ADVERTISEMENT

ಅ.29 ರಂದು ವಾಲ್ಮೀಕಿ ಜಯಂತಿ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2012, 7:55 IST
Last Updated 10 ಅಕ್ಟೋಬರ್ 2012, 7:55 IST

ಮಡಿಕೇರಿ: ಜಿಲ್ಲಾಡಳಿತದ ವತಿಯಿಂದ ವಾಲ್ಮೀಕಿ ಜಯಂತಿಯನ್ನು ಅ.29 ರಂದು ಜಿಲ್ಲೆಯ ಎ್ಲ್ಲಲ ಸಂಘ ಸಂಸ್ಥೆಗಳು, ಸಮುದಾಯದ ಮುಖಂಡರ ಸಲಹೆ ಹಾಗೂ ಸಹಕಾರದೊಂದಿಗೆ ಆಚರಿಸಲು ನಿರ್ಧರಿಸಲಾಯಿತು. 

ನಗರದ ಕೋಟೆ ವಿಧಾನ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ವಾಲ್ಮೀಕಿ ಜಯಂತಿ ಆಚರಿಸಲು ತೀರ್ಮಾನಿಸಲಾಯಿತು. 

ಜಿಲ್ಲಾಧಿಕಾರಿ ಡಾ.ಎನ್.ವಿ.ಪ್ರಸಾದ್ ಮಾತನಾಡಿ, ಮಹಾನ್ ಮಾನವತಾವಾದಿ ಮಹರ್ಷಿ ವಾಲ್ಮೀಕಿ ಅವರ ಜಯಂತಿ ಆಚರಣೆಯನ್ನು ಅಚ್ಚುಕಟ್ಟಾಗಿ ಏರ್ಪಡಿಸುವಂತಾಗಲು ಎಲ್ಲ ಇಲಾಖೆ ಅಧಿಕಾರಿಗಳು ಕೈಜೋಡಿಸಬೇಕು ಎಂದರು.

ನಗರದ ಗದ್ದುಗೆ ಬಳಿಯಿಂದ ಮಹದೇವ ಪೇಟೆ ಮಾರ್ಗ ಕಾವೇರಿ ಕಲಾಕ್ಷೇತ್ರದವರೆಗೆ ಮೆರವಣಿಗೆ ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು. ಜಿಲ್ಲೆಯ ಗಿರಿಜನ ಜಾನಪದ ಕಲಾತಂಡಗಳನ್ನು ಆಹ್ವಾನಿಸುವಂತೆ ಸೂಚಿಸಿದರು.

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅಧಿಕ ಅಂಕ ಪಡೆದವರಿಗೆ ಪ್ರೋತ್ಸಾಹ ಧನ ನೀಡಲು ಹಾಗೂ ಗಿರಿಜನ ಸಮುದಾಯದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸುವ ಬಗ್ಗೆ ಪರಿಶೀಲಿಸುವಂತೆ ಅವರು ತಿಳಿಸಿದರು.
ಅಂದು ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕು ಕೇಂದ್ರಗಳಲ್ಲಿ ತಹಶೀಲ್ದಾರ್ ಹಾಗೂ ನಾನಾ ಇಲಾಖೆ ಅಧಿಕಾರಿಗಳು ಜೊತೆಗೂಡಿ ವಾಲ್ಮೀಕಿ ಜಯಂತಿ ಏರ್ಪಡಿಸುವಂತೆ ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಬಿ. ಅಂಜನಪ್ಪ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಲಕ್ಷ್ಮಣ ಜೆ.ಗಂಟಿ ಹಲವು ಸಲಹೆ ಮಾಡಿದರು.

ಗಿರಿಜನ ಸಮುದಾಯದ ಮುಖಂಡರಾದ ಕುಡಿಯರ ಮುತ್ತಪ್ಪ, ಜಿಲ್ಲಾ ನಾಯಕ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎನ್.ಅಶ್ವಥ್, ಜಿಲ್ಲಾ ಜಾಗೃತಿ ಸಮಿತಿಯ ಪಳನಿ ಪ್ರಕಾಶ್ ಮತ್ತು ನಾಯಕ ಸಂಘದ ಅಧ್ಯಕ್ಷ ನಂದ ಕುಮಾರ್, ಕುಟ್ಟ ಗ್ರಾಮದ ಪುಷ್ಕರ್ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಇಂದಿರಮ್ಮ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪಿ.ಪುಟ್ಟಸ್ವಾಮಿ ಮುಖ್ಯ ಲೆಕ್ಕಾಧಿಕಾರಿ ನಂಜುಂಡ ರಾಜು ಹಾಜರಿದ್ದರು.

ನವೆಂಬರ್‌ನಲ್ಲಿ ಎಚ್‌ಐವಿ ಅರಿವು ಕಾರ್ಯಕ್ರಮ
ಮಡಿಕೇರಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ                         ಎಚ್‌ಐವಿ/ಏಡ್ಸ್ ಬಗ್ಗೆ ಅರಿವು ಮೂಡಿಸುವ ದಿಸೆಯಲ್ಲಿ ನವೆಂಬರ್ ತಿಂಗಳಲ್ಲಿ ಕಾರ್ಯಕ್ರಮ ಹಮ್ಮಿ ಕೊಳ್ಳಲು ಉದ್ದೇಶಿಸಲಾಗಿದ್ದು, ಈ ಕುರಿತು ಜಿಲ್ಲಾಧಿಕಾರಿ ಡಾ.ಎನ್.ವಿ. ಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಪೂರ್ವಭಾವಿ ಸಭೆ ನಡೆಸಿದರು.

ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡುವುದು.  ಈ ಕಾರ್ಯಕರ್ತೆ ಯರು ಕಾರ್ಮಿಕರ ಮನೆಗಳಿಗೆ ತೆರಳಿ ಎಚ್.ಐ.ವಿ. ಏಡ್ಸ್ ಬಗ್ಗೆ ಅರಿವು ಮೂಡಿಸುವುದು ಹಾಗೂ ಜನಪದ ಕಲಾ ತಂಡ ಮೂಲಕ ಹಾಗೂ ಎಚ್.ಐ.ವಿ./ಏಡ್ಸ್ ಬಗ್ಗೆ ಚಿತ್ರ ಪ್ರದರ್ಶನ ಏರ್ಪಡಿಸಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.

ಆರೋಗ್ಯ ಇಲಾಖೆಯ ಜೊತೆ ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಾರ್ತಾ ಇಲಾಖೆಗಳ ಅಧಿಕಾರಿಗಳು ಈ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಹಕಾರ ನಿಡುವಂತೆ ಜಿಲ್ಲಾಧಿಕಾರಿ ಡಾ.ಎನ್.ವಿ ಪ್ರಸಾದ್ ನಿರ್ದೇಶನ ನೀಡಿದರು.

ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಕೆ.ಜಿ.ಸಿದ್ದಯ್ಯ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಮೇಲ್ವಿಚಾರಕಿ ಸುನಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಲಿಂಗರಾಜು, ಜಿಲ್ಲಾ ಕಾರ್ಮಿಕ ಅಧಿಕಾರಿ ವಿಜಯಕುಮಾರ್, ತಾಲ್ಲೂಕು ವೈದ್ಯಾಧಿಕಾರಿಗಳಾದ ಡಾ. ರವಿಕುಮಾರ್ (ಮಡಿಕೇರಿ), ಡಾ.ವೆಂಕಟೇಶ್(ವಿರಾಜಪೇಟೆ), ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯಾಧಿಕಾರಿ ಡಾ.ಆನಂದ್, ಆರೋಗ್ಯ ಶಿಕ್ಷಣಾಧೀಕಾರಿ ಶಿವಣ್ಣ ಗೌಡ, ಜಾಯ್ಸ ಮೆನೆಜಸ್ ಇದ್ದರು.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.