ಕಲಬುರಗಿ: ನಮ್ಮ ಕನ್ನಡ ನಾಡು–ನುಡಿಗೆ ತನ್ನದೇ ಆದ ಸೌಂದರ್ಯವಿದೆ. ಇಂತಹ ಕನ್ನಡದ ಸಂಸ್ಕೃತಿ ಎತ್ತಿ ಹಿಡಿಯುವ ಕಾರ್ಯವನ್ನು ನಾವೆಲ್ಲರೂ ಮಾಡಬೇಕಾಗಿದೆ’ ಎಂದು ಮಾಜಿ ಮೇಯರ್ ಶರಣಕುಮಾರ ಮೋದಿ ಹೇಳಿದರು.
ನಗರದ ಕನ್ನಡ ಭವನದಲ್ಲಿ ಭಾನುವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಕನ್ನಡ ಸಾಹಿತ್ಯ ಪರಿಷತ್ತು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಅವರಲ್ಲಿ ಮಾತೃಭಾಷಾ ಅಭಿಮಾನ ಬೆಳೆಸುತ್ತಿದೆ. ಈ ಕೆಲಸ ನಿರಂತರವಾಗಿ ನಡೆಯಲಿ’ ಎಂದರು.
ಕಸಾಪ ತಾಲ್ಲೂಕು ಅಧ್ಯಕ್ಷೆ ಶಿವಲೀಲಾ ಕಲಗುರ್ಕಿ ಮಾತನಾಡಿ, ‘ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಕನ್ನಡ ಬಗೆಗಿನ ಅನೇಕ ವಿಚಾರಗಳನ್ನು ಇಂಥ ಕಾರ್ಯಕ್ರಮಗಳ ಮೂಲಕ ಮಕ್ಕಳಿಗೆ ತಿಳಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ’ ಎಂದರು.
ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರ ಆಪ್ತ ಕಾರ್ಯದರ್ಶಿ ನಾಗೇಂದ್ರಪ್ಪ ಅವರಾದಿ, ರಾಜಯೋಗ ಶಿಕ್ಷಣ ಮತ್ತು ಸಂಶೋಧನಾ ಅನುಸಂಧಾನ ವಲಯದ ಸಂಯೋಜಕಿ ಸವಿತಾ ಬಿ.ಕೆ., ಕೃಷಿ ಪರಿಕರಗಳ ಉದ್ದಿಮೆದಾರ ದಯಾನಂದ ದೇವರಮನಿ ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.