ADVERTISEMENT

ಅನುದಾನ ದುರ್ಬಳಕೆ ಆರೋಪ: ತನಿಖಾ ವರದಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2021, 4:26 IST
Last Updated 23 ಏಪ್ರಿಲ್ 2021, 4:26 IST
ದಿಲೀಷ್ ಶಶಿ
ದಿಲೀಷ್ ಶಶಿ   

ಕಲಬುರ್ಗಿ: ಜಿಲ್ಲೆಯ ಆಳಂದ ಪಟ್ಟಣದಲ್ಲಿ ಲಿಂಗಾಯತ ಸಮುದಾಯ ಭವನ ನಿರ್ಮಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ₹ 1 ಕೋಟಿಯನ್ನು ಬಿಡುಗಡೆ ಮಾಡಿದ್ದು, ಆದರೆ, ಕಟ್ಟಡ ನಿರ್ಮಿಸುವ ಹೊಣೆ ಹೊತ್ತಿರುವ ಆಳಂದದ ಅಖಿಲ ಭಾರತ ವೀರಶೈವ ಮಹಾಸಭಾ ಟ್ರಸ್ಟ್ ನವರು ಭವನದ ಬದಲು ವಾಣಿಜ್ಯ ಸಂಕೀರ್ಣ ನಿರ್ಮಿಸಿರುವ ಆರೋಪಗಳ ಬಗ್ಗೆ ತನಿಖೆ ನಡೆಸಲು ಜಿಲ್ಲಾ ಪಂಚಾಯಿತಿ ಸಿಇಓ ಡಾ. ದಿಲೀಷ್ ಶಶಿ ಅವರು ತನಿಖಾ ತಂಡವನ್ನು ರಚಿಸಿದ್ದಾರೆ.

ಈ ಸಂಬಂಧ ಶ್ರೀರಾಮಸೇನಾ ರಾಜ್ಯ ಘಟಕದ ಅಧ್ಯಕ್ಷ, ಅಂದೋಲಾದ ಸಿದ್ಧಲಿಂಗ ಸ್ವಾಮೀಜಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ‍ಪತ್ರ ಬರೆದಿದ್ದರು. ಭವನದ ಬದಲು ಬೇರೆ ಉದ್ದೇಶಕ್ಕೆ ಹಣ ದುರ್ಬಳಕೆ ಮಾಡಿಕೊ ಳ್ಳಲಾಗಿದೆ. ಈ ಕಟ್ಟಡವನ್ನು ಪರಿಶೀಲಿಸದೇ ಜಿಲ್ಲಾ ಬಿಸಿಎಂ ಅಧಿಕಾರಿ ರಮೇಶ ಸಂಗಾ ಅವರು ಅನುದಾನ ಬಿಡುಗಡೆ ಮಾಡಿದ್ದಾರೆ. ಆದ್ದರಿಂದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು.

ಸಿಇಓ ಅವರು ಜಿ.ಪಂ. ಮುಖ್ಯ ಯೋಜನಾಧಿಕಾರಿ, ಮುಖ್ಯ ಲೆಕ್ಕಾಧಿಕಾರಿ ಹಾಗೂ ಪಂಚಾಯತರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ ಅವರನ್ನೊಳಗೊಂಡ ತನಿಖಾ ತಂಡವನ್ನು ರಚಿಸಿದ್ದಾರೆ.

ADVERTISEMENT

ತಂಡವು ಪೂರಕ ದಾಖಲೆಗಳೊಂದಿಗೆ ಹಾಗೂ ಸ್ಪಷ್ಟ ಅಭಿಪ್ರಾಯದೊಂದಿಗೆ ತನಿಖಾ ವರದಿ ಸಲ್ಲಿಸಬೇಕು ಎಂದು ಡಾ. ಶಶಿ ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.