ADVERTISEMENT

ಬಿಗಿ ಬಂದೋಬಸ್ತ್: ಎಸ್ಪಿ

ಗಡಿಯಲ್ಲಿ ನಕ್ಸಲರ ಓಡಾಟ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2013, 6:23 IST
Last Updated 19 ಏಪ್ರಿಲ್ 2013, 6:23 IST

ಮಡಿಕೇರಿ: ಜಿಲ್ಲೆಯಲ್ಲಿ ಇತ್ತೀಚೆಗೆ ನಕ್ಸಲರ ಸಂಚಾರ ಕಂಡು ಬಂದಿರುವ ಹಿನ್ನೆಲೆಯಲ್ಲಿ ಮತದಾನದ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಹೆಚ್ಚಿನ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್.ಅನುಚೇತ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚುನಾವಣಾ ಸಿದ್ಧತೆ ಬಗ್ಗೆ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಶಾಂತಿಯುತ ಮತದಾನಕ್ಕೆ ಅನುವು ಮಾಡಿಕೊಡಲು ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಗತ್ಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಸಭೆ, ಸಮಾರಂಭ, ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಹಾಗೂ ಸೂಕ್ಷ್ಮ ಪ್ರದೇಶಗಳ ಮೇಲೆ ನಿಗಾ ವಹಿಸಲಾಗಿದೆ ಎಂದು ಅವರು ಹೇಳಿದರು.

ಜಿಲ್ಲೆಯ ಮತದಾರರು ನಿರ್ಭೀತಿಯಿಂದ ಮತ ಚಲಾಯಿಸಲು ಎಲ್ಲಾ ರೀತಿಯ ರಕ್ಷಣೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಗೃಹ ರಕ್ಷಕ ದಳವನ್ನು ಸಹ ಈ ಕಾರ್ಯಕ್ಕೆ ನಿಯೋಜಿಸಲಾಗಿದೆ ಎಂದರು.

ಜಿಲ್ಲಾಧಿಕಾರಿ ಡಾ. ಎನ್.ವಿ. ಪ್ರಸಾದ್ ಮಾತನಾಡಿ, ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆ ನಡೆಸಲು ಎಲ್ಲಾ ರೀತಿಯ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲೆಗೆ ಚುನಾವಣಾ ಪೊಲೀಸ್ ವೀಕ್ಷಕರಾಗಿ ಆಗಮಿಸಿರುವ ಅತುಲ್ ಕಾರ್ವಲ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ, ಫ್ಲೈಯಿಂಗ್ ಸ್ಕ್ವಾಡ್ ನೋಡಲ್ ಅಧಿಕಾರಿ ಸಿ.ಜಗನ್ನಾಥ, ಅಂಚೆ ಮತಪತ್ರ ನೋಡಲ್ ಅಧಿಕಾರಿ ಸತ್ಯನಾರಾಯಣ, ಚುನಾವಣಾ ತರಬೇತಿ ನೋಡಲಾಧಿಕಾರಿ ಲಿಂಗರಾಜು, ಚುನಾವಣಾ ವೀಕ್ಷಕರ ಸಂಪರ್ಕಧಿಕಾರಿಗಳಾದ ಬಿ.ಆರ್. ಶೆಟ್ಟಿ, ಪ್ರಮೋದ್, ಚುನಾವಣಾ ತಹಶೀಲ್ದಾರ್ ಚೌಡಯ್ಯ, ಚುನಾವಣಾ ಶಿರಸ್ತೆದಾರರಾದ ಪ್ರವೀಣ್ ಕುಮಾರ್, ಅನಿಲ್ ಕುಮಾರ್, ಜಯಕುಮಾರ್, ಕೃಷ್ಣ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.