ADVERTISEMENT

ಕಲಬುರಗಿ | ಮಣಿಕಂಠ ರಾಠೋಡ ಬಂಧನಕ್ಕೆ ಆಗ್ರಹ, ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2025, 16:07 IST
Last Updated 20 ಜೂನ್ 2025, 16:07 IST
ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಮುಸ್ಲಿಮರು ಪ್ರತಿಭಟನೆ ನಡೆಸಿದರು –ಪ್ರಜಾವಾಣಿ ಚಿತ್ರ
ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಮುಸ್ಲಿಮರು ಪ್ರತಿಭಟನೆ ನಡೆಸಿದರು –ಪ್ರಜಾವಾಣಿ ಚಿತ್ರ   

ಕಲಬುರಗಿ: ‘ಮಣಿಕಂಠ ರಾಠೋಡ ಸೇರಿದಂತೆ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವ ವಿವಿಧ ಪಕ್ಷಗಳ ಮುಖಂಡರು, ಸಂಘಟನೆಗಳ ಮುಖಂಡರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಮುಸ್ಲಿಂ ಸಮುದಾಯದ ಯುವಜನರು ಶುಕ್ರವಾರ ಪ್ರತಿಭಟನೆ ನಡೆಸಿದರು.

ನಗರದ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ವೃತ್ತದಲ್ಲಿ ಸಮಾವೇಶಗೊಂಡ ಯುವಕರು, ಜಿಲ್ಲಾಧಿಕಾರಿ ಕಚೇರಿ ತನಕ ಪ್ರತಿಭಟನಾ ಮೆರವಣಿಗೆ ನಡೆಸಿದರು. ‘ಮುಸ್ಲಿಮರ ಬಗೆಗೆ ಅವಹೇಳನಕಾರಿಯಾಗಿ ಮಾತನಾಡಿರುವ ಮಣಿಕಂಠ ವಿರುದ್ಧ ಎಫ್‌ಐಆರ್‌ ದಾಖಲಾದರೂ ಯಾಕೆ ಬಂಧಿಸಿಲ್ಲ’ ಎಂದು ಪ್ರತಿಭಟನಕಾರರು ಪ್ರಶ್ನಿಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಆಮ್‌ ಆದ್ಮಿ ಪಕ್ಷದ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾಧ್ಯಕ್ಷ ಸುಲೇಮಾನ್ ಅಲಿ, ‘ವಿವಿಧ ಪಕ್ಷಗಳ ಮುಖಂಡರು ಮುಸ್ಲಿಮರು ಲವ್‌ ಜಿಹಾದ್‌ನಲ್ಲಿ ತೊಡಗಿದ್ದಾರೆಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರ ಆರೋಪಗಳಿಗೆ ಸರ್ಕಾರ ಸಾಕ್ಷ್ಯಗಳನ್ನು ಕೇಳಬೇಕು. ಇಲ್ಲವೇ ಸುಳ್ಳು ಆರೋಪ ಮಾಡಿದಕ್ಕಾಗಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು. ಮುಸ್ಲಿಮರ ವಿರುದ್ಧ ಹೇಳಿಕೆ ನೀಡಿರುವ ಮಣಿಕಂಠ ರಾಠೋಡ ಅವರನ್ನು ಕೂಡಲೇ ಬಂಧಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

ಬಳಿಕ ಈ ಸಂಬಂಧ ಕಲಬುರಗಿ ಜಿಲ್ಲಾಧಿಕಾರಿ, ಕಲಬುರಗಿ ಪೊಲೀಸ್‌ ಕಮಿಷನರ್‌ ಅವರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರಿಗೆ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.