ಕಲಬುರಗಿ: ಸೇಡಂ ತಾಲ್ಲೂಕು ಆಸ್ಪತ್ರೆಯ ವೈದ್ಯ ಗೌತಮ ಶಿವಾರಯ ಹಾಗೂ ಸಿಬ್ಬಂದಿ ಮೇಲಿನ ಹಲ್ಲೆ ಘಟನೆ ಖಂಡಿಸಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಜಿಲ್ಲಾ ಶಾಖೆಯ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿ ಇದ್ದ ಡಾ. ಗೌತಮ ಅವರ ಮೇಲೆ ಅಪರಿಚಿತರು ಹಲ್ಲೆ ನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಇದನ್ನು ಜಿಲ್ಲಾ ಶಾಖೆ ಖಂಡಿಸುತ್ತದೆ. ಹಲ್ಲೆಯ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಇಂತಹ ಅಮಾನವೀಯ ಘಟನೆಗಳು ಪದೇ ಪದೇ ನಡೆಯುತ್ತಿದ್ದು, ವೈದ್ಯರು ಹಾಗೂ ವೈದ್ಯೋಪಚಾರ ಸಿಬ್ಬಂದಿ ನಿರ್ಭೀತಿಯಿಂದ ಕೆಲಸ ನಿರ್ವಹಿಸುವುದು ಕಷ್ಟಕರವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಹಲ್ಲೆ ಮಾಡಿದ ತಪ್ಪಿಸ್ಥರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಸಾರ್ವಜನಿಕ ಆಸ್ಪತ್ರೆಗಳಲ್ಲಿ ಪೊಲೀಸ್ ಚೆಕ್ ಪೋಸ್ಟ್ ತೆರೆದು, ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ವಹಿಸಬೇಕು ಎಂದು ಪ್ರತಿಭಟನಕಾರರು ಕೋರಿದ್ದಾರೆ.
ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಉಪಾಧ್ಯಕ್ಷ ಡಾ. ಸಿದ್ದು ಪಾಟೀಲ, ಕಾರ್ಯದರ್ಶಿ ಡಾ. ಸಂತೋಷ, ಪ್ರಮುಖರಾದ ಡಾ. ಚಂದ್ರಕಾಂತ ಆರ್.ಏರಿ ಸೇರಿ ಹಲವರು ಪಾಲ್ಗೊಂಡಿದ್ದರು.
ಆರೋಪಿಗಳ ಬಂಧನ: ವೈದ್ಯರ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ಸೇಡಂ ಠಾಣೆಯ ಪೊಲೀಸರು ಪ್ರವೀಣ್ ಹಾಗೂ ಶಿವು ಎಂಬುವರನ್ನು ಬಂಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.