ADVERTISEMENT

ಗಣೇಶ್‌ರಾವ್ ಕುತ್ಯಾಡಿಗೆ ಡಿವಿಜಿ ಮುಕ್ತಕ ಸಾಹಿತ್ಯ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 3 ಜನವರಿ 2012, 8:15 IST
Last Updated 3 ಜನವರಿ 2012, 8:15 IST

ಮೈಸೂರು: ಕರ್ನಾಟಕ ಮುಕ್ತಕ ಸಾಹಿತ್ಯ ಅಕಾಡೆಮಿ ಟ್ರಸ್ಟ್ 12ನೇ ವಾರ್ಷಿಕೋತ್ಸವದ ಅಂಗವಾಗಿ ಸಾಹಿತಿ ಗಣೇಶ್‌ರಾವ್ ಕುತ್ಯಾಡಿ ಅವರಿಗೆ 2011ನೇ ಸಾಲಿನ ಡಿವಿಜಿ ಮುಕ್ತಕ ಸಾಹಿತ್ಯ ಪ್ರಶಸ್ತಿಯನ್ನು ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಗಣೇಶ್‌ರಾವ್ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಎಂಎ (ಇತಿಹಾಸ) ಸ್ನಾತಕೋತ್ತರ ಪದವಿ ಮತ್ತು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎ (ಕನ್ನಡ) ಪದವಿ ಪಡೆದಿದ್ದಾರೆ. ನಾಟಕಾಭಿನಯದಲ್ಲಿ ಡಿಪ್ಲೊಮಾ ಪಡೆದಿದ್ದಾರೆ.

ಕುತ್ಯಾಡಿ ಅವರು ಮೈಸೂರಿನ ಅಧ್ಯಾಪಕರ ತರಬೇತಿ ಸಂಸ್ಥೆ, ಸಮೀರ ಬೋಧಕ ಶಿಕ್ಷಣ ಸಂಸ್ಥೆ, ಮಳವಳ್ಳಿಯ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಕನ್ನಡ ಸಾಹಿತ್ಯ ಪ್ರಕಾರಗಳಾದ ಏಳೆ, ದ್ವಿಪದಿ, ತ್ರಿಪದಿ, ಚೌಪದಿ, ಸಾಂಗತ್ಯಗಳಲ್ಲಿ 20 ಸಾವಿರಕ್ಕೂ ಹೆಚ್ಚು ಮುಕ್ತಕಗಳನ್ನು ರಚಿಸಿದ್ದಾರೆ. ಅನೇಕ ಪ್ರಶಸ್ತಿ-ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.

ಪ್ರಶಸ್ತಿಯು 5 ಸಾವಿರ ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆ, ಶಾಲು ಇತ್ಯಾದಿಗಳನ್ನು ಒಳಗೊಂಡಿರುತ್ತದೆ.
ಮೈಸೂರಿನಲ್ಲಿ ಜ.29 ರಂದು ನಡೆಯುವ ಅಕಾಡೆಮಿಯ 12ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷ ಎಸ್.ರಾಮಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.