ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಧ್ವಜಾರೋಹಣ ನೆರವೇರಿಸಿ ಗೌರವ ಸಲ್ಲಿಸಿದರು.
ಪ್ರಜಾವಾಣಿ ಚಿತ್ರಗಳು: ತಾಜುದ್ದೀನ್ ಆಜಾದ್
ಕಲಬುರಗಿ: ‘ಜಿಲ್ಲೆಯ ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸ ಪಡೆಯಲು ಅನುಕೂಲವಾಗುವಂತೆ ಬಿಸಿಎಂ, ಅಲ್ಪಸಂಖ್ಯಾತರ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಹೆಚ್ಚುವರಿಯಾಗಿ ಹಾಸ್ಟೆಲ್‌ಗಳನ್ನು ಮಂಜೂರು ಮಾಡಲಾಗಿದ್ದು, ಜಿಲ್ಲೆಯ ಕುಡಿಯುವ ನೀರಿಗೆ ಜಲಜೀವನ ಮಿಷನ್ ಅಡಿಯಲ್ಲಿ ₹ 460 ಕೋಟಿ ವೆಚ್ಚ ಮಾಡಲಾಗುತ್ತಿದೆ. 128 ಕೆರೆಗಳನ್ನು ತುಂಬಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ. ಒಟ್ಟಾರೆ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಶುರುವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು.
ಇಲ್ಲಿನ ಪೊಲೀಸ್ ಪರೇಡ್ ಮೈದಾನದಲ್ಲಿ ಭಾನುವಾರ 76ನೇ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ‘ನಮ್ಮ ಸರ್ಕಾರ ಭಾರತ ಸಂವಿಧಾನದ ಆಶಯಗಳ ಅಡಿಯಲ್ಲಿ ಮುನ್ನಡೆಯುತ್ತಿದೆ. ಜನಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ’ ಎಂದರು.
ರೇಷ್ಮೆ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕಿ ಕನೀಜ್ ಫಾತಿಮಾ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ, ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವೇಂದ್ರಪ್ಪ ಮರತೂರ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂಖಾನ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಬಿ., ಕೆಕೆಆರ್‌ಡಿಬಿ ಕಾರ್ಯದರ್ಶಿ ಎಂ. ಸುಂದರೇಶಬಾಬು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ್ ಶಿಂಧೆ, ಕಲಬುರಗಿ ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಹೆಚ್ಚುವರಿ ಎಸ್ಪಿ ಮಹೇಶ ಮೇಘಣ್ಣವರ, ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್, ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಪಾರ್ವತಿ, ಸಮಾಜ ಕಲ್ಯಾಣ ಇಲಾಖೆ ಹೆಚ್ಚುವರಿ ನಿರ್ದೇಶಕ ಅಲ್ಲಾಬಕಾಷ್, ಉಪನಿರ್ದೇಶಕಿ ಅನಸೂಯಾ ಹೂಗಾರ ಸೇರಿದಂತೆ ಇತರರು ಭಾಗವಹಿಸಿದ್ದರು.
₹ 226 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ
‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಕಲ್ಯಾಣ ಪಥ ಯೋಜನೆಯಡಿ ಕೆಕೆಆರ್‌ಡಿಬಿಯ ಶೇ 33ರಷ್ಟು ಅನುದಾನ ಬಳಸಿಕೊಂಡು ಜಿಲ್ಲೆಯಲ್ಲಿ ಒಟ್ಟು 255 ಕಿ.ಮೀ. ಉದ್ಧದ 64 ರಸ್ತೆಗಳನ್ನು ₹ 226.12 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು ಈಗಾಗಲೆ ಟೆಂಡರ್ ಪ್ರಕ್ರಿಯೆ ನಡೆದಿದೆ’ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
ಜೇವರ್ಗಿ ತಾಲ್ಲೂಕಿನ ಹರವಾಳ ಗ್ರಾಮದ ಹತ್ತಿರ ಭೀಮಾ ನದಿಗೆ ಅಡ್ಡಲಾಗಿ ಬಾಂದಾರು ಸಹಿತ ಸೇತುವೆ ನಿರ್ಮಾಣ ಕಾಮಗಾರಿಯನ್ನು ₹ 130 ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲಾಗುತ್ತಿದೆ. ಚಿತ್ತಾಪುರ ತಾಲ್ಲೂಕಿನ ಕೆರೆಗಳನ್ನು ₹ 135 ಕೋಟಿ ಅಂದಾಜು ಮೊತ್ತದಲ್ಲಿ ತುಂಬಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು.
ಮಾಧ್ಯಮದವರನ್ನು ತಳ್ಳಾಡಿದ ಪೊಲೀಸರು!
ಕಲಬುರಗಿಯ ಡಿಎಆರ್ ಮೈದಾನದಲ್ಲಿ ಗಣರಾಜ್ಯೋತ್ಸವದ ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಛಾಯಾಚಿತ್ರಗಳನ್ನು ಸೆರೆಹಿಡಿಯುತ್ತಿದ್ದ ಎಲೆಕ್ಟ್ರಾನಿಕ್ ಮಾಧ್ಯಮ ಹಾಗೂ ಪತ್ರಿಕಾ ಛಾಯಾಗ್ರಾಹಕರನ್ನು ತಳ್ಳಾಡುವ ಮೂಲಕ ಪೊಲೀಸರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಅನುಚಿತವಾಗಿ ವರ್ತಿಸಿದರು.
ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಎಲೆಕ್ಟ್ರಾನಿಕ್ ಮಾಧ್ಯಮದ ಕ್ಯಾಮೆರಾಮನ್‌ಗಳು ತಮ್ಮ ಚಾನೆಲ್‌ನ ಲೋಗೊಗಳನ್ನು ಸಚಿವರ ಎದುರಿನ ಪೋಡಿಯಂ ಮೇಲೆ ಇರಿಸಿದ್ದರು. ಪೊಲೀಸ್ ಸಿಬ್ಬಂದಿಯೊಬ್ಬರು ಏಕಾಏಕಿ ಅವುಗಳನ್ನು ಅಲ್ಲಿಂದ ತೆರವುಗೊಳಿಸಿದರು. ಇದನ್ನು ಪ್ರಶ್ನಿಸಿದ ಕ್ಯಾಮೆರಾಮನ್‌ಗಳನ್ನು ತಳ್ಳಾಡಿದರು.
ಛಾಯಾಚಿತ್ರ ತೆಗೆಯುತ್ತಿದ್ದ ‘ಪ್ರಜಾವಾಣಿ’ಯ ಛಾಯಾಗ್ರಾಹಕರನ್ನೂ ಪೊಲೀಸರು ಶರ್ಟ್ ಹಿಡಿದು ಎಳೆದರು. ಇದರಿಂದ ಕೆಲ ಹೊತ್ತು ವಾಗ್ವಾದ ನಡೆಯಿತು. ಮಾಧ್ಯಮ ಪ್ರತಿನಿಧಿಗಳು ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಪ್ರಶ್ನಿಸಿದಾಗ ಸಚಿವರು ಘಟನೆಗೆ ವಿಷಾದ ವ್ಯಕ್ತಪಡಿಸಿದರು.
ಮುಂದೆ ಹೀಗಾಗದಂತೆ ಅಗತ್ಯ ಸೂಚನೆ ನೀಡುವುದಾಗಿ ಭರವಸೆ ನೀಡಿದರು. ಇತ್ತೀಚೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ರಾಜ್ಯಪಾಲರು ಬಂದಿದ್ದ ಸಂದರ್ಭದಲ್ಲಿಯೂ ಕಾರ್ಯಕ್ರಮದ ವರದಿಗೆ ತೆರಳಿದ್ದ ಮಾಧ್ಯಮ ಪ್ರತಿನಿಧಿಗಳನ್ನು ಒಳಗೆ ಬಿಡದೇ ಪೊಲೀಸರು ಅನುಚಿತವಾಗಿ ವರ್ತಿಸಿದ್ದರು.
ವೇದಿಕೆಯಲ್ಲಿ ಕಾಂಗ್ರೆಸ್ ನಾಯಕರು
ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಿಷ್ಟಾಚಾರದ ಪ್ರಕಾರ ಉಸ್ತುವಾರಿ ಸಚಿವರು ಸಂಸದರು ಶಾಸಕರು ವಿಧಾನಪರಿಷತ್ ಸದಸ್ಯರು ನಿಗಮ ಮಂಡಳಿಗಳ ಅಧ್ಯಕ್ಷರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ವೇದಿಕೆಯಲ್ಲಿರಬೇಕು. ಆದರೆ ಶಿಷ್ಟಾಚಾರ ಉಲ್ಲಂಘಿಸಿ ಹಲವು ಕಾಂಗ್ರೆಸ್ ಮುಖಂಡರು ವೇದಿಕೆಯಲ್ಲಿ ಕುಳಿತಿದ್ದರು.
ಹಲವು ಸಂವಿಧಾನಗಳ ಉತ್ತಮ ಅಂಶ ಅಳವಡಿಕೆ
ಸಂವಿಧಾನ ಕರಡು ರಚನಾ ಸಮಿತಿ ಅಧ್ಯಕ್ಷರಾಗಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರು ವಿಶ್ವದ ಹಲವು ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ ಅದರಲ್ಲಿನ ಉತ್ತಮ ಅಂಶಗಳನ್ನು ಅಳವಡಿಸಿಕೊಂಡಿದ್ದರು. ಅದರ ಅಧ್ಯಯನ ಮಾಡಲು ಸಾಕಷ್ಟು ಸಮಯವೂ ಹಿಡಿಯಿತು. ಅಮೆರಿಕ ಆಸ್ಟ್ರೇಲಿಯಾ ಕೆನಡಾ ದಕ್ಷಿಣ ಆಫ್ರಿಕಾ ಫ್ರಾನ್ಸ್‌ನ ಸಂವಿಧಾನಗಳನ್ನು ಬಾಬಾಸಾಹೇಬರು ಆಮೂಲಾಗ್ರವಾಗಿ ಅಧ್ಯಯನ ಮಾಡಿದ್ದರು ಎಂದು ಪ್ರಿಯಾಂಕ್ ಖರ್ಗೆ ವಿಶ್ಲೇಷಿಸಿದರು.
ಸಾಂಸ್ಕೃತಿಕ ಲೋಕದ ಅನಾವರಣ
ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಸಾಂಸ್ಕೃತಿಕ ಲೋಕವೇ ಅನಾವರಣಗೊಂಡಿತ್ತು. ವಿವಿಧ ಶಾಲೆಗಳ ಮಕ್ಕಳು ದೇಶಭಕ್ತಿ ಗೀತೆಗೆ ನೃತ್ಯದ ಮೆರುಗು ನೀಡಿದರು. ಭಾರತ ಮಾತೆ ದೇಶದ ಗಡಿ ಕಾಯುವ ಸೈನಿಕರು ವಿವಿಧ ಬಗೆಯ ಸಂಸ್ಕೃತಿಗಳನ್ನು ಬಿಂಬಿಸುವ ದಿರಿಸು ತೊಟ್ಟ ಮಕ್ಕಳು ಆಕರ್ಷಕ ನೃತ್ಯಗಳನ್ನು ಪ್ರದರ್ಶಿಸಿ ಸೈ ಎನಿಸಿಕೊಂಡರು.
ಕೆಕೆಆರ್‌ಟಿಸಿಯು ಡಾ.ಬಿ.ಆರ್. ಅಂಬೇಡ್ಕರ್ ಮೂರ್ತಿಯನ್ನು ಅಲಂಕೃತ ವಾಹನದ ಮುಂಭಾಗದಲ್ಲಿ ಇರಿಸಿತ್ತು. ಸಂವಿಧಾನದ ಪ್ರತಿ ಸಂಸತ್ತಿನ ಪ್ರತಿಕೃತಿಗಳನ್ನು ಪ್ರದರ್ಶಿಸಲಾಯಿತು. ಜೆಸ್ಕಾಂ ಆರೋಗ್ಯ ಇಲಾಖೆಯ ಸ್ತಬ್ದಚಿತ್ರಗಳು ಗಮನ ಸೆಳೆದವು. ವಿವಿಧ ಕಲಾ ತಂಡಗಳು ಹಲಗೆ ಶಹನಾಯಿ ವಾದನವನ್ನು ಪ್ರಸ್ತುತಪಡಿಸಿದವು. ಸಚಿವ ಪ್ರಿಯಾಂಕ್ ಖರ್ಗೆ ಅವರು ಫಲಾನುಭವಿಗಳಿಗೆ ಕೃಷಿ ಯಂತ್ರೋಪಕರಣಗಳು ಡ್ರೋನ್ ಹಾರ್ವೆಸ್ಟರ್ ಯಂತ್ರಗಳನ್ನು ವಿತರಿಸಿದರು. ಪ್ರವಾಸೋದ್ಯಮ ಇಲಾಖೆಯ ನೂತನ ಕ್ಯಾಲೆಂಡರ್ ಅನ್ನು ಸಚಿವರು ಲೋಕಾರ್ಪಣೆ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.