
ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಜನಸ್ತೋಮ
ಸೇಡಂ (ಕಲಬುರಗಿ ಜಿಲ್ಲೆ): ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕೆ.ಕೆ.ಆರ್.ಡಿ.ಬಿಯಿಂದ ಆಯೋಜಿಸಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ಹಾಗೂ ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆಗೆ ಕ್ಷಣಗಣನೆ ಆರಂಭಗೊಂಡಿದೆ.
₹579.68 ಕೋಟಿ ವೆಚ್ಚದ 292 ಯೋಜನೆಗಳಿಗೆ ಅಡಿಗಲ್ಲು ಹಾಗೂ ₹110.35 ಕೋಟಿ ವೆಚ್ಚದಲ್ಲಿ ಈಗಾಗಲೇ ಕೈಗೆತ್ತಿಕೊಂಡು ಪೂರ್ಣಗೊಂಡ 76 ಅಭಿವೃದ್ಧಿ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.
ಈ ಕ್ಷಣವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಮಂದಿ ಸೇಡಂ ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಹಾಕಿರುವ ಜರ್ಮನ್ ಟೆಂಟ್‌ನಲ್ಲಿ ಮಧ್ಯಾಹ್ನ 1 ಗಂಟೆಯಿಂದಲೇ ಜಮಾಯಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷರೂ ಆಗಿರುವ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಬರುವಿಕೆಗೆ ಕಾದು ಕುಳಿತಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹579 ಕೋಟಿ ಮೊತ್ತದ ವಿವಿಧ ಇಲಾಖೆಗಳ 292 ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಅಲ್ಲದೇ ₹108 ಕೋಟಿ ಮೊತ್ತದಲ್ಲಿ ಪೂರ್ಣಗೊಂಡಿರುವ 75 ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ.
ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಕಲಬುರಗಿ ವಿಮಾನ ನಿಲ್ದಾಣಕ್ಕೆ, ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ಯಡ್ರಾಮಿ ಪಟ್ಟಣಕ್ಕೆ ತೆರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಲ್ಲಿನ ಕಾರ್ಯಕ್ರಮ ಮುಗಿಸಿ ಮತ್ತೆ ಹೆಲಿಕಾಪ್ಟರ್‌ನಲ್ಲಿ ಸೇಡಂ ಪಟ್ಟಣಕ್ಕೆ ಬರಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತ್ರವಲ್ಲದೇ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಡಾ.ಶರಣಪ್ರಕಾಶ ಪಾಟೀಲ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ.
ಬಾವುಟ, ಕಟೌಟ್‌ಗಳ ಅಬ್ಬರ:
ಕಾರ್ಯಕ್ರಮದ ಅಂಗವಾಗಿ ಸೇಡಂ ಪಟ್ಟಣದ ಬಸವೇಶ್ವರ ವೃತ್ತದಿಂದ ಕಾರ್ಯಕ್ರಮ ನಡೆಯುವ ತಾಲ್ಲೂಕು ಕ್ರೀಡಾಂಗಣದ ತನಕ 1 ಕಿಮೀಗೂ ಹೆಚ್ಚು ಉದ್ದದ ರಸ್ತೆಯ ಡಿವೈಡರ್ ನಲ್ಲಿ ಕಾಂಗ್ರೆಸ್ ಬಾವುಟ ಹಾಗೂ ಸ್ವಾಗತ ಕೋರುವ ಫಲಕಗಳನ್ನು ಕಟ್ಟಿ ಅಂದಗೊಳಿಸಲಾಗಿದೆ.
ಕ್ರೀಡಾಂಗಣದ ಪಕ್ಕದಲ್ಲೇ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.