ADVERTISEMENT

ಕುರುಬ ಸಮಾಜಕ್ಕೆ ಅವಮಾನ; ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2021, 3:59 IST
Last Updated 19 ಅಕ್ಟೋಬರ್ 2021, 3:59 IST
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಸಂಘದವರು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಸಂಘದವರು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು   

ಕಲಬುರಗಿ: ‘ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಅಗತೀರ್ಥ ಎಂಬಲ್ಲಿ ಕುರುಬ ಸಮಾಜದವರ ಮೇಲೆ ದೌರ್ಜನ್ಯ ನಡೆಸಿ, ಹಾಲುಮತ ಗುರುಗಳ ಬಗ್ಗೆಯೂ ಅವಹೇಳನಕಾರಿಯಾಗಿ ಮಾತನಾಡಲಾಗಿದೆ. ಇದಕ್ಕೆ ಸಂಬಂಧಿಸಿದ ವ್ಯಕ್ತಿ ಹಾಗೂ ಬೆಂಬಲ ನೀಡಿದ ಆರೋಪಿಗಳನ್ನು ಬಂಧಿಸಬೇಕು’ ಎಂದು ಆಗ್ರಹಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಸಂಘದ ಜಿಲ್ಲಾ ಘಟಕದವರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಸಮಾವೇಶಗೊಂಡ ಪ್ರತಿಭಟನಾಕಾರರು, ‘ಬಾಬುಗೌಡ ಎಂಬ ವ್ಯಕ್ತಿ ಅಗತೀರ್ಥದಲ್ಲಿ ಕುರುಬ ಸಮಾಜದ ಕೆಲವರ ಮೇಲೆ ದಬ್ಬಾಳಿಕೆ ನಡೆಸಿದ್ದಾರೆ. ಇದನ್ನು ಪ್ರಶ್ನಿಸಲು ಹೋದರೆ ಅವಾಚ್ಯವಾಗಿ ನಿಂದಿಸಿದ್ದಾರೆ. ನಮ್ಮ ಕುಲಗುರುಗಳ ಬಗ್ಗೆ ಕೀಳುಪದ ಬಳಕೆ ಮಾಡಿದ್ದಾರೆ. ಈ ಬಗ್ಗೆ ಕೆಂಭಾವಿ ಪೊಲೀಸ್‌ ಠಾಣೆಗೆ ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಅವರು ದೂರಿದರು.

ಈ ಘಟನೆಯ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರಿಂದ ಸಮಾಜಕ್ಕೆ ಮತ್ತಷ್ಟು ಅವಮಾನ ಮಾಡಿದಂತಾಗಿದೆ. ಆರೋಪಿಯನ್ನು ಶೀಘ್ರ ಬಂಧಿಸದಿದ್ದರೆ ಉಗ್ರ ಪ್ರತಿಭಟನೆ ಅನಿವಾರ್ಯ ಎಂದೂ ಅವರು ಎಚ್ಚರಿಸಿದ್ದಾರೆ.

ADVERTISEMENT

ಗೃಹಸಚಿವ ಅರಗ ಜ್ಞಾನೇಂದ್ರ ಅವರಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಲಾಯಿತು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪರಮೇಶ್ವರ ಆಲಗೂಡ, ಪ್ರಧಾನ ಕಾರ್ಯದರ್ಶಿ ರವಿ ಪೂಜಾರಿ ಜಂಬಗಾ, ಹಿರಿಯ ಉಪಾಧ್ಯಕ್ಷರಾದ ಶರಣು ಬೆಲ್ಲೂರ, ಜಗನ್ನಾಥ ಸಾಗೂರ, ರಮೇಶ ಪೂಜಾರಿ, ಉಪಾಧ್ಯಕ್ಷ ಬೀರು ಬಿದನೂರ ಮುಂತಾದವರು ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.