ADVERTISEMENT

ಕಾವೇರಿ ತೀರ್ಥೋದ್ಭವ: ಸಕಲ ಸಿದ್ಧತೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2013, 11:15 IST
Last Updated 13 ಸೆಪ್ಟೆಂಬರ್ 2013, 11:15 IST

ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಾನದಲ್ಲಿ ಅಕ್ಟೋಬರ್ 17ರಂದು ಮಧ್ಯಾಹ್ನ 12.01 ಗಂಟೆಗೆ ನಡೆಯಲಿರುವ ತುಲಾ ಸಂಕ್ರಮಣ ಜಾತ್ರೆಯನ್ನು ಭಕ್ತಿಪೂರ್ವಕವಾಗಿ ವಿಜೃಂಭಣೆಯಿಂದ ನಡೆಸಲು ಈಗಿನಿಂದಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ನಾನಾ ಇಲಾಖೆ ಅಧಿಕಾರಿಗಳಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮತ್ತು ಶಾಸಕ ಕೆ.ಜಿ.ಬೋಪಯ್ಯ ಅವರು ಸೂಚನೆ ನೀಡಿದ್ದಾರೆ.

ಇಲ್ಲಿನ ಕೋಟೆ ವಿಧಾನ ಸಭಾಂಗಣದಲ್ಲಿ ಗುರುವಾರ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಯಿತು. ಈ ಬಾರಿ ಹಗಲು ವೇಳೆಯಲ್ಲಿ ತೀರ್ಥೋದ್ಭವವಾಗುವುದರಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇರುವುದರಿಂದ ಅಗತ್ಯ ಸೂಕ್ತ ಭದ್ರತೆ, ಸ್ವಚ್ಚತೆ, ಕುಡಿಯುವ ನೀರು ಸಾರಿಗೆ ಸಂಪರ್ಕ ಮತ್ತಿತರ ಮೂಲ ಸೌಲಭ್ಯ ಕಲ್ಪಿಸಲು ತ್ವರಿತ ಕ್ರಮವಹಿಸುವಂತೆ ಸಚಿವರು ಮತ್ತು ಶಾಸಕರು  ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ತುಲಾ ಸಂಕ್ರಮಣ ಜಾತ್ರೆ ಸಂದರ್ಭದಲ್ಲಿ ಮಡಿಕೇರಿ- ಭಾಗಮಂಡಲ- ತಲಕಾವೇರಿ ರಸ್ತೆಯ ಎರಡು ಬದಿಯಲ್ಲಿ ಕಾಡನ್ನು ಕಡಿಸುವುದು ಮತ್ತು ರಸ್ತೆಯನ್ನು ದುರಸ್ತಿ ಪಡಿಸುವಂತೆ ಅರಣ್ಯ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಾತ್ರಾ ಸಂದರ್ಭದಲ್ಲಿ ಭಾಗಮಂಡಲ ಗ್ರಾಮ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಕ್ರಮವಹಿಸುವಂತೆ ಸೆಸ್ಕ್ ಅಧಿಕಾರಿಗಳಿಗೆ ಸೂಚಿಸಲಾಯಿತು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಬಿ.ಶಿವಪ್ಪ, ಉಪಾಧ್ಯಕ್ಷೆ ಬಿದ್ದಂಡ ಉಷಾ ದೇವಮ್ಮ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ರಾಜಾರಾವ್,  ಜಿಲ್ಲಾಧಿಕಾರಿ ಅನುರಾಗ್ ತಿವಾರಿ, ಸಿಇಓ ಕೆ.ಬಿ.ಅಂಜನಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಉಪ ವಿಭಾಗಾಧಿಕಾರಿ ಅಭಿರಾಮ್ ಜಿ.ಶಂಕರ್, ಪ್ರಮುಖರಾದ ಕೋಡಿ ಚಂದ್ರಶೇಖರ್, ನಾರಾಯಣಾಚಾರ್, ಕೋಡಿ ಮೋಟಯ್ಯ ಹಾಗೂ ನಾನಾ ಇಲಾಖೆ ಅಧಿಕಾರಿಗಳು  ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.