ADVERTISEMENT

ದ್ವಿತೀಯ ಪಿಯುಸಿ ಪರೀಕ್ಷೆ:ಕಟ್ಟುನಿಟ್ಟಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2012, 9:30 IST
Last Updated 7 ಮಾರ್ಚ್ 2012, 9:30 IST

ಮಡಿಕೇರಿ: ಮಾ.15ರಿಂದ 30ರವರೆಗೆ ಜಿಲ್ಲೆಯ 14 ಕೇಂದ್ರಗಳಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ವಿ.ಪ್ರಸಾದ್ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ವಿಡಿಯೊ ಕಾನ್ಪರೆನ್ಸ್ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವ ಕುರಿತು ಮಂಗಳವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಪರೀಕ್ಷಾ ಅಕ್ರಮಗಳು ನಡೆಯುವುದು ಕಡಿಮೆ. ಪಾರದರ್ಶಕವಾಗಿ ಪರೀಕ್ಷೆಗಳು ನಡೆಯುತ್ತವೆ ಎಂಬುದು ಎಲ್ಲರ ಅಭಿಪ್ರಾಯ. ಇದು ಈ ವರ್ಷವೂ ಮುಂದುವರೆಯಬೇಕು ಎಂದರು.

ಒಂದು ವೇಳೆ ನಕಲು ಅಥವಾ ಪರೀಕ್ಷಾ ಅಕ್ರಮಗಳಿಗೆ ಅವಕಾಶ ನೀಡಿದ್ದು ಕಂಡು ಬಂದಲ್ಲಿ ಪರೀಕ್ಷಾ ಮೇಲ್ವಿಚಾರಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು.

ಈ ಹಿನ್ನೆಲೆಯಲ್ಲಿ ಕಟ್ಟುನಿಟ್ಟಾಗಿ ಪರೀಕ್ಷೆಗಳನ್ನು ನಡೆಸುವಂತೆ ಶಿಕ್ಷಣ ಇಲಾಖೆ ಹಾಗೂ ಇತರ ಪೂರಕ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪರೀಕ್ಷಾ ಕೇಂದ್ರದೊಳಕ್ಕೆ ಮೊಬೈಲ್ ಅಥವಾ ಪುಸ್ತಕಗಳನ್ನು ಕೊಂಡೊಯ್ಯುವುದು ನಿಷೇಧಿಸಲಾಗಿದ್ದು, ಈ ಬಗ್ಗೆ ಮೇಲ್ವಿಚಾರಕರು ಜಾಗೃತಿ ವಹಿಸಬೇಕು. ನಕಲು ಮಾಡುವವರು ಹಾಗೂ ಪ್ರೇರೆಪಣೆ ನೀಡುವವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು  ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಚಂದ್ರೇಗೌಡ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ರೋಹಿಣಿ, ಮೂರು ತಾಲ್ಲೂಕುಗಳ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಕ್ಷಣಾಧಿಕಾರಿ ಸುರೇಶ್, ಜಿಲ್ಲಾ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಇತರರು ಸಭೆಯಲ್ಲಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.