ADVERTISEMENT

ಹಸುಗಳ ಕೆಚ್ಚಲು ಕತ್ತರಿಸಿದ ಘಟನೆ: ಉನ್ನತ ಮಟ್ಟದ ತನಿಖೆಗೆ ಆಗ್ರಹ

ಹಸುಗಳ ಕೆಚ್ಚಲು ಕತ್ತರಿಸಿದ ಘಟನೆ ಖಂಡಿಸಿ ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ಜನವರಿ 2025, 6:45 IST
Last Updated 15 ಜನವರಿ 2025, 6:45 IST
ಕಲಬುರಗಿಯಲ್ಲಿ ಮಂಗಳವಾರ ಬಿಜೆಪಿ ರೈತ ಮೋರ್ಚಾ ಮುಖಂಡರು ಹಾಗೂ ಕಾರ್ಯಕರ್ತರು ಹಸುವಿನೊಂದಿಗೆ ಪ್ರತಿಭಟನಾ ಮೆರವಣಿಗೆ  ನಡೆಸಿದರು  :ಪ್ರಜಾವಾಣಿ ಚಿತ್ರ
ಕಲಬುರಗಿಯಲ್ಲಿ ಮಂಗಳವಾರ ಬಿಜೆಪಿ ರೈತ ಮೋರ್ಚಾ ಮುಖಂಡರು ಹಾಗೂ ಕಾರ್ಯಕರ್ತರು ಹಸುವಿನೊಂದಿಗೆ ಪ್ರತಿಭಟನಾ ಮೆರವಣಿಗೆ  ನಡೆಸಿದರು  :ಪ್ರಜಾವಾಣಿ ಚಿತ್ರ   

ಕಲಬುರಗಿ: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದು, ಕಾಲಿಗೆ ಮಚ್ಚಿನಿಂದ ಹೊಡೆದು ವಿಕೃತಿ ಮೆರೆದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಬಿಜೆಪಿ ರೈತ ಮೋರ್ಚಾ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು ಈ ಕೃತ್ಯಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್‌ ಅಹಮ್ಮದ್ ಖಾನ್ ಹಾಗೂ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗುತ್ತಾ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಹಸುವಿನೊಂದಿಗೆ ಕರಾಳ ಸಂಕ್ರಾಂತಿ ಆಚರಿಸಿದರು.

ಇದೊಂದು ಉದ್ದೇಶಪೂರ್ವಕವಾದ ಕೃತ್ಯ ಎಂಬುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಪೊಲೀಸರು ಬಂಧಿಸಿದ ಆರೋಪಿಯನ್ನು ರಾಜ್ಯ ಸರ್ಕಾರ ರಕ್ಷಿಸಲು ಯತ್ನಿಸುತ್ತಿದೆ. ಹಿಂದೂಗಳ ಭಾವನೆಗೆ ಧಕ್ಕೆಯುಂಟು ಮಾಡಿದ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ADVERTISEMENT

ಈಗಾಗಲೇ ಆರೋಪಿಯನ್ನು ಬಂಧಿಸಿದ್ದಾಗಿ ರಾಜ್ಯ ಸರ್ಕಾರ ಹೇಳುತ್ತಿದೆ. ಆದರೆ, ತನಿಖೆ ಸರಿಯಾಗಿ ನಡೆಯುವುದು ಅನುಮಾನವಿದೆ. ಹೀಗಾಗಿ, ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರನ್ನು ಪತ್ತೆ ಮಾಡಿ, ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು.

ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಮಾತನಾಡಿ, ‘ಗೋ ಮಾತೆಯೆ ಕೆಚ್ಚಲು ಕತ್ತರಿಸಿದ ಕೃತ್ಯ ಅಮಾನವೀಯವಾಗಿದೆ. ಈ ಕುರಿತು ಪೊಲೀಸರು ಸರಿಯಾಗಿ ತನಿಖೆ ಮಾಡಬೇಕು. ಹಿಂದೂಗಳ ಹಬ್ಬಗಳ ವೇಳೆಯಲ್ಲಿ ಹಿಂದೂಗಳ ಮನ ನೋಯಿಸುವ ಕೃತ್ಯಗಳು ನಡೆಯುತ್ತಿರುವುದು ಖಂಡನೀಯ’ ಎಂದರು.

‘ಹಸುವಿನ ಕೆಚ್ಚಲು ಕೊಯ್ದು ಕ್ರೌರ್ಯ ಮರೆದ ಎಲ್ಲ ಕಿಡಿಗೇಡಿಗಳನ್ನು ಬಂಧಿಸಬೇಕು. ಅವರಿಗೆ ಕಠಿಣವಾದ ಶಿಕ್ಷೆಯನ್ನೂ ವಿಧಿಸಬೇಕು’ ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲಾ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ಬಸವರಾಜ ಮಾಲಿಪಾಟೀಲ, ಪ್ರಧಾನ ಕಾರ್ಯದರ್ಶಿ ಮಲ್ಲಣ್ಣ ಕುಲಕರ್ಣಿ, ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಪಾಟೀಲ, ಜಿಲ್ಲಾ ಕಾರ್ಯದರ್ಶಿ ಮಲ್ಲಿನಾಥ ಪಾಟೀಲ ಕಾಳಗಿ, ಕಾರ್ಯದರ್ಶಿ ಶಿವಮೂರ್ತಯ್ಯ ಹಿರೇಮಠ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.