ADVERTISEMENT

₹ 776 ಕೋಟಿ ಮೊತ್ತದ ಕಾಮಗಾರಿಗಳಿಗೆ ಚಾಲನೆ: ಸಿಎಂ ಆಗಮನಕ್ಕೆ ಕ್ಷಣಗಣನೆ

​ಪ್ರಜಾವಾಣಿ ವಾರ್ತೆ
Published 12 ಜನವರಿ 2026, 7:45 IST
Last Updated 12 ಜನವರಿ 2026, 7:45 IST
   

ಕಲಬುರಗಿ: ಜೇವರ್ಗಿ ಹಾಗೂ ಯಡ್ರಾಮಿ ತಾಲ್ಲೂಕಿನಲ್ಲಿ ₹ 776.5 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳ್ಳಲಿರುವ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸದಸ್ಯರು‌ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಅಗಮನಕ್ಕೆ ಕ್ಷಣಗಣನೆ ಆರಂಭವಾಗಿದೆ.

ಜೇವರ್ಗಿ ಶಾಸಕ, ಕೆಕೆಆರ್ ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಅವರ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕಾಗಿ ಬೃಹತ್ ವೇದಿಕೆ ಹಾಗೂ ಶಾಮಿಯಾನ ಹಾಕಲಾಗಿದೆ. ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಿಂದ ಸಹಸ್ರಾರು ಜನ ಫಲಾನುಭವಿಗಳು, ಪಕ್ಷದ ಕಾರ್ಯಕರ್ತರು ಈಗಾಗಲೇ ವೇದಿಕೆ ಎದುರು ಸಮಾವೇಶಗೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷರೂ ಆದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಕಲಬುರಗಿಗೆ ಬಂದಿಳಿಯಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ‌ಮೂಲಕ ಯಡ್ರಾಮಿಗೆ ಬರಲಿದ್ದಾರೆ.

ADVERTISEMENT

ಕಲ್ಯಾಣ ಕರ್ನಾಟಕದ ವಿವಿಧೆಡೆ ₹ 600 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ 300 ಕೆಪಿಎಸ್ ಶಾಲೆಗಳು, ₹ 163.55 ಕೋಟಿ ವೆಚ್ಚದ 17 ಹೊಸ ಪ್ರಜಾಸೌಧ (ತಾಲ್ಲೂಕು ಕಚೇರಿ)ಗಳು ಹಾಗೂ ಜೇವರ್ಗಿ, ಯಡ್ರಾಮಿ ತಾಲ್ಲೂಕಿನ ವಿವಿಧ ಕುಡಿಯುವ ನೀರು, ಬಾಂದಾರ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡುವರು.

ಕಾರ್ಯಕ್ರಮಕ್ಕಾಗಿ ಜಿಲ್ಲಾಡಳಿತ ವಿಶೇಷ ಬಸ್ ಹಾಗೂ ಊಟದ ವ್ಯವಸ್ಥೆ ಮಾಡಿದೆ.

ಈ ಕಾರ್ಯಕ್ರಮ ಮುಗಿದ ಬಳಿಕ ಸೇಡಂನಲ್ಲಿ ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ವಿವಿಧ ನೀರಾವರಿ ಯೋಜನೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುವರು.

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ‌ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ, ಡಾ. ಅಜಯ್ ಸಿಂಗ್ ಕಾರ್ಯಕ್ರಮದ ಪೂರ್ವಸಿದ್ಧತೆಯನ್ನು ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.