ADVERTISEMENT

ಹಳೆಯ ನಿಶ್ಚಿತ ಪಿಂಚಣಿ ಜಾರಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2024, 6:17 IST
Last Updated 18 ಆಗಸ್ಟ್ 2024, 6:17 IST
ಕಲಬುರಗಿಯಲ್ಲಿ ಶನಿವಾರ ರಾಜ್ಯ ಅನುದಾನಿತ ಶಾಲಾ, ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಮುಖಂಡರು ಪ್ರತಿಭಟನೆ ನಡೆಸಿದರು –ಪ್ರಜಾವಾಣಿ ಚಿತ್ರ
ಕಲಬುರಗಿಯಲ್ಲಿ ಶನಿವಾರ ರಾಜ್ಯ ಅನುದಾನಿತ ಶಾಲಾ, ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಮುಖಂಡರು ಪ್ರತಿಭಟನೆ ನಡೆಸಿದರು –ಪ್ರಜಾವಾಣಿ ಚಿತ್ರ    

ಕಲಬುರಗಿ: ಹಳೆಯ ನಿಶ್ಚಿತ ಪಿಂಚಣಿ (ಒಪಿಎಸ್) ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಅನುದಾನಿತ ಶಾಲಾ, ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ ಅವರು ಸಹ ಪ್ರತಿಭಟನೆಯಲ್ಲಿ ಪಾಲ್ಗೊಂಡು, ನೌಕರರ ಬೇಡಿಕೆಗಳಿಗೆ ಧ್ವನಿಯಾದರು.

2006ರ ಪೂರ್ವದಲ್ಲಿ ನೇಮಕವಾಗಿ ಆ ಬಳಿಕ ಅನುದಾನಕ್ಕೆ ಒಳಪಟ್ಟ ನೌಕರರ ಅನುದಾನಕ್ಕೂ ಪೂರ್ವದ ಸೇವೆಯನ್ನು ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯಕ್ಕೆ ಪರಿಗಣಿಸಬೇಕು. ಕಾಂಗ್ರೆಸ್ ಪಕ್ಷ ಚುನಾವಣೆ ಪೂರ್ವದಲ್ಲಿ ಸರ್ಕಾರಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಒಪಿಎಸ್‌ ಜಾರಿಗೆ ತರುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಕೂಡಲೇ ಅದನ್ನು ಅನುಷ್ಠಾನಕ್ಕೆ ತರಬೇಕು ಎಂದು ಕೋರಿದರು.

ADVERTISEMENT

ಸರ್ಕಾರಿ ನೌಕರರಿಗೆ ನೀಡುತ್ತಿರುವ ಆರೋಗ್ಯ ಸೌಲಭ್ಯಗಳನ್ನು ಅನುದಾನಿತ ನೌಕರರಿಗೆ ಕೊಡಬೇಕು. ಸೆಪ್ಟೆಂಬರ್ 5ರ ಒಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಇದ್ದಲ್ಲಿ ರಾಜ್ಯದಾದ್ಯಂತ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಶ್ರೀಕೃಷ್ಣ ವಿ.ಮಾಗಣಗೇರಿ, ಉಪಾಧ್ಯಕ್ಷ ಅಣವೀರ ಟೆಂಗಳಿ, ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ ಪಿ.ಜಿ. ಸೇರಿ ಹಲವರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.