ADVERTISEMENT

ಚೇರಂಬಾಣೆ ಈಗ ಶಾಂತ

​ಪ್ರಜಾವಾಣಿ ವಾರ್ತೆ
Published 9 ಜನವರಿ 2011, 6:55 IST
Last Updated 9 ಜನವರಿ 2011, 6:55 IST

ಮಡಿಕೇರಿ: ಚೇರಂಬಾಣೆ ಈಗ ಶಾಂತವಾಗಿದೆ. ಕ್ಷುಲ್ಲಕ ಕಾರಣಕ್ಕಾಗಿ ಶುಕ್ರವಾರ ಇಲ್ಲಿ ಗಲಭೆ ನಡೆದಿದ್ದು, ಎರಡು ಗುಂಪಿನ ನಡುವೆ ಮೂಡಿದ ವೈಮನಸ್ಸು ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಸಿತ್ತು.

ಎರಡು ಹೋಟೆಲ್‌ಗಳ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು ಸಾಕಷ್ಟು ನಷ್ಟ ಉಂಟು ಮಾಡಿದ್ದರು. ಇದೊಂದು ಪ್ರೇಮ ಗಲಭೆ ಎಂದು ಕೆಲವರು ದೂರಿಕೊಂಡಿದ್ದಾರೆ. ಇನ್ನೂ ಕೆಲವರು ಹಳೇ ವೈಷಮ್ಯವೇ ಗಲಭೆಗೆ ಕಾರಣ ಎಂದು ಆರೋಪಿಸಿದ್ದಾರೆ.

ಹೆಚ್ಚುವರಿ ಪೊಲೀಸರನ್ನು ಗ್ರಾಮದಲ್ಲಿ ನಿಯೋಜಿಸಿರುವುದರಿಂದ ಪರಿಸ್ಥಿತಿ ಶಾಂತವಾಗಿದೆ. ಎರಡೂ ಗುಂಪುಗಳ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ರಾಜೀ ಮೂಲಕ ಗೊಂದಲಕ್ಕೆ ತೆರೆ ಎಳೆಯುವುದಾಗಿ ಕೆಲವು ಪ್ರಮುಖರು ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಈ ಮಧ್ಯೆ, ಎಸ್ಪಿ ಮಂಜುನಾಥ್ ಕೆ. ಅಣ್ಣಿಗೇರಿ, ಡಿವೈಎಸ್‌ಪಿ ಜೆ.ಡಿ. ಪ್ರಕಾಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಾಳೆ (ಭಾನುವಾರ) ಸಂಜೆ 4 ಗಂಟೆಗೆ ಎರಡೂ ಗುಂಪುಗಳ ಮುಖಂಡರ ಸಭೆ ಕರೆಯಲಾಗಿದ್ದು, ಪರಸ್ಪರ ಸಂಧಾನದ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಡಿವೈಎಸ್‌ಪಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.