ADVERTISEMENT

ಆರಗ ಜ್ಞಾನೇಂದ್ರ ವಿರುದ್ಧ ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2023, 4:32 IST
Last Updated 4 ಆಗಸ್ಟ್ 2023, 4:32 IST
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತು ಅವಹೇಳನಕಾರಿ ಮಾತನಾಡಿರುವ ಮಾಜಿ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ಹೊನಗುಂಟಿ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್‌ ಆಯುಕ್ತರಿಗೆ ಗುರುವಾರ ಮನವಿ ಸಲ್ಲಿಸಲಾಯಿತು
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತು ಅವಹೇಳನಕಾರಿ ಮಾತನಾಡಿರುವ ಮಾಜಿ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ಹೊನಗುಂಟಿ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್‌ ಆಯುಕ್ತರಿಗೆ ಗುರುವಾರ ಮನವಿ ಸಲ್ಲಿಸಲಾಯಿತು   

ಕಲಬುರಗಿ: ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ  ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಜಿಲ್ಲೆಯ ಹಲವು ಕಾಂಗ್ರೆಸ್‌ ಮುಖಂಡರು ಆಗ್ರಹಿಸಿದ್ದಾರೆ.

ಆರಗ ಜ್ಞಾನೇಂದ್ರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ಹೊನಗುಂಟಿ ನೇತೃತ್ವದಲ್ಲಿ ಕಲಬುರಗಿ ಪೊಲೀಸ್‌ ಆಯುಕ್ತ ಚೇತನ್‌ ಆರ್‌. ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.

‘ಕಸ್ತೂರಿ ರಂಗನ್ ವರದಿ ಕುರಿತು ಸಚಿವ ಈಶ್ವರ ಖಂಡ್ರೆ ಅವರ ಹೇಳಿಕೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಆರಗ ಜ್ಞಾನೇಂದ್ರ ಅವರು ತಮ್ಮ ಪ್ರತಿಭಟನಾ ಭಾಷಣದ ವೇಳೆ ಖರ್ಗೆ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರ ಹೇಳಿಕೆ ಖಂಡಿಸುತ್ತೇವೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಮಾಡಲಾಗುವುದು’ ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.

ADVERTISEMENT

ಮನವಿ ಸಲ್ಲಿಕೆ ವೇಳೆ ಈರಣ್ಣ ಝಳಕಿ, ಪರಶುರಾಮ ನಾಟೀಕಾರ, ಅಶ್ವಿನ್ ಸಂಕಾ, ಅಮರ ಶಿರವಾಳ, ಶಕೀಲ್‌ ಸರಡಗಿ, ಶ್ವೇತಾ ಬಳಿಚಕ್ರ,
ಮಂಜುಳಾ ಪಾಟೀಲ, ಶೇಖ ಸಮರಿನ್, ಪೃಥ್ವಿರಾಜ್ ಪಾಟೀಲ, ಸಿದ್ದು ನಂದ, ಸಂಪೂ ಪಾಟೀಲ, ಸಂಗಪಾಲ ಕಮುಲ್, ಅಭಿಷೇಕ್ ಕಿವಡೆ ಇದ್ದರು.

ಅಕ್ಷಮ್ಯ ಅಪರಾಧ:

‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಚಿವ ಈಶ್ವರ ಖಂಡ್ರೆ ವಿರುದ್ಧ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ವರ್ಣಭೇದದ ಆಧಾರದಲ್ಲಿ ಅವಮಾನಿಸಿರುವುದು ಅಕ್ಷಮ್ಯ ಅಪರಾಧ’ ಎಂದು ಜಿಲ್ಲಾ ಕಾಂಗ್ರೆಸ್‌ ಸಮಿತಿ ಒಬಿಸಿ ವಿಭಾಗದ ಉಪಾಧ್ಯಕ್ಷ ಪಿಡ್ಡಪ್ಪ ಜಾಲಗಾರ ಸುರಪುರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಮುತ್ಸದ್ದಿ ರಾಜಕಾರಣಿಯಾದ ಖರ್ಗೆ ಅವರ ಮೈಬಣ್ಣದ ಬಗ್ಗೆ ಮಾತನಾಡಿರುವ ಆರಗ ಜ್ಞಾನೇಂದ್ರ ರಾಜ್ಯದ ಜನರ ಕ್ಷಮೆಯಾಚಿಸಬೇಕು’ ಎಂದು ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.

ಆರಗ ಹೇಳಿಕೆಗೆ ಖಂಡನೆ:

ಮಲ್ಲಿಕಾರ್ಜುನ ಖರ್ಗೆ ಅವರ ಕುರಿತ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತು ಹೇಳಿಕೆ ನೀಡಿದ್ದನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಮಹಾಂತಪ್ಪ ಕೆ. ಸಂಗಾವಿ ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ‘ರಾಜ್ಯದಲ್ಲಿ ಬಿಜೆಪಿ ಸೋತು ಸುಣ್ಣವಾಗಿದೆ. ಆ ಹತಾಶೆಯಿಂದ ಹೊರಬರಲಾರದೆ ಪಕ್ಷದ ನಾಯಕರು ತಲೆ ಮತ್ತು ಮನಸ್ಸಿಗೆ ಸಂಬಂಧವಿಲ್ಲದಂತೆ ಹೇಳಿಕೆ ನೀಡುತ್ತಿದ್ದಾರೆ. ಶಾಸಕ ಆರಗ ಜ್ಞಾನೇಂದ್ರ ಅವರ ಹೇಳಿಕೆ ನೋಡಿದರೆ ಅವರಿಗೆ ಬುದ್ಧಿಭ್ರಮಣೆಯಾಗಿದೆ ಎಂಬ ಸಂಶಯ ಬರುತ್ತದೆ’ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಮಹಾಂತಪ್ಪ ಸಂಗಾವಿ ಪ್ರಕಟಣೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.