
ಕುಶಾಲನಗರ: ಗ್ರಾಮೀಣ ಪ್ರದೇಶದಲ್ಲಿ ನಶಿಸಿ ಹೋಗುತ್ತಿರುವ ಕಲೆ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಯುವ ಸೌರಭ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಡಗು ಜಿಲ್ಲೆ ಇವರ ಸಹಯೋಗದಲ್ಲಿ ಮಂಗಳವಾರ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಏರ್ಪಡಿಸಿದ್ದ ಜಿಲ್ಲಾಮಟ್ಟದ ಯುವ ಸೌರಭ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಾನಪದ ಕಲೆ ಹಾಗೂ ನಾಟಕ ಹಳ್ಳಿಯ ಜನರ ಜೀವನದಲ್ಲಿ ಹಾಸುಹೊಕ್ಕಾಗಿವೆ. ಆದರೆ, ಇತ್ತೀಚಿನ ದಿನಗಳಲ್ಲಿ ಪಾಶ್ಚಿಮಾತ್ಯ ಸಂಸ್ಕೃತಿಯಿಂದ ಪ್ರಾಚೀನ ಕಲೆ ನಶಿಸಿ ಹೋಗುತ್ತಿದೆ ಎಂದು ಹೇಳಿದರು.
ವಿದ್ಯಾರ್ಥಿಗಳು ಹಾಗೂ ಯುವಜನಾಂಗ ಕಲೆಯ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ತಮ್ಮ ವಿದ್ಯಾಭ್ಯಾಸದೊಂದಿಗೆ ಜಾನಪದ ಕಲೆ, ಭರತನಾಟ್ಯ ಹಾಗೂ ನಾಟಕಗಳನ್ನು ಕಲಿಸಬೇಕು.ಶಾಲೆಯಲ್ಲಿ ವರ್ಷಕ್ಕೊಮ್ಮೆ ಇಂತಹ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿದರೆ, ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕರು ಭರವಸೆ ನೀಡಿದರು.
ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ಕಲೆಗಳಿಗೆ ಪ್ರೋತ್ಸಾಹ ನೀಡುವುದರೊಂದಿಗೆ ಕಲಾವಿದರು ತಮ್ಮ ಪ್ರತಿಭೆ ಪ್ರದರ್ಶಿಸಲು ಯುವ ಸೌರಭ ಸೂಕ್ತ ವೇದಿಕೆಯಾಗಿದೆ ಎಂದು ಹೇಳಿದರು.
ಕಲೆಗೆ ಯಾವುದೇ ಜಾತಿ, ಧರ್ಮ, ಭಾಷೆಯ ಸಂಕೋಲೆಯಿಲ್ಲ. ಇದು ಕಲಾವಿದನಲ್ಲಿ ಸೃಜನಶೀಲ ಹಾಗೂ ವ್ಯಕ್ತಿತ್ವದ ವಿಕಸನಕ್ಕೆ ಕಾರಣವಾಗಲಿದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ಮಾತನಾಡಿದರು. ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೌಮ್ಯ ಅಧ್ಯಕ್ಷತೆ ವಹಿಸಿದ್ದರು.
ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪುರಸಭೆ ಸದಸ್ಯ ನವೀನ ಕುಮಾರ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ನಾಗೇಶ್, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀದೇವಿ, ಗ್ರಾಮ ಪಂಚಾಯಿತಿ ಸದಸ್ಯರಾದ ನಾರಾಯಣ, ಶಾಲಾ ಪೋಷಕರ ಸಂಘದ ಅಧ್ಯಕ್ಷ ನಾಗೇಶ್ ಪೂಜಾರಿ, ಕಲಾವಿದ ಭರ್ಮಣ್ಣ ಬೆಟ್ಟಗೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್, ನಿವೃತ್ತ ಅಧಿಕಾರಿ ಮಣಜೂರು ಮಂಜುನಾಥ್, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕಾವೇರಿ ಆಂದೋಲನ ಸಂಚಾಲಕ ಚಂದ್ರಮೋಹನ್, ಕೇಂದ್ರ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ರಘು ಪಾಲ್ಗೊಂಡಿದ್ದರು.
ಪ್ರೇಕ್ಷಕರ ರಂಜಿಸಿದ ಯುವ ಸೌರಭ
ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಭಾಂಗಣದಲ್ಲಿ ನಡೆದ ಯುವ ಸೌರಭ ಸಾಂಸ್ಕೃತಿಕ ಕಾರ್ಯಕ್ರಮ ಪ್ರೇಕ್ಷಕರನ್ನು ರಂಜಿಸಿತು. ನಾಪೋಕ್ಲುವಿನ ಸಮೀಕ್ಷಾ ಮತ್ತು ಸಂಗಡಿಗರ ಭರತನಾಟ್ಯ ಕುಶಾಲನಗರದ ಕಾಳಿಕಾ ದೇವಿ ಮತ್ತು ತಂಡ ಪ್ರಸ್ತುತ ಪಡಿಸಿದ ಸುಗಮ ಸಂಗೀತ ಹಾಸನ ಜಿಲ್ಲೆಯ ತಟ್ಟೆಕೆರೆಯ ಉಷಾರಾಣಿ ಮತ್ತು ತಂಡ ಪ್ರದರ್ಶಿಸಿದ ಕಂಸಾಳೆ ನೃತ್ಯ ಹುಣಸೂರಿನ ಗಾವಡಗೆರೆಯ ಭರತ್ ಕುಮಾರ್ ಮತ್ತು ತಂಡದವರ ಡೊಳ್ಳುಕುಣಿತ ಹಾಗೂ ಮೈಸೂರಿನ ಎಸ್.ಸುದೀಪ್ ಸಂಗಡಿಗರು ಪ್ರದರ್ಶಿಸಿದ ‘ಆಳಿದ ಮಹಾಸ್ವಾಮಿಗಳು’ ಹಾಸ್ಯ ಭರಿತ ನಾಟಕ ಪ್ರೇಕ್ಷಕರಿಗೆ ರಂಜನೆ ನೀಡಿತು. ನಂತರ ಯುವ ಸೌರಭದಲ್ಲಿ ಭಾಗವಹಿಸಿದ್ದ ಕಲಾವಿದರಿಗೆ ಶಾಸಕ ಡಾ.ಮಂತರ್ ಗೌಡ ಪ್ರಶಸ್ತಿ ಪತ್ರ ವಿತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.