ADVERTISEMENT

ಕಲಬುರ್ಗಿ: ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ‌ಕಾರ್ಯಕರ್ತರು‌ ಪೊಲೀಸರ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 8:16 IST
Last Updated 2 ಅಕ್ಟೋಬರ್ 2020, 8:16 IST
ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ‌ಮಾಡಿದರು.
ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ‌ಮಾಡಿದರು.   

ಕಲಬುರ್ಗಿ: ಉತ್ತರ ಪ್ರದೇಶದ ಹಾಥರಸ್ ಜಿಲ್ಲೆಯಲ್ಲಿ ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ಯುವತಿಯ ‌ಮನೆಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಶುಕ್ರವಾರ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ‌ಮಾಡಿದರು.

ಇಲ್ಲಿನ ಟೌನ್ ಹಾಲ್ ಆವರಣದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಜಗದೇವ ಗುತ್ತೇದಾರ ನೇತೃತ್ವದಲ್ಲಿ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ತಡೆದು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಉತ್ತರ ಪ್ರದೇಶದ ಅತ್ಯಾಚಾರ ಸಂತ್ರಸ್ತೆ ಯುವತಿಯ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳುತ್ತಿದ್ದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಅಲ್ಲಿನ ಪೊಲೀಸರು ತಡೆದಿರುವುದು ಖಂಡನೀಯವಾಗಿದೆ. ಅಲ್ಲದೇ, ಇಬ್ಬರೂ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ಸರಿಯಲ್ಲ.‌ ಇದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಸರ್ವಾಧಿಕಾರಿ ಧೋರಣೆ ಎಂದು ಆರೋಪಿಸಿ ಯೋಗಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ನಂತರದಲ್ಲಿ ಜಿಲ್ಲಾಧಿಕಾರಿ ಕಚೇರಿಯತ್ತ ಪ್ರತಿಭಟನಾ ಮೆರವಣಿಗೆ ಹೊರಡುತ್ತಿದ್ದ ವಿಧಾನಪರಿಷತ್ ಮಾಜಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಮುಖಂಡರಾದ ಭೀಮರೆಡ್ಡಿ ಪಾಟೀಲ ಕುರಕುಂದಾ, ಸಂಜೀವ ಐರೆಡ್ಡಿ, ಈರಣ್ಣ ಝಳಕಿ, ಬಾಬು ವಂಟಿ, ಮಹೇಶ್ವರಿ ವಾಲಿ, ಚಂದ್ರಿಕಾ ಪರಮೇಶ್ವರ, ರೇಣುಕಾ ಸಿಂಗೆ ಮುಂತಾದವರನ್ನು ವಶಕ್ಕೆ ಪಡೆದು ಎರಡು ವಾಹನಗಳಲ್ಲಿ ಹತ್ತಿಸಿ ಪೊಲೀಸರು ಕರೆದುಕೊಂಡು ಹೋಗಿ ಬಳಿಕ ಬಿಡುಗಡೆ ‌ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.