ADVERTISEMENT

ಬೀದಿ ಬದಿ ವ್ಯಾಪಾರಿಗಳ ಸೌಲಭ್ಯಕ್ಕೆ ಕ್ರಮ

ಗುರುತಿನ ಚೀಟಿ ವಿತರಿಸಿದ ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ

​ಪ್ರಜಾವಾಣಿ ವಾರ್ತೆ
Published 24 ಜನವರಿ 2021, 6:29 IST
Last Updated 24 ಜನವರಿ 2021, 6:29 IST
ಕಲಬುರ್ಗಿಯಲ್ಲಿ ಶನಿವಾರ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ, ಶಾಸಕ ದತ್ತಾತ್ರೇಯ ಪಾಟೀಲ ಅವರು ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಿಸಿದರು
ಕಲಬುರ್ಗಿಯಲ್ಲಿ ಶನಿವಾರ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ, ಶಾಸಕ ದತ್ತಾತ್ರೇಯ ಪಾಟೀಲ ಅವರು ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಿಸಿದರು   

ಕಲಬುರ್ಗಿ: ‘ಬೀದಿ ವ್ಯಾಪಾರಿಗಳಿಗೆ ಸರ್ಕಾರದಿಂದ ಸಿಗುವ ಯೋಜನೆಗಳನ್ನು ಪಾರದರ್ಶಕವಾಗಿ ಅನುಷ್ಠಾನ ಗೊಳಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ತಿಳಿಸಿದರು.

ಕರ್ನಾಟಕ ರಾಜ್ಯ ಬೀದಿ ವ್ಯಾಪಾರಿಗಳ ಸಂಘದಿಂದ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಬೀದಿ ವ್ಯಾಪಾರಿಗಳ ಸಮಸ್ಯೆ ಮತ್ತು ಸವಾಲುಗಳು’ ಕುರಿತ ಚರ್ಚಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳನ್ನು ಬೀದಿಬದಿ ವ್ಯಾಪಾರಿಗಳಿಗೆ ತಲುಪಿಸುವುದು ಈಗಿನ ಅಗತ್ಯವಾಗಿದೆ. ಇದಕ್ಕಾಗಿ ನಾವು ಎಲ್ಲ ರೀತಿಯ ಸಹಕಾರ ನೀಡುತ್ತೇವೆ. ರಾಜ್ಯ ಸರ್ಕಾರ ಕೂಡ ಹಲವು ಸೌಕರ್ಯಗಳನ್ನು ನೀಡಿದ್ದು ವ್ಯಾಪಾರಿಗಳು ಸದುಪಯೋಗ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.

‘ಈಗಾಗಲೇ ಇದರ ಕುರಿತು ಹೋರಾಗಾರರಾದ ಲಕ್ಷ್ಮಣ ದಸ್ತಿ ಅವರು ಮಂಡಿಸಿದ ಬೇಡಿಕೆಗಳಂತೆ; ಕಾಲಮಿತಿಯೊಳಗೆ ಬೀದಿ ವ್ಯಾಪಾರಿಗಳ ಸಮೀಕ್ಷೆ ನಡೆಸಿ, ವ್ಯಾಪಾರ ಮಾಡುವ ಸ್ಥಳದಲ್ಲಿ ಗುರುತಿನ ಚೀಟಿ ನೀಡಲಾಗುವುದು’ ಎಂದು ಅವರು ಹೇಳಿದರು.

ADVERTISEMENT

ಹೋರಾಗಾರರಾದ ಲಕ್ಷ್ಮಣ ದಸ್ತಿ ಮಾತನಾಡಿ, ‘ಬೀದಿ ವ್ಯಾಪಾರಿಗಳ ಹಿತ ಕಾಪಾಡಲು ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವ ಸಲ್ಲಿಸಲಾಗಿದೆ. ನಗರದಲ್ಲಿ ಎಲ್ಲ ರೀತಿಯ ಬೀದಿಬದಿ ವ್ಯಾಪಾರ ಮಾಡುವವರು ಜೀವನ ಸುಗಮವಾಗುವಂತೆ ಕ್ರಮ ಕೈಗೊಳ್ಳಬೇಕು’ ಎಂದರು.

ಶ್ರೀಶೈಲಂ, ಸುಲಫಲ ಮಠದ ಸಾರಂಗಧರ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಪತ್ರಕರ್ತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಭವಾನಿಸಿಂಗ ಠಾಕೂರ್, ಹೋರಾಟಗಾರರ ಅರುಣಕುಮಾರ ಪಾಟೀಲ, ಲಿಂಗರಾಜ ಸಿರಗಾಪೂರ, ಅಣ್ಣಾರಾಯ ಧುತ್ತರಗಾಂವ, ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಜಗನ್ನಾಥ ಸೂರ್ಯವಂಶಿ, ದತ್ತು ಭಾಸಗಿ, ಪ್ರವೀಣ್ ಸಿಂಧೆ ಸೇರಿದಂತೆ ಅನೇಕರು ಇದ್ದರು.

ಸೋಮಶೇಖರ ಬಣಗಾರ ನಿರೂಪಿಸಿದರು. ವ್ಯಾಪಾರಸ್ಥರಿಗೆ ಗುರುತಿನ ಚೀಟಿ ನೀಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.