ADVERTISEMENT

ಸಂಪೂರ್ಣ ಸ್ವಚ್ಛತಾ ಆಂದೋಲನ: ಜಾಗೃತಿ ಅಗತ್ಯ

​ಪ್ರಜಾವಾಣಿ ವಾರ್ತೆ
Published 19 ಜನವರಿ 2011, 8:55 IST
Last Updated 19 ಜನವರಿ 2011, 8:55 IST

ಮಡಿಕೇರಿ: ಜಿಲ್ಲೆಯಲ್ಲಿ ಬಾಕಿಯಿರುವ 47 ಗ್ರಾಮ ಪಂಚಾಯ್ತಿಗಳಲ್ಲಿ ಹಮ್ಮಿಕೊಂಡಿರುವ ಸಂಪೂರ್ಣ ಸ್ವಚ್ಛತಾ ಆಂದೋಲನ ಕಾರ್ಯಕ್ರಮದ ಸುಸ್ಥಿರತೆ ಕಾಪಾಡಲು ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯವಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಕೃಷ್ಣಪ್ಪ ಅಭಿಪ್ರಾಯಪಟ್ಟಿದ್ದಾರೆ.

ತಮ್ಮ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ನೀರು ಮತ್ತು ನೈರ್ಮಲ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯ 51 ಗ್ರಾಮ ಪಂಚಾಯ್ತಿಗಳು ನಿರ್ಮಲ ಗ್ರಾಮ ಪುರಸ್ಕಾರ ಪಡೆದಿದ್ದು, ಉಳಿದ 47 ಗ್ರಾಮ ಪಂಚಾಯ್ತಿಗಳಲ್ಲಿ ತೀವ್ರಗತಿಯಲ್ಲಿ ಸಂಪೂರ್ಣ ಸ್ವಚ್ಛತಾ ಆಂದೋಲನ ಕಾರ್ಯಕ್ರಮ ರೂಪಿಸಿ 2011ರ ಮಾರ್ಚ್ ಅಂತ್ಯದ ವೇಳೆಗೆ ಶೇ 100ರಷ್ಟು ಪ್ರಗತಿ ಸಾಧಿಸಬೇಕಿದೆ. ಈ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ಸಂಪೂರ್ಣ ಸ್ವಚ್ಛತಾ ಆಂದೋಲನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲೆಯಲ್ಲಿ 38,823 ಬಿಪಿಎಲ್ ಕುಟುಂಬಗಳ ಪೈಕಿ 33,996 ಕುಟುಂಬಗಳಿಗೆ ಶೌಚಾಲಯ ನಿರ್ಮಿಸಿಕೊಡಲಾಗಿದೆ. ಎಪಿಎಲ್‌ನ 18,095 ಕುಟುಂಬಗಳ ಶೌಚಾಲಯ ನಿರ್ಮಾಣದಲ್ಲಿ ಶೇ 100ರಷ್ಟು ಪ್ರಗತಿ ಸಾಧಿಸಲಾಗಿದೆ. 179 ಶಾಲಾ ಶೌಚಾಲಯಗಳಲ್ಲಿ ಶೇ 97ರಷ್ಟು ಹಾಗೂ 287 ಅಂಗನವಾಡಿಗಳಲ್ಲಿ 266 ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂದು ಅವರು ತಿಳಿಸಿದರು.

ಪರಿಸರ ಸ್ನೇಹಿ ಶೌಚಾಲಯ ಕುರಿತು ‘ಭಗೀರಥ’ ಸ್ವಯಂಸೇವಾ ಸಂಸ್ಥೆಯಿಂದ ತಾಲ್ಲೂಕುವಾರು ಶಿಕ್ಷಕರು, ಬಿಆರ್‌ಪಿ, ಸಿಆರ್‌ಪಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗಾರೆ ಕೆಲಸಗಾರರಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ಸಂಪೂರ್ಣ ಸ್ವಚ್ಛತಾ ಆಂದೋಲನದ ಕಾರ್ಯಚಟುವಟಿಕೆ ಬಗ್ಗೆ ಹೊಸದಾಗಿ ಆಯ್ಕೆಯಾಗಿರುವ ಜಿ.ಪಂ. ಹಾಗೂ ತಾ.ಪಂ. ಸದಸ್ಯರಿಗೆ ಒಂದು ದಿನದ ಜಾಗೃತಿ ಕಾರ್ಯಾಗಾರ ಏರ್ಪಡಿಸಲಾಗುವುದು ಎಂದು ಅವರು ಹೇಳಿದರು.

ಬಿಪಿಎಲ್‌ನ ವೈಯಕ್ತಿಕ ಫಲಾನುಭವಿಗಳು ಸುಸ್ಥಿರತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಪ್ರತಿ ತಾಲ್ಲೂಕಿನಿಂದ 100 ಮಂದಿಯನ್ನು ಆಯ್ಕೆ ಮಾಡಿ ಉತ್ತಮ ಸಾಧನೆ ಮಾಡುವ ಗ್ರಾಮ ಪಂಚಾಯ್ತಿಗಳಿಗೆ ಶೈಕ್ಷಣಿಕ ಪ್ರವಾಸ ಏರ್ಪಡಿಸಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತೆ ಕುರಿತು ಅರಿವು ಮೂಡಿಸಲು ಶಾಲೆ, ಕ್ಲಸ್ಟರ್, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಚಿತ್ರಕಲೆ, ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಇದರ ಸದುಪಯೋಗವನ್ನು ಶಾಲಾ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ಕೋರಿದರು.

ಜ. 26ರಿಂದ 98 ಗ್ರಾ.ಪಂ.ಗಳಲ್ಲಿ ಬೀದಿ ನಾಟಕ, ವಿಚಾರ ಸಂಕಿರಣ, ಟಿವಿ, ರೇಡಿಯೋ ಹಾಗೂ ರಥಯಾತ್ರೆ ಮೂಲಕ ಜನರಲ್ಲಿ ಅರಿವು ಮೂಡಿಸಲು ನೈರ್ಮಲ್ಯ ಮಾಸಾಚರಣೆ ಹಮ್ಮಿಕೊಳ್ಳಲಾಗಿದೆ. ಅಲ್ಲದೆ, ಅಗತ್ಯವಿರುವ ಶಾಲೆ ಹಾಗೂ ಗ್ರಾಮ ಪಂಚಾಯ್ತಿಗಳಲ್ಲಿ ಘನ ತ್ಯಾಜ್ಯ ವಸ್ತುಗಳನ್ನು ಶತ್ರು ಕಸ ಹಾಗೂ ಮಿತ್ರ ಕಸಗಳಾಗಿ ಬೇರ್ಪಡಿಸಿ ವಿಲೇವಾರಿ ಮಾಡಲು ಸಿಮೆಂಟ್ ತೊಟ್ಟಿಗಳನ್ನು ಅಳವಡಿಸಲಾಗುವುದು ಎಂದರು.

ಜಿ.ಪಂ. ಉಪ ಕಾರ್ಯದರ್ಶಿ ಎಸ್.ವೈ.ಬಸವರಾಜಪ್ಪ ಮಾತನಾಡಿ, ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ನೈರ್ಮಲ್ಯ ಕಾಪಾಡುವುದರ ಜತೆಗೆ, ಉತ್ತಮ ಪರಿಸರ ನಿರ್ಮಾಣ ಮಾಡುವ ದಿಸೆಯಲ್ಲಿ ಜಿ.ಪಂ. ವತಿಯಿಂದ ಸಂಪೂರ್ಣ ಸ್ವಚ್ಛತಾ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯ್ತಿಗಳಲ್ಲಿ ಯಶಸ್ವಿಯಾಗುವತ್ತ ಹೆಚ್ಚು ಗಮನಹರಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸಲಹೆ ಮಾಡಿದರು.

ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ಸುರೇಂದ್ರ, ಸಹಾಯಕ ಯೋಜನಾ ನಿರ್ದೇಶಕ ಶಬೀರ್ ಪಾಷ, ಜಿಲ್ಲಾ ನೆರವು ಘಟಕದ ಸಮಾಲೋಚಕರಾದ ಸೂರಜ್, ವಾಸುದೇವ ಹಾಗೂ ವಿವಿಧ ಇಲಾಖಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.