ADVERTISEMENT

ಕಲಬುರ್ಗಿ | ಸಿಎಎ ವಿರೋಧಿ ಹೋರಾಟಗಾರರ ಬಿಡುಗಡೆಗೆ ಒತ್ತಾಯ

ಮುಸ್ಲಿಂ ಮಹಿಳಾ ಸಂಘಟನೆ ‘ವುಮೆನ್ ಇಂಡಿಯಾ ಮೂವ್‌ಮೆಂಟ್‌’ನಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2020, 2:38 IST
Last Updated 18 ಜೂನ್ 2020, 2:38 IST
ಸಿಎಎ, ಎನ್‌ಆರ್‌ಸಿ ಹೋರಾಟಗಾರರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ವುಮೆನ್ ಇಂಡಿಯಾ ಮೂವ್‌ಮೆಂಟ್‌ ಸಂಘಟನೆ ಸದಸ್ಯೆಯರು ಪ್ರತಿಭಟನೆ ನಡೆಸಿದರು
ಸಿಎಎ, ಎನ್‌ಆರ್‌ಸಿ ಹೋರಾಟಗಾರರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ವುಮೆನ್ ಇಂಡಿಯಾ ಮೂವ್‌ಮೆಂಟ್‌ ಸಂಘಟನೆ ಸದಸ್ಯೆಯರು ಪ್ರತಿಭಟನೆ ನಡೆಸಿದರು   

ಕಲಬುರ್ಗಿ: ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ಜಾರಿ ವಿರೋಧಿಸಿ ಶಾಂತಿಯುತ ಪ್ರತಿಭಟನೆ ಮಾಡಿದ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ, ಜವಹರಲಾಲ್ ನೆಹರೂ ವಿ.ವಿ. ಹಾಗೂ ಶಾಹೀನ್‌ ಭಾಗ್‌ ಪ್ರತಿಭಟನಾಕಾರರನ್ನುಲಾಕ್‌ಡೌನ್‌ ಸಂದರ್ಭವನ್ನು ದುರ್ಬಳಕೆ ಮಾಡಿಕೊಂಡು ಬಂಧಿಸಲಾಗಿದೆ. ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ವುಮೆನ್ ಇಂಡಿಯಾ ಮೂವ್‌ಮೆಂಟ್‌ ಕಾರ್ಯಕರ್ತೆಯರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಜಾಮಿಯಾ ವಿ.ವಿ.ಯಲ್ಲಿ ಪಿಎಚ್‌.ಡಿ. ಅಧ್ಯಯನ ಮಾಡುತ್ತಿರುವ ಸಫೂರಾ ಝರ್ಗರ್‌ ಐದು ತಿಂಗಳ ಗರ್ಭಿಣಿಯಾಗಿದ್ದು, ಅವರನ್ನೂ ದುರುದ್ದೇಶದಿಂದ ಬಂಧಿಸಿ ಜೈಲಿಗೆ ತಳ್ಳಲಾಗಿದೆ. ಇಂತಹ 800ಕ್ಕೂ ಅಧಿಕ ಪ್ರತಿಭಟನಾಕಾರರನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ಆರೋಪಗಳು ಇನ್ನೂ ಸಾಬೀತಾಗಿಲ್ಲ. ಹೀಗಾಗಿ, ಅವರನ್ನು ಬಿಡುಗಡೆ ಮಾಡಬೇಕು ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷೆ ರೇಹಾನಾ ಬೇಗಂ ಹಾಗೂ ಇತರ ಸದಸ್ಯರು ಒತ್ತಾಯಿಸಿದರು.

ಪ್ರತಿಭಟನೆ ಮಾಡುವುದು ನಾಗರಿಕರ ಮೂಲಭೂತ ಹಕ್ಕಾಗಿದೆ. ಬಂಧಿತರು ಯಾವುದೇ ಹಿಂಸಾಚಾರದಲ್ಲಿ ಭಾಗಿಯಾದ ಅಥವಾ ಶಸ್ತ್ರಾಸ್ತ್ರಗಳನ್ನು ಬಳಕೆ ಮಾಡಿದ ಉದಾಹರಣೆ ಇಲ್ಲ. ಈ ಬಂಧನದಿಂದ ಎಷ್ಟೋ ಜನರ ಭವಿಷ್ಯ ಹಾಳಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.