ADVERTISEMENT

ಗ್ರಾ.ಪಂ.ಗೆ 1 ಕೋಟಿ ಅನುದಾನಕ್ಕೆ ಚಿಂತನೆ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2011, 8:25 IST
Last Updated 16 ಫೆಬ್ರುವರಿ 2011, 8:25 IST

ವಿರಾಜಪೇಟೆ: ಗ್ರಾಮ ಪಂಚಾಯಿತಿಗಳಲ್ಲಿ ಸರ್ಕಾರದಿಂದ ಬರುವ ಅನುದಾನವನ್ನು ಸೂಕ್ತ ರೀತಿಯಲ್ಲಿ ಬಳಕೆ ಮಾಡಬೇಕು, ಕಾಮಗಾರಿ ಗುಣಮಟ್ಟದ ಬಗ್ಗೆ ನಿಗಾ ಇರಿಸಬೇಕು, ಗ್ರಾಮ ಪಂಚಾಯಿತಿಗಳಿಗೆ ತಲಾ ರೂ. 1 ಕೋಟಿ ಅನುದಾನ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ವಿಧಾನಸಭಾ ಅಧ್ಯಕ್ಷ ಕೆ.ಜಿ.ಬೋಪಯ್ಯ ತಿಳಿಸಿದರು. ಕೆದಮುಳ್ಳೂರು ಗ್ರಾಮ ಪಂಚಾಯಿತಿಯಿಂದ ಮಂಗಳವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂರು ಕಡೆಗಳಲ್ಲಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ, ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿಗಳು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು ಗ್ರಾಮಸ್ಥರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಸಮಸ್ಯೆಗಳಿಗೆ ಸ್ಪಂದಿಸುವಂತಾಗಬೇಕು ಎಂದರು.

ಜಿಲ್ಲಾ ಪಂಚಾಯಿತಿಯ ಪೊನ್ನಂಪೇಟೆ ವಿಭಾಗದ ಸಹಾಯಕ ಎಂಜಿನಿಯರ್ ಮಹದೇವ್ ಮಾತನಾಡಿ, ಕೆದಮುಳ್ಳೂರು ಗ್ರಾಮ ಪಂಚಾಯಿತಿಯ ರಸ್ತೆ ದುರಸ್ತಿ ಹಾಗೂ ನಿರ್ಮಾಣಕ್ಕಾಗಿ ರೂ. 18 ಲಕ್ಷ ಅನುದಾನ ಬಂದಿದೆ. ರಸ್ತೆ ಕಾಮಗಾರಿಯನ್ನು ಸದ್ಯದಲ್ಲಿಯೇ ಆರಂಭಿಸಲಾಗುವುದು ಎಂದು ತಿಳಿಸಿದರು ಗ್ರಾಮದ ಹಿರಿಯರಾದ ಪಾಲೇಂಗಡ ಗಣಪತಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಮಣಿ, ಕೆ. ಕಾಂತಿ ಬೆಳ್ಳಿಯಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯೆ ಕೋದಂಡ ಮಂಜುಳಾ ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಬೊಳಕಾರಂಡ ರವಿ ಅಯ್ಯಣ್ಣ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪಕ್ಷದ ಕಾರ್ಯಕರ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.