ADVERTISEMENT

ಪರೀಕ್ಷೆ ಬರೆಯಲಿದ್ದಾರೆ 29415 ವಿದ್ಯಾರ್ಥಿಗಳು

ಮಾರ್ಚ್ 4ರಿಂದ ಪಿ.ಯು ಪರೀಕ್ಷೆ: ಸುಸೂತ್ರವಾಗಿ ನಡೆಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 29 ಫೆಬ್ರುವರಿ 2020, 15:42 IST
Last Updated 29 ಫೆಬ್ರುವರಿ 2020, 15:42 IST
ಪಿಯು ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ ಮಾತನಾಡಿದರು. ಡಿಡಿಪಿಯು ಶಿವಶರಣಪ್ಪ ಮುಳೆಗಾಂವ ಇದ್ದರು
ಪಿಯು ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ ಮಾತನಾಡಿದರು. ಡಿಡಿಪಿಯು ಶಿವಶರಣಪ್ಪ ಮುಳೆಗಾಂವ ಇದ್ದರು   

ಕಲಬುರ್ಗಿ: ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯು ಮಾರ್ಚ್ 4ರಿಂದ 23ರವರೆಗೆ ಜರುಗಲಿದ್ದು, 47 ಪರೀಕ್ಷಾ ಕೇಂದ್ರಗಳಲ್ಲಿ 29,415 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಶನಿವಾರ ಪರೀಕ್ಷೆ ಕುರಿತು ಮಾಹಿತಿ ಪಡೆಯಲು ಪೂರ್ವಭಾವಿ ಸಭೆ ನಡೆಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ, ‘ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸುಸೂತ್ರವಾಗಿ ಪರೀಕ್ಷೆ ನಡೆಯಲು ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನಗರದ 25 ಕೇಂದ್ರ ಮತ್ತು ತಾಲ್ಲೂಕು ಹಂತದಲ್ಲಿನ 22 ಕೇಂದ್ರಗಳು ಸೇರಿದಂತೆ ಒಟ್ಟು 47 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ. 15,067 ಪುರುಷ ವಿದ್ಯಾರ್ಥಿಗಳು ಹಾಗೂ 14,348 ವಿದ್ಯಾರ್ಥಿನಿಯರು ಸೇರಿ 29415 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಇದರಲ್ಲಿ 22,755 ಮೊದಲ ಬಾರಿಗೆ, 5348 ರಿಪೀಟರ್ಸ್ ಮತ್ತು 1312 ಖಾಸಗಿ ವಿದ್ಯಾರ್ಥಿಗಳು ಸೇರಿದ್ದಾರೆ.

ADVERTISEMENT

ಪರೀಕ್ಷೆ ಸುಗಮವಾಗಿ ಜರುಗುವಂತೆ 47 ಕೇಂದ್ರಗಳಿಗೂ ಮುಖ್ಯ ಅಧೀಕ್ಷಕರನ್ನು ನೇಮಿಸಿದೆ. ಪ್ರಶ್ನೆ ಪತ್ರಿಕೆ ತೆಗೆದುಕೊಂಡು ಹೋಗಲು ಕ್ಷೇತ್ರ ಶಿಕ್ಷಣಾಧಿಕಾರಿ ನೇತೃತ್ವದಲ್ಲಿ ಮೂರು ಜನರ 13 ರೂಟ್ ಅಧಿಕಾರಿಗಳ ತಂಡ ರಚಿಸಲಾಗಿದ್ದು, ಈ ವಾಹನಕ್ಕೆಜಿಪಿಆರ್‌ಎಸ್‌ ಸಹ ಅಳವಡಿಸಲಾಗಿದೆ. ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರದಲ್ಲಿ ಸಿ.ಸಿ.ಟಿ.ವಿ. ಅಳವಡಿಸಲಾಗಿದೆ.

ಪರೀಕ್ಷಾ ಕೇಂದ್ರದ ಅಧೀಕ್ಷಕರು ಕೇಂದ್ರದಲ್ಲಿಯೇ ಹಾಜರಿದ್ದು, ಪಿಯು ಮಂಡಳಿ ನಿರ್ದೇಶನದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಕೇಂದ್ರದ ಅಧೀಕ್ಷಕರಿಗೆ ಸೂಚನೆ ನೀಡಿದ ಡಾ.ವಣಿಕ್ಯಾಳ, ಪರೀಕ್ಷೆ ಆರಂಭಗೊಳ್ಳುವ ಮುನ್ನ ಪರೀಕ್ಷಾ ಕೇಂದ್ರದಲ್ಲಿ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ, ಮೇಜು, ಬೆಳಕಿನ ವ್ಯವಸ್ಥೆ ಬಗ್ಗೆ ಅಧೀಕ್ಷಕರು ಮುಂಚೆಯೇ ಖಾತ್ರಿ ಪಡಿಸಿಕೊಳ್ಳಬೇಕು. ಪರೀಕ್ಷಾ ದಿನದಂದು ಕೇಂದ್ರದ ಪ್ರವೇಶ ಸ್ಥಳದಲ್ಲಿಯೇ ಪುರುಷ ಮತ್ತು ಮಹಿಳಾ ಸಿಬ್ಬಂದಿಯಿಂದ ಪ್ರತ್ಯೇಕವಾಗಿ ವಿದ್ಯಾರ್ಥಿಗಳನ್ನು ತಪಾಸಣೆ ಮಾಡಿಯೆ ಒಳಗಡೆ ಬಿಡಬೇಕು. ಪೊಲೀಸ್ ಬಂದೋಬಸ್ತ್‌ಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನಿರ್ದೇಶನ ನೀಡಲಾಗುವುದು ಎಂದರು.

ಮೊಬೈಲ್ ನಿಷೇಧ:ಪರೀಕ್ಷಾ ಕೇಂದ್ರದಲ್ಲಿ ಕೊಠಡಿ ಮೇಲ್ವಿಚಾರಕರು ಸೇರಿದಂತೆ ಅಭ್ಯರ್ಥಿಗಳು ಮೊಬೈಲ್ ಫೋನ್, ಪೇಜರ್, ಬ್ಲ್ಯೂಟೂಥ್, ವೈರಲೆಸ್ ಸೆಟ್, ಲ್ಯಾಪಟಾಪ್, ಸ್ಲೈಡ್ ರೂಲ್ ಕ್ಯಾಲ್ಕುಲೇಟರ್, ವಾಚ್ ಕ್ಯಾಲ್ಕುಲೇಟರ್, ಪಠ್ಯ ಪುಸ್ತಕ ಸೇರಿದಂತೆ ಇನ್ನಿತರ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತರುವುದನ್ನು ನಿಷೇಧಿಸಲಾಗಿದೆ. ನಕಲು ಮಾಡುವ ಅಭ್ಯರ್ಥಿಗಳು ಮತ್ತು ಅದಕ್ಕೆ ಸಹಕರಿಸಿ ಅಕ್ರಮದಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಚ್ಚರಿಸಿದರು.

4 ಸೂಕ್ಷ್ಮ ಪರೀಕ್ಷಾ ಕೇಂದ್ರಗಳು: ಸರ್ಕಾರಿ ಪದವಿ ಪೂರ್ವ ಕಾಲೇಜು ಅಫಜಲಪುರ, ಕರಜಗಿ ಹಾಗೂ ಮಾದನಹಿಪ್ಪರಗಾ ಮತ್ತು ಜೇವರ್ಗಿ ತಾಲೂಕಿನ ಸೊನ್ನ ಎಸ್.ಜಿ.ಎಸ್.ವಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಗಳನ್ನು ಸೂಕ್ಷ್ಮ ಪರೀಕ್ಷಾ ಕೇಂದ್ರಗಳೆಂದು ಗುರುತಿಸಲಾಗಿದೆ. ಇಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಇರಲಿದೆ.

ಹಾಲ್ ಟಿಕೆಟ್ ತೋರಿಸಿ ಪ್ರಯಾಣ ಮಾಡಿ:ಬೇರೆ ಊರಿಂದ ಬಸ್ ಮೂಲಕ ಪರೀಕ್ಷಾ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳು ತಮಗೆ ನೀಡಲಾದ ಬಸ್ ಪಾಸ್ ಅವಧಿ ಮುಗಿದರು ಸಹ ಪಿ.ಯು.ಸಿ. ಪರೀಕ್ಷಾ ಹಾಲ್ ಟಿಕೆಟ್ ಪ್ರದರ್ಶಿಸಿ ಉಚಿತ ಪ್ರಯಾಣ ಮಾಡಬಹುದಾಗಿದೆ ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವಶರಣಪ್ಪ ಮೂಳೆಗಾಂವ ಮಾತನಾಡಿ, ಪರೀಕ್ಷೆಗೆ ಎಲ್ಲಾ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಕಾಲೇಜುಗಳ ಆಡಳಿತ ಮಂಡಳಿಯು ಸಹಕಾರ ನೀಡಬೇಕು ಎಂದರು.

ಸಭೆಯಲ್ಲಿ ಡಿವೈಎಸ್ಪಿ ಜೇಮ್ಸ್ ಮಿನೇಜಸ್, ತಾಲ್ಲೂಕು ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮಾರ್ಗಾಧಿಕಾರಿಗಳು, ರೂಟ್ ಅಧಿಕಾರಿಗಳು, ಮುಖ್ಯ ಮೇಲ್ವಿಚಾರಕರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.