ADVERTISEMENT

ಬಿಜೆಪಿ ಹ್ಯಾಟ್ರಿಕ್ ಗೆಲುವು: ಎಲ್ಲೆಡೆ ವಿಜಯೋತ್ಸವ

​ಪ್ರಜಾವಾಣಿ ವಾರ್ತೆ
Published 16 ಮೇ 2018, 12:49 IST
Last Updated 16 ಮೇ 2018, 12:49 IST

ಸೋಮವಾರಪೇಟೆ: ತೀವ್ರ ಕೂತೂಹಲದಿಂದ ಕೂಡಿದ್ದ ಮಡಿಕೇರಿ ವಿಧಾನಸಭಾ ಚುನಾವಣೆ ಫಲಿತಾಂಶ ಮಂಗಳವಾರ ಹೊರ ಬೀಳುತ್ತಿದ್ದಂತೆ ಬಿಜೆಪಿ ಪಕ್ಷದ ವತಿಯಿಂದ ಇಲ್ಲಿನ ಪುಟ್ಟಪ್ಪ ವೃತ್ತದಲ್ಲಿ ವಿಜಯೋತ್ಸವ ಆಚರಿಸಲಾಯಿತು.

ಹಾಲಿ ಶಾಸಕ ಅಪ್ಪಚ್ಚು ರಂಜನ್‌ ಅವರು ಕ್ಷೇತ್ರದಲ್ಲಿ ದಾಖಲೆಯ ಐದನೇ ಭಾರಿಗೆ ಗೆಲುವು ಸಾಧಿಸಿದ್ದಲ್ಲದೆ, ಹ್ಯಾಟ್ರಿಕ್ ಗೆಲುವಿನೊಂದಿಗೆ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಸಿದರು. ಪ್ರಸಕ್ತ ಚುನಾವಣೆಯಲ್ಲಿ ಆರಂಭದಿಂದಲೇ ಬಿಜೆಪಿ ಹಾಗೂ ಜೆಡಿಎಸ್ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದ್ದ ಹಿನ್ನೆಲೆಯಲ್ಲಿ ಫಲಿತಾಂಶಕ್ಕಾಗಿ ಮತದಾರರು ಕಾತುರದಿಂದ ಎದುರು ನೋಡುತ್ತಿದ್ದರು.

ಜೆಡಿಎಸ್‌ ಪಕ್ಷದ ಅಭ್ಯರ್ಥಿ ಗೆಲುವು ದಾಖಲಿಸುತ್ತಾರೆ ಎಂದು ನಿರೀಕ್ಷಿಸಿದ್ದ ಮತದಾರರು, ಬಿಜೆಪಿಯ ಅಪ್ಪಚ್ಚು ರಂಜನ್‌ 16,015 ಮತಗಳ ಅಂತರದಿಂದ ಜಯ ಸಾಧಿಸುವ ಮೂಲಕ ಮತದಾರರ ಹುಬ್ಬೇರುವಂತೆ ಮಾಡಿದ್ದಾರೆ.

ADVERTISEMENT

ಪಕ್ಷದ ಅಭ್ಯರ್ಥಿ ಅಪ್ಪಚ್ಚು ರಂಜನ್‌ ಅವರ ಗೆಲುವಿನ ಕುರಿತು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಿ.ಡಿ.ಮಂಜುನಾಥ್ ಪ್ರತಿಕ್ರಿಯಿಸಿ, ಕೊಡಗು ಬಿಜೆಪಿ ಭದ್ರಕೋಟೆ ಎಂದು ಮತ್ತೊಮ್ಮೆ ಸಾಬೀತಾಗಿದೆ ಎಂದರು.

ಹ್ಯಾಟ್ರಿಕ್ ಗೆಲುವು!
1952ರಿಂದ ಆರಂಭಗೊಂಡ ರಾಜ್ಯ ವಿಧಾನಸಭಾ ಚುನಾವಣೆಯ ಇತಿಹಾಸದಲ್ಲಿ ಈವರೆಗೆ ಯಾವುದೇ ಪಕ್ಷದ ಅಭ್ಯರ್ಥಿಗಳು ಕೂಡ ಹ್ಯಾಟ್ರಿಕ್ ಗೆಲುವು ಸಾಧಿಸಿರಲಿಲ್ಲ. ಆದರೆ ಈ ಬಾರಿಯ ಚುನಾವಣೆಯಲ್ಲಿ ಅಪ್ಪಚ್ಚುರಂಜನ್‌ ಅವರು ಸತತ ಮೂರನೇ ಬಾರಿಗೆ ಜಯಭೇರಿ ಸಾಧಿಸುವ ಮೂಲಕ ಇತಿಹಾಸ ನಿರ್ಮಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.