ADVERTISEMENT

ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ: ನೋಂದಣಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2025, 5:48 IST
Last Updated 27 ಅಕ್ಟೋಬರ್ 2025, 5:48 IST
<div class="paragraphs"><p>ಮತದಾರರ ಪಟ್ಟಿ</p></div>

ಮತದಾರರ ಪಟ್ಟಿ

   

– ಎ.ಐ ಚಿತ್ರ

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ನಡೆದಿದ್ದು, ಅರ್ಹ ಮತದಾರರು ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನವೆಂಬರ್ 6 ಕೊನೆಯ ದಿನವಾಗಿದೆ. ಕೊನೆ‌ಯ ದಿನದವರೆಗೆ ಕಾಯದೆ ಕೂಡಲೇ ಹೆಸರು ನೋಂದಣಿ ಮಾಡಿಕೊಳ್ಳುವಂತೆ ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್ ಮನವಿ ಮಾಡಿದ್ದಾರೆ.

ADVERTISEMENT

ಮತದಾರರ ಪರಿಷ್ಕರಣೆ ಭಾಗವಾಗಿ ಕರಡು ಮತದಾರರ ಪಟ್ಟಿಯನ್ನು ನವೆಂಬರ್ 25ರಂದು ಪ್ರಕಟಿಸಿ ಡಿಸೆಂಬರ್‌ 10ರೊಳಗೆ ಆಕ್ಷೇಪಣೆ ಆಹ್ವಾನಿಸಲಾಗುತ್ತದೆ. ಅಂತಿಮ ಮತದಾರರ ಪಟ್ಟಿಯನ್ನು ಡಿಸೆಂಬರ್ 30ರಂದು ಪ್ರಕಟಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಮತದಾರರ ಪಟ್ಟಿಯಲ್ಲಿ ಹೆಸರಿದ್ದರು ಸಹ ಇದೀಗ ಪುನಃ ನಮೂನೆ-19ರಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಹ ಶಿಕ್ಷಕರು ಹೆಚ್ಚಿನ ಆಸಕ್ತಿ ವಹಿಸಿ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಸುಭದ್ರ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಹೆಸರು ಸೇರಿಸಲು ಅರ್ಹತೆ ಏನು?: ಆಯಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರುವ ಹಾಗೂ 1ನೇ ನವೆಂಬರ್ 2025ಕ್ಕೆ ಮೊದಲ 6 ವಷಗಳ ಅವಧಿಯಲ್ಲಿ ಪ್ರೌಢ ಶಾಲೆಗಿಂತ ಕಡಿಮೆ ಇಲ್ಲದ ನಿರ್ದಿಷ್ಟಪಡಿಸಿದ ರಾಜ್ಯದೊಳಗಿನ ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಟ್ಟು ಕನಿಷ್ಠ 3 ವರ್ಷ ಬೋಧನಾ ವೃತ್ತಿಯಲ್ಲಿ ನಿರತವಾಗಿರುವ ಪ್ರತಿ ವ್ಯಕ್ತಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಹರಾಗಿರುತ್ತಾರೆ. ಅರ್ಜಿಯೊಂದಿಗೆ ಆಧಾರ್‌ ಕಾರ್ಡ್, ಚುನಾವಣಾ ಗುರುತಿನ ಚೀಟಿ, 2 ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರ ಹಾಗೂ ಶೈಕ್ಷಣಿಕ ಸಂಸ್ಥೆಗಳಿಂದ ಅನುಬಂಧ-2ರಲ್ಲಿ ಸಂಬಳ ಬಟವಾಡೆ ಅಧಿಕಾರಿಗಳಿಂದ ಪಡೆದ ಪ್ರಮಾಣಪತ್ರ ಲಗತ್ತಿಸಬೇಕು. ಮತದಾರ ಪಟ್ಟಿಗೆ ಹೆಸರು ಸೇರಿಸಲು ಬಯಸುವ ವ್ಯಕ್ತಿ ಕಾರ್ಯನಿರ್ವಹಿಸುವ ಸ್ಥಳ ಬದಲಾಗಿ ಸಾಮಾನ್ಯ ನಿವಾಸಿಯಾಗಿ ವಾಸಿಸುತ್ತಿರುವ ಸ್ಥಳೀಯ ಕ್ಷೇತ್ರದಲ್ಲಿ ಹೆಸರು ನೋಂದಾಯಿಸಬಹುದಾಗಿದೆ.

ಮಿಂಚಿನ ನೋಂದಣಿ ಅಭಿಯಾನ ನಾಳೆ

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭವಾಗಿದ್ದು ಅ.27 30 ಮತ್ತು ನವೆಂಬರ್ 3ರಂದು ಜಿಲ್ಲೆಯಾದ್ಯಂತ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಈಶಾನ್ಯ ಶಿಕ್ಷಕರ ಕ್ಷೇತ್ರದ ಎಲ್ಲಾ ಮತದಾರರರು ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ. ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂಬ ಉದ್ದೇಶದಿಂದ ಈ ವಿಶೇಷ ನೊಂದಣಿ ಆಯೋಜಿಸಿದ್ದು ಶಿಕ್ಷಕ ಮತದಾರರು ಇದರ ಲಾಭ ಪಡೆಯುವಂತೆ ಅವರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.