ADVERTISEMENT

ಬೇರೆಯವರ ಹೆಣದ ಮೇಲೆ ಬಿಜೆಪಿ ರಾಜಕೀಯ: ಖರ್ಗೆ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2019, 16:15 IST
Last Updated 2 ಮಾರ್ಚ್ 2019, 16:15 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ಕಲಬುರ್ಗಿ: ‘ಉಗ್ರರ ಮೇಲಿನ ದಾಳಿಯನ್ನು ಬಿಜೆಪಿಯವರು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಆ ಮೂಲಕ ಬೇರೆಯವರ ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ’ ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ವಿರುದ್ಧ ಕಿಡಿ ಕಾರಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಿಂದೆ ಹಾಗಾಗಿತ್ತು, ಈಗ ಹೀಗಾಗಿದೆ ಎಂದು ಹೇಳುತ್ತ ರಾಜಕೀಯ ಮಾಡುವುದು ಮತ್ತು ಈ ಬಾರಿ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳುವುದು ಸರಿಯಲ್ಲ’ ಎಂದು ಖಾರವಾಗಿ ಹೇಳಿದರು.

‘ಹಿಂದಿನ ಸರ್ಕಾರ ಸೈನಿಕರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಉಗ್ರರ ಮೇಲಿನ ದಾಳಿಯ ಪರಿಣಾಮ ಈ ಬಾರಿ 22ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಈ ಹೇಳಿಕೆಗಳನ್ನು ಗಮನಿಸಿದರೆ ಎಲ್ಲವನ್ನೂ ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ’ ಎಂದು ದೂರಿದರು.

ADVERTISEMENT

‘ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಮತ್ತು ಗಡಿ ಭಾಗದಲ್ಲಿ ಮೊದಲಿನಿಂದಲೂ ಗುಂಡಿನ ದಾಳಿ ನಡೆಯುತ್ತಿದೆ. ನಮ್ಮ ಸೈನಿಕರು ಪಾಕ್ ಸೇನೆಗೆ ತಕ್ಕ ಪ್ರತ್ಯುತ್ತರ ನೀಡುತ್ತಿದ್ದಾರೆ. ಕೇಂದ್ರ ಸರ್ಕಾರ ಮತ್ತು ಗುಪ್ತಚರ ಇಲಾಖೆಗಳು ಒಟ್ಟಿಗೆ ಚಿಂತನೆ ನಡೆಸಿ ದೇಶಕ್ಕೆ ಒಳ್ಳೆಯದಾಗುವ ನಿರ್ಣಯಗಳನ್ನು ಕೈಗೊಳ್ಳಬೇಕು’ ಎಂದು ಹೇಳಿದರು.

ರಾಜ್ಯ ಸರ್ಕಾರಿ ನೌಕರರ ಬಡ್ತಿ ಮೀಸಲಾತಿಗೆ ಸುಪ್ರೀಂಕೋರ್ಟ್ ತಡೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಖರ್ಗೆ, ‘ಯಾವ ಅಂಶಗಳ ಆಧಾರದ ಮೇಲೆ ತಡೆ ನೀಡಲಾಗಿದೆ ಎಂಬುದನ್ನು ತಿಳಿದುಕೊಳ್ಳುತ್ತೇನೆ. ಬಡ್ತಿ ಮೀಸಲಾತಿ ವಿಚಾರ ಪದೇ ಪದೇ ಸುಪ್ರೀಂಕೋರ್ಟ್ ಮೆಟ್ಟಿಲೇರುತ್ತಿರುವುದರಿಂದ ಎಲ್ಲರೂ ನಿರಾಶರಾಗಿದ್ದಾರೆ’ ಎಂದರು.

‘ಲೋಕಸಭೆ ಚುನಾವಣೆಯಲ್ಲಿ ಸ್ಥಾನ ಹಂಚಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀರ್ಮಾನ ಕೈಗೊಳ್ಳುತ್ತಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.