ADVERTISEMENT

ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2021, 14:07 IST
Last Updated 6 ಏಪ್ರಿಲ್ 2021, 14:07 IST

ಶನಿವಾರಸಂತೆ: ಸಮೀಪದ ಆಲೂರು –ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮವೊಂದರ ಗಿರಿಜನ ಹಾಡಿಯ ಬಾಲಕಿ ಮೇಲೆ ಅದೇ ಹಾಡಿಯ ಜೇನುಕುರುಬ ಸಮುದಾಯದ ಲೋಹಿತ್ (20) ಎಂಬಾತ ಅತ್ಯಾಚಾರ ಎಸಗಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಬಾಲಕಿಯ ತಾಯಿ ಹಾಡಿಯ ಕೂಲಿಕಾರ್ಮಿಕ ಮಹಿಳೆಯಾಗಿದ್ದು, ತಂದೆ 15 ವರ್ಷಗಳ ಹಿಂದೆಯೇ ನಾಪತ್ತೆಯಾಗಿದ್ದಾರೆ. 10ನೇ ತರಗತಿವರೆಗೆ ವ್ಯಾಸಂಗ ಮಾಡಿರುವ ಬಾಲಕಿ, ಮನೆಯಲ್ಲಿಯೇ ಇರುತ್ತಿದ್ದಳು. ಆಕೆಯನ್ನು ಗಮನಿಸಿದ ಆಶಾ ಕಾರ್ಯಕರ್ತೆಯರು ಸಂಶಯಗೊಂಡು ಆಲೂರು ಸಿದ್ದಾಪುರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ವೈದ್ಯರಿಂದ ಪರೀಕ್ಷೆ ಮಾಡಿಸಿದ್ದಾರೆ. ಆಗ ಬಾಲಕಿ 6 ತಿಂಗಳ ಗರ್ಭಿಣಿಯಾಗಿರುವ ವಿಚಾರ ತಿಳಿದಿದೆ.

ಈ ಬಗ್ಗೆ ಮಗಳನ್ನು ತಾಯಿ ವಿಚಾರಿಸಿದಾಗ, ಲೋಹಿತ್ ಎಂಬಾತ 1 ವರ್ಷದಿಂದ ತನ್ನನ್ನು ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಂಬಿಸಿ ಈ ರೀತಿ ಮಾಡಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಂದು ಹಲವಾರು ಬಾರಿ ಅತ್ಯಾಚಾರವೆ ಎಸಗಿದ್ದಾನೆ ಎಂದು ತಿಳಿಸಿದ್ದಾಳೆ.

ADVERTISEMENT

ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಶನಿವಾರ ದೂರು ನೀಡಿದ್ದು ಪೋಕ್ಸೊ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಲೋಹಿತ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.