ADVERTISEMENT

9 ಜನ ಆರೋಪಿಗಳು ವಶಕ್ಕೆ

ಅಕ್ರಮ ಮರಳು ಸಂಗ್ರಹ; ಮಾರಾಟ

​ಪ್ರಜಾವಾಣಿ ವಾರ್ತೆ
Published 3 ಜುಲೈ 2018, 14:03 IST
Last Updated 3 ಜುಲೈ 2018, 14:03 IST

ಕಲಬುರ್ಗಿ: ‘ಅಕ್ರಮ ಮರಳು ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ 9 ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ್ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜೇವರ್ಗಿ ಮತ್ತು ಅಫಜಲಪುರ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿನ ಹೊಲ ಮತ್ತು ಸರ್ಕಾರಿ ಜಾಗದಲ್ಲಿ ಮರಳು ಸಂಗ್ರಹ ಮಾಡಿ ಇಡಲಾಗಿತ್ತು. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿ 1 ಜೆಸಿಬಿ, 4 ಟಿಪ್ಪರ್, 6 ಟ್ರ್ಯಾಕ್ಟರ್ ವಶಪಡಿಸಿಕೊಳ್ಳಲಾಗಿದೆ’ ಎಂದರು.

‘ಈ ಹಿಂದೆ ಅಫಜಲಪುರ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಸಂಗ್ರಹಿಸಿ ಇಟ್ಟಿದ್ದ ಮರಳನ್ನು ವಶಕ್ಕೆ ಪಡೆದು, 13 ಪ್ರಕರಣಗಳನ್ನು ದಾಖಲಿಸಲಾಗಿತ್ತು. ಅಕ್ರಮ ಮರಳು ದಂಧೆಯಲ್ಲಿ ಪೊಲೀಸ್ ಸಿಬ್ಬಂದಿ ಭಾಗಿಯಾಗಿರುವುದು ಕಂಡು ಬಂದರೆ ಶಿಸ್ತು ಕ್ರಮ ಜರುಗಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

‘ಅಕ್ರಮ ಮರಳು ಗಣಿಗಾರಿಕೆಯಲ್ಲಿ ಬಹಳಷ್ಟು ಜನರ ಪಾತ್ರವಿದೆ. ಒಬ್ಬರು, ಇಬ್ಬರಿಂದ ಅದು ಸಾಧ್ಯವಿಲ್ಲ. ನದಿ ಪಾತ್ರದಿಂದ ಮುಖ್ಯ ರಸ್ತೆವರೆಗಿನ ಹೊಲಗಳ ಮಾಲೀಕರು ಟಿಪ್ಪರ್/ಟ್ರ್ಯಾಕ್ಟರ್ ಅವರ ಹೊಲದಲ್ಲಿ ಹಾದು ಹೋಗಲು ಹಣ ಪಡೆಯುತ್ತಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ. ಕೆಲವು ಪ್ರಭಾವಿ ಮುಖಂಡರ ಕೈವಾಡವೂ ಇದೆ. ಯಾರು, ಎಷ್ಟೇ ಪ್ರಭಾವಿಗಳಾಗಿದ್ದರೂ ಅವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.