ADVERTISEMENT

ಛಾಯಾಗ್ರಾಹಕರಿಂದ ಪ್ರತಿಭಟನಾ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2013, 5:38 IST
Last Updated 21 ಸೆಪ್ಟೆಂಬರ್ 2013, 5:38 IST

ಮಡಿಕೇರಿ: ಛಾಯಾಗ್ರಾಹಕ ವೃತ್ತಿಯಲ್ಲಿ ತೊಡಗಿಸಿಕೊಳ್ಳದಂತೆ ಸರ್ಕಾರಿ ನೌಕರರು ಹಾಗೂ ಇತರ ಉದ್ಯೋಗಿಗಳ ಮೇಲೆ ನಿರ್ಬಂಧ ಹೇರಬೇಕೆಂದು ಕೊಡಗು ಜಿಲ್ಲಾ ಛಾಯಾಗ್ರಾಹಕರ ಸಂಘದ ಪದಾಧಿಕಾರಿಗಳು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.  

ಜಿಲ್ಲೆಯಾದ್ಯಂತ ಸ್ಟುಡಿಯೋಗಳನ್ನು ಮುಚ್ಚಿ ನಗರದ ಗಾಂಧಿ ಮೈದಾನದಲ್ಲಿ ಜಮಾಯಿಸಿದ ಛಾಯಾಗ್ರಾಹಕರು, ಇಲ್ಲಿನ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ತೆರಳಿದ ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.

ಸಂಘದ ಜಿಲ್ಲಾ ಘಟಕ ಅಧ್ಯಕ್ಷ ಕೆ.ಎಸ್‌. ನಾಗೇಶ್‌ ಮಾತನಾಡಿ, ಜಿಲ್ಲೆಯಲ್ಲಿ ಸಾವಿರಾರು ಕುಟುಂಬಗಳು ಈ ವೃತ್ತಿಯನ್ನೇ ಜೀವನ ಆಧಾರವಾಗಿಸಿ­ಕೊಂಡಿದ್ದಾರೆ. ಕುಟುಂಬದ ಎಲ್ಲ ಮಂದಿ ಈ ದುಡಿಮೆಯನ್ನು ನಂಬಿದ್ದಾರೆ ಎಂದು ತಿಳಿಸಿದರು.

ಆದರೆ ಇತ್ತೀಚಿನ ದಿನಗಳಲ್ಲಿ ವೃತ್ತಿಪರರಲ್ಲದವರು, ಶಿಕ್ಷಕರು, ಗ್ರಾಮ ಪಂಚಾಯಿತಿ ನೌಕರರು ಹಾಗೂ ಕೆಲವು ಮಾಧ್ಯಮ ಪ್ರತಿನಿಧಿಗಳು ಛಾಯಾಗ್ರಹಣ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದರು.

ಇದರಿಂದಾಗಿ ಛಾಯಾಗ್ರಹಣ ವೃತ್ತಿಯನ್ನೇ ನಂಬಿದ ಕುಟುಂಬಗಳು ಕಷ್ಟಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ದೂರಿದರು.

ಈ ಬಗ್ಗೆ ಶೀಘ್ರವೇ ಕ್ರಮ ವಹಿಸಿ, ಜಿಲ್ಲಾ ಛಾಯಾಗ್ರಾಹಕರಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯುವಂತೆ ಜಿಲ್ಲಾಧಿಕಾರಿ ಅನುರಾಗ್‌ ತಿವಾರಿ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಸಂಘದ ರಾಜ್ಯ ನಿರ್ದೇಶಕರಾದ ಸಲೀಂ, ನಾಗೇಂದ್ರ, ಮಡಿಕೇರಿ ತಾಲ್ಲೂಕು ಘಟಕ ಅಧ್ಯಕ್ಷ  ಹನೀಫ್‌, ಸೋಮವಾರಪೇಟೆ ತಾಲ್ಲೂಕು ಘಟಕ ಅಧ್ಯಕ್ಷ ಸುಬ್ರಮಣಿ, ವಿರಾಜಪೇಟೆ ತಾಲ್ಲೂಕು ಅಧ್ಯಕ್ಷ ಜಗನಿವಾಸ್‌, ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ಸುಮಾರು 200ಕ್ಕೂ ಅಧಿಕ ಛಾಯಾಗ್ರಾಹಕರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.