ಕಲಬುರಗಿ: ಇತ್ತೀಚೆಗೆ ಲಿಂಗೈಕ್ಯರಾದ ಶರಣಬಸವೇಶ್ವರರ ಮಹಾದಾಸೋಹ ಸಂಸ್ಥಾನದ ಎಂಟನೇ ಪೀಠಾಧಿಪತಿ ಶರಣಬಸವಪ್ಪ ಅಪ್ಪ ಅವರ ಕುಟುಂಬವನ್ನು ಬುಧವಾರ ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಂತ್ವನ ಹೇಳಿದರು.
ನಗರದ ಕಲ್ಯಾಣ ಕರ್ನಾಟಕ ಉತ್ಸವದ ವೇದಿಕೆ ಕಾರ್ಯಕ್ರಮ ಮುಗಿಸಿಕೊಂಡು ನೇರವಾಗಿ ಶರಣಬಸವೇಶ್ವರರ ಮಹಾ ಸಂಸ್ಥಾನಕ್ಕೆ ಭೇಟಿ ನೀಡಿದರು. ಅಲ್ಲಿ ಶರಣಬಸವಪ್ಪ ಅಪ್ಪ ಅವರ ಚಿತ್ರಕ್ಕೆ ಪುಷ್ಪದಳ ಎರಚಿ ಶದ್ಧಾಂಜಲಿ ಅರ್ಪಿಸಿದರು.
ಬಳಿಕ ಶರಣ ಬಸವ ವಿಶ್ವವಿದ್ಯಾಲಯದ ಕುಲಾಧಿಪತಿಯೂ ಆಗಿರುವ ದಾಕ್ಷಾಯಣಿ ಎಸ್ ಅಪ್ಪ, ಸಂಸ್ಥಾನದ 9ನೇ ಪೀಠಾಧಿಪತಿ ದೊಡ್ಡಪ್ಪ ಎಸ್. ಅಪ್ಪ, ಶಿವಾನಿ ಎಸ್. ಅಪ್ಪ ಭವಾನಿಎಸ್. ಅಪ್ಪ, ಮಹೇಶ್ವರಿ ಎಸ್. ಅಪ್ಪ ಹಾಗೂ ಶರಣಬಸವೇಶ್ವರರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರೊಂದಿಗೆ ಮಾತನಾಡಿ ಮುಖ್ಯಮಂತ್ರಿ ಧೈರ್ಯ ತುಂಬಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶರಣಬಸವೇಶ್ವರ ಸಂಸ್ಥಾನಕ್ಕೆ ಭೇಟಿ ನೀಡಿದ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಕೆಕೆಆರ್‌ಡಿಬಿ ಅಧ್ಯಕ್ಷ ಅಜಯ್ ಸಿಂಗ್ ಮತ್ತು ಶಾಸಕ ಅಲ್ಲಮ ಪ್ರಭು ಪಾಟೀಲ ಸೇರಿದಂತೆ ಹಲವರು ಜೊತೆಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.