ADVERTISEMENT

ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ 200 KPS ಶಾಲೆಗಳ ಆರಂಭ: ಅಜಯ್ ಸಿಂಗ್

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2025, 12:53 IST
Last Updated 9 ಫೆಬ್ರುವರಿ 2025, 12:53 IST
ಡಾ.ಅಜಯಸಿಂಗ್‌
ಡಾ.ಅಜಯಸಿಂಗ್‌   

ಕಲಬುರಗಿ: ‘ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯು (ಕೆಕೆಆರ್‌ಡಿಬಿ) ಈ ಬಾರಿ ₹ 4500 ಕೋಟಿ ಅನುದಾನದ ಕ್ರಿಯಾ ಯೋಜನೆ ತಯಾರಿಸಿದ್ದು, ಒಂದು ತಿಂಗಳಲ್ಲಿ ಎಸ್‌ಸಿಪಿ–ಟಿಎಸ್‌ಪಿ ಮೀಸಲು ಅನುದಾನದ ಕ್ರಿಯಾ ಯೋಜನೆ ಸಿದ್ಧಪಡಿಸಲಾಗುವುದು’ ಎಂದು ಮಂಡಳಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಹೇಳಿದರು.

ಕೆಕೆಆರ್‌ಡಿಬಿ ಕಚೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಡುಗಡೆಯಾದ ಅನುದಾನ ಖರ್ಚೇ ಆಗುವುದಿಲ್ಲ ಎಂಬ ಆಪಾದನೆ ಇತ್ತು. ಸಿಬ್ಬಂದಿ ಕೊರತೆಯ ನಡುವೆಯೂ ಬೇರೆ– ಬೇರೆ ಇಲಾಖೆಗಳ ನೆರವು ಪಡೆದ ಕ್ರಿಯಾ ಯೋಜನೆಗಳನ್ನು ತಯಾರಿಸಿದ್ದೇವೆ. ಈ ವರ್ಷದ ಬಜೆಟ್‌ನಲ್ಲಿಯೂ ₹ 5 ಸಾವಿರ ಕೋಟಿ ಅನುದಾನ ಘೋಷಿಸುವ ನಿರೀಕ್ಷೆ ಇದೆ’ ಎಂದರು.

‘ನಮ್ಮ ಗ್ರಾಮೀಣ ಭಾಗದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಕೊಡಲು 200 ಕೆಪಿಎಸ್ ಮಾದರಿಯ ಕರ್ನಾಟಕ ಪಬ್ಲಿಕ್ ಶಾಲೆ ಸ್ಥಾಪನೆಗೆ ಚಿಂತನೆ ನಡೆದಿದೆ. ಮುಂಬರುವ ಬಜೆಟ್‌ನಲ್ಲಿ ಘೋಷಣೆಯಾಗಲಿದೆ. ಸಿಎಸ್‌ಆರ್ ನಿಧಿ ಬಳಸಿಕೊಂಡು ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ನಾಲ್ಕೈದು ಕೆಪಿಎಸ್‌ ಶಾಲೆಗಳನ್ನು ತಲಾ ₹ 5 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು’ ಎಂದು ಹೇಳಿದರು.

ADVERTISEMENT

‘ಮುಂದಿನ ವರ್ಷವೂ ಅಕ್ಷರ ಆವಿಷ್ಕಾರ ಕಾರ್ಯಕ್ರಮಗಳು ಮುಂದುವರೆಯಲಿದ್ದು, ಮಾರ್ಚ್ ಬಳಿಕ ನಡೆಯುವ ಮಂಡಳಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗುವುದು. ಈ ಭಾಗದ ಆರೋಗ್ಯ ಕ್ಷೇತ್ರದ ಸುಧಾರಣೆಗಾಗಿ ತಜ್ಞರ ಸಮಿತಿ ರಚಿಸುವ ಚಿಂತನೆ ಇದೆ’ ಎಂದು ಮಾಹಿತಿ ನೀಡಿದರು.

‘ಕಲಬುರಗಿಯಲ್ಲಿ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಮಂಡಳಿಯ ₹ 857 ಕೋಟಿ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿತ್ತು. ಅದರಲ್ಲಿ ₹ 439 ಕೋಟಿ ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ನಗರ ಆರೋಗ್ಯ ಉಪ ಕೇಂದ್ರಗಳ ನಿರ್ಮಾಣ, ಕಟ್ಟಡಗಳ ದುರಸ್ತಿ, ಆಂಬುಲೆನ್ಸ್‌ಗಳ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ’ ಎಂದರು.

‘50:50 ಅನುಪಾತದಲ್ಲಿ ಅಲ್ಪಸಂಖ್ಯಾತ ಇಲಾಖೆಯ ಸಹಯೋಗದಡಿ 48 ಮೌಲಾನಾ ಅಜಾದ್, ಮೊರಾರ್ಜಿ ದೇಸಾಯಿ ವಸತಿ ಶಾಲೆ, 34 ಬಿಸಿಎಂ ಹಾಸ್ಟೆಲ್, ₹ 186 ಕೋಟಿಯಲ್ಲಿ ಎಸ್‌ಸಿ, ಎಸ್‌ಟಿ ಹಾಸ್ಟೆಲ್ ನಿರ್ಮಿಸಲಾಗುವುದು. ಕಲ್ಯಾಣ ಪಥ ಯೋಜನೆಯಡಿ ಗ್ರಾಮೀಣ ರಸ್ತೆಗಳಿಗೆ ₹ 330 ಕೋಟಿ ನೀಡಿದ್ದು, ಶೀಘ್ರವೇ ಮುಖ್ಯಮಂತ್ರಿಗಳು ಚಾಲನೆ ನೀಡುವರು. ಮಿನಿ ವಿಧಾನಸೌಧಗಳ ನಿರ್ಮಾಣಕ್ಕೂ ಟೆಂಡರ್ ಕರೆಯಲಾಗಿದೆ’ ಎಂದು ಹೇಳಿದರು.

ಕೆಕೆಆರ್‌ಡಿಬಿ ಕಾರ್ಯದರ್ಶಿ ಸುಂದರೇಶ ಬಾಬು ಎಂ. ಉಪಸ್ಥಿತರಿದ್ದರು.

ಮಂಡಳಿಗೆ ಅನುದಾನವನ್ನು ಸಂಪೂರ್ಣವಾಗಿ ಖರ್ಚು ಮಾಡಲು ಪ್ರತ್ಯೇಕವಾಗಿ 229 ಎಂಜಿನಿಯರ್‌ ಒಳಗೊಂಡ ಎಂಜಿನಿಯರಿಂಗ್ ವಿಭಾಗ ಸ್ಥಾಪನೆ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸಲಾಗಿದೆ. ಖಾಲಿ ಹುದ್ದೆಗಳ ಭರ್ತಿಗೂ ಕ್ರಮ ವಹಿಸಲಾಗುವುದು
ಡಾ.ಅಜಯ್ ಸಿಂಗ್ ಕೆಕೆಆರ್‌ಡಿಬಿ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.