ADVERTISEMENT

ಮಹಿಳೆಯರಿಗೆ ಶೇ. 33 ಮೀಸಲಾತಿಗೆ ಆಗ್ರಹ

ಮಹಿಳೆಯರ ಬೇಡಿಕೆಗಳ ಪಟ್ಟಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2019, 15:42 IST
Last Updated 10 ಏಪ್ರಿಲ್ 2019, 15:42 IST
ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ನೇತೃತ್ವ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಬುಧವಾರ ಮಹಿಳೆಯರ ಬೇಡಿಕೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಯಿತು
ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ನೇತೃತ್ವ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಬುಧವಾರ ಮಹಿಳೆಯರ ಬೇಡಿಕೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಯಿತು   

ಕಲಬುರ್ಗಿ: ಸಂಸತ್ತು ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವ ಮಹಿಳಾ ಮಸೂದೆಯನ್ನು ಜಾರಿಗೆ ತರುವುದು ಸೇರಿದಂತೆ ವಿವಿಧ ಬೇಡಿಕೆಗಳ ಪಟ್ಟಿಯನ್ನು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ನೇತೃತ್ವ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ನಗರದ ಜಗತ್ ವೃತ್ತದಲ್ಲಿ ಬುಧವಾರ ಬಿಡುಗಡೆ ಮಾಡಲಾಯಿತು.

ಪಂಚಾಯಿತಿ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ ನೀಡಬೇಕು. ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿ ಉಳಿದ ಎಲ್ಲರಿಗೂ ಪಡಿತರ ಚೀಟಿ ವಿತರಿಸಬೇಕು. ಪಡಿತರ ವ್ಯವಸ್ಥೆಯನ್ನು ಬಲಪಡಿಸಬೇಕು. ಸಬ್ಸಿಡಿ ದರದಲ್ಲಿ ಎಲ್‌ಪಿಜಿ ಸಿಲಿಂಡರ್ ವಿತರಿಸಲು ಯಾವುದೇ ಮಿತಿ ಹೇರಬಾರದು. 5 ಲೀಟರ್ ಸೀಮೆ ಎಣ್ಣೆ ವಿತರಿಸಬೇಕು. ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಇಳಿಸಬೇಕು ಎಂದು ಸಂಘಟನೆಗಳ ಮುಖಂಡರು ಒತ್ತಾಯಿಸಿದರು.

ಉದ್ಯೋಗ ಖಾತ್ರಿ ಯೋಜನೆಯಡಿ 100 ದಿನಕ್ಕೂ ಹೆಚ್ಚು ಕೆಲಸ ಕೊಡಬೇಕು. ಈ ಯೋಜನೆಯನ್ನು ನಗರ ಪ್ರದೇಶಗಳಿಗೂ ವಿಸ್ತರಿಸಬೇಕು. ತಿಂಗಳಿಗೆ ₹18 ಸಾವಿರ ಕನಿಷ್ಠ ವೇತನ ನಿಗದಿ ಮಾಡಬೇಕು. 55 ವರ್ಷ ಮೀರಿದ ಮಹಿಳೆಯರು, ವಿಧವೆಯರು ಮತ್ತು ಅಂಗವಿಕಲ ಮಹಿಳೆಯರಿಗೆ ತಿಂಗಳಿಗೆ ₹2 ಸಾವಿರ ಭತ್ಯೆ ನೀಡಬೇಕು. ನೆಲ, ನೀರು ಮತ್ತು ನೈಸರ್ಗಿಕ ಸಂಪನ್ಮೂಲಗಳನ್ನು ರಕ್ಷಿಸಬೇಕು. ಅಕ್ರಮ ಒತ್ತುವರಿಯನ್ನು ತೆರವುಗೊಳಿಸಬೇಕು. ಸಂಪನ್ಮೂಲ ಕ್ರೋಡೀಕರಣ ಮತ್ತು ಅನುದಾನ ವಿತರಣೆಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.

ADVERTISEMENT

ನಾಗರಿಕ ಹಕ್ಕುಗಳ ರಕ್ಷಣೆ, ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಕಾನೂನು ಸಂಬಂಧಿ ವಿಷಯಗಳ ಬಗ್ಗೆ ಗಮನಹರಿಸಬೇಕು. ಈ ಎಲ್ಲಾ ಬೇಡಿಕೆಗಳನ್ನು ಪ್ರಣಾಳಿಕೆಯಲ್ಲಿ ಸೇರಿಸಿಕೊಳ್ಳುವ ಪಕ್ಷಕ್ಕೆ ಮಹಿಳೆಯರ ಬೆಂಬಲ ನೀಡಲಾಗುವುದು ಎಂದು ಘೋಷಿಸಿದರು.

ಸಂಘಟನೆಗಳ ಮುಖಂಡರಾದ ನೀಲಾ ಕೆ., ನಂದಾದೇವಿ ಮಂಗೊಂಡಿ, ಆರ್.ಕೆ.ಹುಡಗಿ, ಚಂದಮ್ಮ ಗೋಳಾ, ಅಶ್ವಿನಿ ಮದನಕರ್, ಹೇಮಾ ಅಟ್ಟೂರ, ಜಯಶ್ರೀ ಬೆಣ್ಣೂರ, ಸನತಕುಮಾರ್ ಬೆಳಗಲಿ, ಶಶಿಕಲಾ ಬೆಳಗಲಿ, ಗಂಗಾಧರ ಮಾಡಬೂಳ, ಸಂದೀಪ ಮಾಳಗೆ, ಕಲ್ಯಾಣಿ ಭಜಂತ್ರಿ, ವರ್ಷಾ ಬಾಣಿ, ಪಾರ್ವತಿ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.