ADVERTISEMENT

ವಸ್ತುನಿಷ್ಠ ವರದಿಗೆ ಆದ್ಯತೆ ನೀಡಲು ಭಾರದ್ವಾಜ್ ಸಲಹೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2012, 5:40 IST
Last Updated 2 ಆಗಸ್ಟ್ 2012, 5:40 IST

ಸೋಮವಾರಪೇಟೆ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪತ್ರಕರ್ತರು ವಸ್ತುನಿಷ್ಠ ವರದಿಗಳಿಗೆ ಆದ್ಯತೆ ನೀಡಬೇಕೆಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಆನಂದತೀರ್ಥ ಕೆ.ಭಾರದ್ವಾಜ್ ಸಲಹೆ ನೀಡಿದರು.

ತಾಲ್ಲೂಕು ಪತ್ರಕರ್ತರ ಸಂಘವು ಅರಣ್ಯ ಇಲಾಖೆ ಸಹಯೋಗದೊಂದಿಗೆ  ಕಾಜೂರು  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ ಪತ್ರಿಕಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.

`ಇಂದಿನ ದಿನಗಳಲ್ಲಿ ಪತ್ರಕರ್ತರು ಅಗತ್ಯಕ್ಕಿಂತ ಹೆಚ್ಚು ಕ್ರಿಯಾಶೀಲರಾಗಿರುವುದು ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪ್ರತಿಕೂಲ ಪರಿಣಾಮ ಉಂಟುಮಾಡುತ್ತಿದೆ~ ಎಂದು ಅಭಿಪ್ರಾಯಪಟ್ಟರು.

ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ತಾಲ್ಲೂಕು ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಡಿ.ಎಸ್.ಪೊನ್ನಪ್ಪ ಚಾಲನೆ ನೀಡಿದರು. ನಂತರ ನಡೆದ ಸಭಾ ಕಾರ್ಯಕ್ರಮವನ್ನು ಜಿಲ್ಲಾ ಪರ್ತಕರ್ತರ ಸಂಘದ ಅಧ್ಯಕ್ಷ ಶ್ರೀಧರ್ ನೆಲ್ಲಿತ್ತಾಯ ಉದ್ಘಾಟಿಸಿ ಮಾತನಾಡಿದರು.

ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸಯ್ಯದ್ ಇರ್ಫಾನ್ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಅರಣ್ಯಾಧಿಕಾರಿ ವಿ.ಪಿ.ಕಾರ್ಯಪ್ಪ,  ಕ್ಷೇತ್ರ ಶಿಕ್ಷಣಾಧಿಕಾರಿ ರಾಮಚಂದ್ರರಾಜೇ ಅರಸ್, ಐಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾರನ್ ಪ್ರಮೋದ್, ಉಪಾಧ್ಯಕ್ಷ ವಿಜಯಕುಮಾರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಉಷಾ, ಮುಖ್ಯ ಶಿಕ್ಷಕ ಕೃಷ್ಣ ಮಣಿಯಾಣಿ, ಗ್ರಾಮ ಪಂಚಾಯಿತಿ ಸದಸ್ಯರಾದ ಶೋಭ ಹಾಗೂ ದಾಕ್ಷಾಯಣಿ ಉಪಸ್ಥಿತರಿದ್ದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಐಗೂರು ಪ್ರೌಢಶಾಲೆಯ ತೇಜಸ್ವಿನಿ ಹಾಗೂ ಏಳನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಕಾಜೂರು ಪ್ರಾಥಮಿಕ ಶಾಲೆಯ ಪೂಜಾ ಅವರಿಗೆ ಪ್ರೋತ್ಸಾಹಧನ ವಿತರಿಸಲಾಯಿತು. ಡಿ.ಪಿ.ಲೋಕೇಶ್ ಸ್ವಾಗತಿಸಿ, ಕವನ್ ಕಾರ್ಯಪ್ಪ ನಿರೂಪಿಸಿ, ವಿಜಯ ಹಾನಗಲ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.