
ಕಲಬುರಗಿ: ತಾಲ್ಲೂಕಿನ ಸಿತನೂರ ಗ್ರಾಮದ ಸರ್ಕಾರಿ ಕಿರಿಯ ಉರ್ದು ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಮುಚ್ಚುವುದನ್ನು ವಿರೋಧಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ಕೆಪಿಎಸ್ ಮ್ಯಾಗ್ನೆಟ್ ಶಾಲಾ ಯೋಜನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಎಐಡಿಎಸ್‌ಒ ಜಿಲ್ಲಾ ಉಪಾಧ್ಯಕ್ಷೆ ಪ್ರೀತಿ ದೊಡ್ಡಮನಿ, ‘ರಾಜ್ಯದ 5,900 ಗ್ರಾಮ ಪಂಚಾಯಿತಿಗಳ ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಾಗಿ ಪರಿವರ್ತಿಸಲು ಸರ್ಕಾರ ನಿರ್ಧರಿಸಿದೆ. ಈ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ 5 ಕಿ.ಮೀ ವ್ಯಾಪ್ತಿಯಲ್ಲಿ ಉಳಿದ ಸರ್ಕಾರಿ ಶಾಲೆಗಳನ್ನು ಕೊಲ್ಲುವ ಹುನ್ನಾರ ಇದು’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ರೈತರು, ಕಾರ್ಮಿಕರು, ದಿನಗೂಲಿ ಕೆಲಸ ಮಾಡುವವರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸುತ್ತಿದ್ದಾರೆ. ಅವುಗಳನ್ನು ಮುಚ್ಚಿದರೆ ಆ ಮಕ್ಕಳ ಗತಿ ಏನು?’ ಎಂದು ಪ್ರಶ್ನಿಸಿದ ಅವರು ‘ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಅಡಿಯಲ್ಲಿ ಸರ್ಕಾರಿ ಶಾಲೆಗಳ ಮುಚ್ಚುವುದನ್ನು ಕೈಬಿಡಬೇಕು’ ಎಂದು ಆಗ್ರಹಿಸಿದರು.
ಸಂಘಟನೆಯ ಜಿಲ್ಲಾ ಖಜಾಂಚಿ ಸ್ಫೂರ್ತಿ ಗುರುಜಲ್ಕರ್, ಜಿಲ್ಲಾ ಕಾರ್ಯದರ್ಶಿ ವೆಂಕಟೇಶ ದೇವದುರ್ಗ, ಜಿಲ್ಲಾ ಸಮಿತಿ ಸದಸ್ಯರಾದ ದೇವರಾಜ ರಾಜೊಳ್ಕರ, ಯುವರಾಜ್ ರಾಠೋಡ, ಗ್ರಾಮಸ್ಥರಾದ ಮಾಹಾದೇವಪ್ಪ ಪೊಲೀಸ್‌ಪಾಟೀಲ, ಮಾಪಣ್ಣ, ರವಿ, ವಿಕಾಸ ಸೇರಿದಂತೆ ನೂರಾರು ಜನ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.