ADVERTISEMENT

ಪದವಿ ಕಾಲೇಜು ಪ್ರವೇಶದಲ್ಲಿ ತಾರತಮ್ಯ: ಖಂಡನೆ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2021, 16:23 IST
Last Updated 6 ಆಗಸ್ಟ್ 2021, 16:23 IST
ಕಲಬುರ್ಗಿ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಎಐಡಿಎಸ್‌ಒ ಮುಖಂಡರು ಪ್ರತಿಭಟನೆ ನಡೆಸಿದರು
ಕಲಬುರ್ಗಿ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಎಐಡಿಎಸ್‌ಒ ಮುಖಂಡರು ಪ್ರತಿಭಟನೆ ನಡೆಸಿದರು   

ಕಲಬುರ್ಗಿ: ಪದವಿ ಕಾಲೇಜು ಪ್ರವೇಶ ಪ್ರಕ್ರಿಯೆಯಲ್ಲಿ ತಾರತಮ್ಯ ಮಾಡುವುದನ್ನು ನಿಲ್ಲಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಡಿಎಸ್‌ಒ ಜಿಲ್ಲಾ ಘಟಕದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಸರ್ಕಾರಿ ಹಾಗೂ ಅನುದಾನಿತ ಪದವಿ ಕಾಲೇಜುಗಳಲ್ಲಿ ದಾಖಲಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು ಸರಿಯಲ್ಲ. ಕೊರೊನಾ 3ನೇ ಅಲೆಯ ಭೀತಿಯ ನಡುವೆಯೂ ಡಿಪ್ಲೊಮಾ ಅಂತಿಮ ವರ್ಷದ ವಿದ್ಯಾರ್ಥಿಗಳ ಪರೀಕ್ಷೆ ನಡೆಸುವುದಕ್ಕೂ ನಮ್ಮ ವಿರೋಧವಿದೆ ಎಂದು ಘೋಷಣೆ ಕೂಗಿದರು.‌

ನೇತೃತ್ವ ವಹಿಸಿದ್ದ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎಚ್. ಹಣಮಂತ ಮಾತನಾಡಿ, ‘ಪದವಿ, ಸ್ನಾತಕೋತ್ತರ ತರಗತಿಗಳಲ್ಲಿ ಅಂತಿಮ ವರ್ಷ ಹೊರತುಪಡಿಸಿ ಯಾರಿಗೂ ಸೆಮಿಸ್ಟರ್‌ ಪರೀಕ್ಷೆ ನಡೆಸಬಾರದು ಎಂದು ಸರ್ಕಾರ ಆದೇಶ ಹೊರಡಿಸಿದ್ದರೂ, ವಿಶ್ವವಿದ್ಯಾಲಯಗಳು ಈ ಕುರಿತು ಅಧಿಕೃತ ಸುತ್ತೋಲೆ ಹೊರಡಿಸಿಲ್ಲ. ಬದಲಾಗಿ ಕೆಲವು ವಿ.ವಿ.ಗಳು ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ಪರೀಕ್ಷೆ ನಡೆಸಲು ಮುಂದಾಗುತ್ತಿವೆ. ಈಗಾಗಲೇ ಮಾನಸಿಕವಾಗಿ ತೀವ್ರ ಒತ್ತಡದಲ್ಲಿರುವ ವಿದ್ಯಾರ್ಥಿ ಸಮುದಾಯದ ಮೇಲೆ ಇದು ಮತ್ತಷ್ಟು ಒತ್ತಡವನ್ನು ಉಂಟು ಮಾಡುತ್ತಿದೆ’ ಎಂದರು.

ADVERTISEMENT

‘ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಮಾತ್ರ ತರಗತಿ ಆರಂಭಿಸಿದ್ದು ಸರಿಯಲ್ಲ. ಅಂತಿಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿಗಳು ಮೂರು ಪರೀಕ್ಷೆಗಳನ್ನು (5, 6ನೇ ಸೆಮಿಸ್ಟರ್ ಹಾಗೂ ಡಿಸಿಇಟಿ) ಬರೆಯಬೇಕಿದ್ದು, ರಾಜ್ಯದಾದ್ಯಂತ ಅಂತಿಮ ವರ್ಷದ ವಿದ್ಯಾರ್ಥಿಗಳು ಒತ್ತಡ ಅನುಭವಿಸುತ್ತಿದ್ದಾರೆ. ಇದನ್ನು ಕೈ ಬಿಟ್ಟು ವಿದ್ಯಾರ್ಥಿ ಪರವಾದ ವಾತಾವರಣ ನಿರ್ಮಿಸಬೇಕು’ ಎಂದೂ ಅವರು ದೂರಿದರು.

ಸಂಘಟನೆಯ ಜಿಲ್ಲಾ ಘಟಕದ ಕಾರ್ಯದರ್ಶಿ ಈರಣ್ಣ ಇಸಬಾ, ಉಪಾಧ್ಯಕ್ಷೆ ಸ್ನೇಹಾ ಕಟ್ಟಿಮನಿ, ಸದಸ್ಯರಾದ ಶಿಲ್ಪಾ ಬಿ.ಕೆ, ತುಳಜಾರಾಮ, ರಮೇಶ, ಕಿರಣ, ನಾಗರಾಜ, ರಾಮು, ರೇವಣಸಿದ್ದ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.