ ಮೋದಿ   

ಕಲಬುರ್ಗಿ: ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ದೊಡ್ಡಪ್ಪ ಅಪ್ಪ ಅವರಿಗೆ ಅಭಿನಂದನೆ ಹಾಗೂ ವೀರಶೈವ ಮಹಾಸಭಾದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇದೇ 5ರಂದು ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಶರಣಕುಮಾರ ಮೋದಿ, ‘ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಯ 103 ವಿದ್ಯಾರ್ಥಿಗಳಿಗೆ ತಲಾ ₹ 2,500ರಂತೆ ಪ್ರತಿಭಾ ಪುರಸ್ಕಾರದ ಚೆಕ್‌ ನೀಡಲಾಗುವುದು. ಈ ಬಾರಿ ಮಹಾಸಭಾ ಕೇಂದ್ರ ಸಮಿತಿಯಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದ್ದರಿಂದ ಹಾಗೂ ಈ ಬಗ್ಗೆ ಹೆಚ್ಚು ಜಾಗೃತಿ ಮಾಡದೇ ಇರುವುದರಿಂದ ಹೆಚ್ಚು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಶೇ 90ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳು ಇದೇ 4ರಂದು ವೀರಶೈವ ಮಹಾಸಭಾ ಕಚೇರಿಗೆ ಬಂದು ಅರ್ಜಿ ಸಲ್ಲಿಸಿದರೆ ಅವರನ್ನೂ ಪ್ರತಿಭಾ ಪುರಸ್ಕಾರ ನೀಡಲಾಗುವುದು’ ಎಂದರು.

ಕಾರ್ಯಕ್ರಮದ ಸಾನ್ನಿಧ್ಯವನ್ನು ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಡಾ.ಶರಣಬಸಪ್ಪ ಅಪ್ಪ ವಹಿಸಲಿದ್ದಾರೆ. ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಖಂಡ್ರೆ ಸಮಾರಂಭ ಉದ್ಘಾಟಿಸುವರು. ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ ವೆಂಕಟರೆಡ್ಡಿ ಮುದ್ನಾಳ ಪ್ರತಿಭಾ ಪುರಸ್ಕಾರ ವಿತರಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಎಂ.ವೈ.ಪಾಟೀಲ, ಶರಣಬಸಪ್ಪ ದರ್ಶನಾಪೂರ, ರಾಜಕುಮಾರ ಪಾಟೀಲ ತೇಲ್ಕೂರ, ನಾಗನಗೌಡ ಕಂದಕೂರ, ಬಿ.ಜಿ.ಪಾಟೀಲ, ವಿಧಾನಪರಿಷತ್ ಸದಸ್ಯ ಚಂದ್ರಶೇಖರ ಪಾಟೀಲ ಹುಮನಾಬಾದ್, ಬಿ.ಜಿ.ಪಾಟೀಲ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣ ಮಾಲಾಜಿ, ಮಾಜಿ ಸಚಿವ ಶರಣಪ್ರಕಾಶ ಪಾಟೀಲ ಇತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ADVERTISEMENT

ಈ ಕಾರ್ಯಕ್ರಮ ಮುಗಿದ ಬಳಿಕ ಜಿಲ್ಲಾ ಯುವ ಘಟಕ ಹಾಗೂ ಮಹಿಳಾ ಘಟಕದ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದರು.

ಮಹಾಸಭಾ ಪ್ರಧಾನ ಕಾರ್ಯದರ್ಶಿ ಡಾ.ಶರಣ ಬಿ.ಪಾಟೀಲ, ಸ್ವಾಗತ ಸಮಿತಿ ಅಧ್ಯಕ್ಷ ಡಾ.ಎಸ್‌.ಎಸ್‌.ಪಾಟೀಲ ಮಾತನಾಡಿ, ‘ವರ್ಷಕ್ಕೆ 5 ಸಾವಿರ ಸದಸ್ಯತ್ವ ಮಾಡುವ ಗುರಿ ಹೊಂದಲಾಗಿದ್ದು, ಇಲ್ಲಿಯವರೆಗೆ 250 ಸದಸ್ಯರ ನೋಂದಣಿ ಆಗಿದೆ. ಮುಂದಿನ ದಿನಗಳಲ್ಲಿ ಅಭಿಯಾನ ಹಾಕಿಕೊಂಡು ಸದಸ್ಯತ್ವ ನೀಡಲಾಗುವುದು’ ಎಂದು ತಿಳಿಸಿದರು.

ಎಂ.ಎಸ್‌.ಪಾಟೀಲ ನರಿಬೋಳ, ಗೌರಿ ಆರ್‌.ಚಿಚಕೋಟಿ, ಡಾ.ಸುಧಾ ಆರ್‌.ಹಾಲಕಾಯಿ ಗೋಷ್ಠಿಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.